ಶುಕ್ಲಾಂಬರಧರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ
ಪ್ರಸನ್ನವದನಂ ಧ್ಯಾಯೇತ್ ಸರ್ವವಿಘ್ನೋಪಶಾಂತಯೇ

ನಾರಾಯಣಂ ನಮಸ್ಕೃತ್ಯ ನರಂ ಚೈವ ನರೋತ್ತಮಮ್
ದೇವೀಂ ಸರಸ್ವತೀಂ ವ್ಯಾಸಂ ತತೋ ಜಯಮುದೀರಯೇತ್

 

ಕುಮಾರವ್ಯಾಸನ
ಕರ್ಣಾಟ ಭಾರತ ಕಥಾಮಂಜರಿ
ಆದಿಪರ್ವ

ಪೀಠಿಕಾ ಸಂಧಿ

ಶ್ರೀವನಿತೆಯರಸನೆವಿಮಲರಾ
ಜೀವ ಪೀಠನ ಪಿತನೆ ಜಗಕತಿ
ಪಾವನನೆ ಸನಕಾದಿ ಸಜ್ಜನನಿಕರ ದಾತಾರ
ರಾವಣಾಸುವ ಮಥನ ಶ್ರವಣ
ಸುಧಾ ವಿನೂತನ ಕಥನ ಕಾರಣ
ಕಾವುದಾನತ ಜನವ ಗದುಗಿನ ವೀರನಾರಯಣ ೧

ಶರಣಸಂಗವ್ಯಸನ ಭುಜಗಾ
ಭರಣನಮರ ಕಿರೀಟ ಮಂಡಿತ
ಚರಣ ಚಾರುಚರಿತ್ರ ನಿರುಪಮ ಭಾಳಶಿಖಿನೇತ್ರ
ಕರಣ ನಿರ್ಮಲ ಭಜಕರಘ ಸಂ
ಹರಣ ದಂತಿ ಚಮೂರು ಚರ್ಮಾಂ
ಬರನೆ ಸಲಹುಗೆ ಭಕುತ ಜನರನು ಪಾರ್ವತೀರಮಣ  ೨

ವರ ಮಣಿಗಳಿಂದೆಸೆವ ಮೌಳಿಯ
ಸರಸಿಜಾರಿಯ ಕಿರಣದೋಳಿಯ
ವಿರಚಿಸಿದ ಸಿಂಧೂರಭಾಳದಿ ಕುಣಿವ ಕುಂತಳದ
ಕರಿ ನಿಭಾಕೃತಿಯೆನಿಪ ವದನದ
ಕರದ ಪಾಶದ ಮೋದಕದ ವಿ
ಸ್ತರದ ಗಣಪತಿ ಮಾಡೆಮಗೆ ನಿರ್ವಿಘ್ನದಾಯಕವ  ೩

ಗಜಮುಖನೆ ಮೆರೆವೇಕದಂತನೆ
ನಿಜಗುಣಾನ್ವಿತ ಪರಶುಧಾರನೆ
ರಜತಗಿರಿಗೊಡೆಯನ ಕುಮಾರನೆ ವಿದ್ಯೆವಾರಿಧಿಯೆ
ಅಜನು ಹರಿರುದ್ರಾದಿಗಳು ನೆರೆ
ಭಜಿಸುತಿಹರನವರತ ನಿನ್ನನು
ತ್ರಿಜಗವಂದಿತ ಗಣಪ ಮಾಳ್ಪುದು ಮತಿಗೆ ಮಂಗಳವ ೪

ವಾರಿಜಾಸನೆ ಸಕಲಶಾಸ್ತ್ರ ವಿ
ಚಾರದುದ್ಭವೆ ವಚನರಚನೋ
ದ್ಧಾರೆ ಶ್ರುತಿ ಪೌರಾಣದಾಗಮ ಸಿದ್ಧಿದಾಯಕಿಯೆ
ಶೌರಿ ಸುರಪತಿ ಸಕಲಮುನಿಜನ
ಸೂರಿಗಳಿಗನುಪಮದ ಯುಕುತಿಯೆ
ಶಾರದೆಯೆ ನರ್ತಿಸುಗೆ ನಲಿದೊಲಿದೆನ್ನ ಜಿಹ್ವೆಯಲಿ  ೫

ಆದಿ ನಾರಾಯಣಿ ಪರಾಯಣಿ
ನಾದಮಯೆ ಗಜಲಕ್ಷ್ಮಿ ಸತ್ವಗು
ಣಾಧಿ ದೇವತೆ ಅಮರ ವಂದಿತ ಪಾದಪಂಕರುಹೆ
ವೇದಮಾತೆಯೆ ವಿಶ್ವತೋಮುಖೆ
ಯೈದು ಭೂತಾಧಾರಿಯೆನಿಪೀ
ದ್ವಾದಶಾತ್ಮ ಜ್ಯೋತಿರೂಪಿಯೆ ನಾದೆ ಶಾರದೆಯೆ ೬

ವೀರ ನಾರಾಯಣನೆ ಕವಿ ಲಿಪಿ
ಕಾರ ಕುವರವ್ಯಾಸ ಕೇಳುವ
ಸೂರಿಗಳು ಸನಕಾದಿಗಳು ಜಂಗಮ ಜನಾರ್ದನರು
ಚಾರುಕವಿತೆಯ ಬಳಕೆಯಲ್ಲ ವಿ
ಚಾರಿಸುವಡಳವಲ್ಲ ಚಿತ್ತವ
ಧಾರು ಹೋ ಸರ್ವಜ್ಞರಾದರು ಸಲುಗೆ ಬಿನ್ನಪವ  ೭

ಶ್ರೀಮದಮರಾಧೀಶ ನತಪದ
ತಾಮರಸ ಘನವಿಪುಳ ನಿರ್ಮಲ
ರಾಮನನುಪಮ ಮಹಿಮ ಸನ್ಮುನಿ ವಿನುತ ಜಗಭರಿತ
ಶ್ರೀಮದೂರ್ಜಿತಧಾಮ ಸುದಯಾ
ನಾಮನಾಹವ ಭೀಮ ರಘುಕುಲ
ರಾಮ ರಕ್ಷಿಸುವೊಲಿದು ಗದುಗಿನ ವೀರನಾರಯಣ  ೮

ಶರಧಿಸುತೆ ಸನಕಾದಿ ವಂದಿತೆ
ಸುರನರೋರಗ ಮಾತೆ ಸುಜನರ
ಪೊರೆವ ದಾತೆ ಸುರಾಗ್ರಗಣ್ಯ ಸುಮೌನಿ ವರಸ್ತುತ್ಯೆ
ಪರಮ ಕರುಣಾ ಸಿಂಧು ಪಾವನ
ಚರಿತೆ ಪದ್ಮಜ ಮುಖ್ಯ ಸಕಲಾ
ಮರ ಸುಪೂಜಿತೆ ಲಕ್ಷ್ಮಿ ಕೊಡುಗೆಮಗಧಿಕ ಸಂಪದವ  ೯

ಗಜಮುಖನ ವರಮಾತೆ ಗೌರಿಯೆ
ತ್ರಿಜಗದರ್ಚಿತ ಚಾರು ಚರಣಾಂ
ಬುಜೆಯೆ ಪಾವನಮೂರ್ತಿ ಪದ್ಮಜ ಮುಖ್ಯ ಸುರಪೂಜ್ಯೆ
ಭಜಕರಘ ಸಂಹರಣೆ ಸುಜನ
ವ್ರಜ ಸುಸೇವಿತೆ ಮಹಿಷಮರ್ದಿನಿ
ಭುಜಗ ಭೂಷಣನರಸಿ ಕೊಡು ಕಾರುಣ್ಯದಲಿ ಮತಿಯ ೧೦

ದುರಿತಕುಲಗಿರಿ ವಜ್ರದಂಡನು
ಧರೆಯ ಜಂಗಮಮೂರ್ತಿ ಕವಿ ವಾ
ರಿರುಹ ದಿನಮಣಿ ನಿಖಿಲ ಯತಿಪತಿ ದಿವಿಜ ವಂದಿತನು
ತರಳನನು ತನ್ನವನೆನುತ ಪತಿ
ಕರಿಸಿ ಮಗನೆಂದೊಲಿದು ಕರುಣದಿ
ವರವನಿತ್ತನು ದೇವ ವೇದವ್ಯಾಸ ಗುರುರಾಯ  ೧೧

ವಂದಿತಾಮಳ ಚರಿತನಮರಾ
ನಂದಯದುಕುಲ ಚಕ್ರವರ್ತಿಯ
ಕಂದ ನತಸಂಸಾರ ಕಾನನ ಘನ ದವಾನಳನು
ನಂದನಂದನ ಸನ್ನಿಭನು ಸಾ
ನಂದದಿಂದಲೆ ನಮ್ಮುವನುಕೃಪೆ
ಯಿಂದ ಸಲಹುಗೆ ದೇವ ಜಗದಾರಾಧ್ಯ ಗುರುರಾಯ  ೧೨

ತಿಳಿಯ ಹೇಳುವೆ ಕೃಷ್ಣ ಕಥೆಯನು
ಇಳೆಯ ಜಾಣರು ಮೆಚ್ಚುವಂತಿರೆ
ನೆಲೆಗೆ ಪಂಚಮ ಶ್ರುತಿಯನೊರೆವೆನು ಕೃಷ್ಣ ಮೆಚ್ಚಲಿಕೆ
ಹಲವು ಜನ್ಮದ ಪಾಪ ರಾಶಿಯ
ತೊಳೆವ ಜಲವಿದು ಶ್ರೀಮದಾಗಮ
ಕುಲಕೆ ನಾಯಕ ಭಾರತಾಕೃತಿ ಪಂಚಮ ಶ್ರುತಿಯ ೧೩

ಪದದ ಪ್ರೌಢಿಯ ನವರಸಂಗಳ
ವುದಿತವೆನುವಭಿಧಾನ ಭಾವವ
ಬೆದಕಲಾಗದು ಬಲ್ಲ ಪ್ರೌಢರಮಿ ಕಥಾಂತರಕೆ
ಇದ ವಿಚಾರಿಸೆ ಬಱಿಯ ತೊಳಸಿಯ
ವುದಕದಂತಿರೆಯಿಲ್ಲಿ ನೋಳ್ಪುದು
ಪದುಮನಾಭನ ಮಹಿಮೆ ಧರ್ಮವಿಚಾರ ಮಾತ್ರವನು  ೧೪

ಹಲಗೆ ಬಳಪವ ಪಿಡಿಯದೊಂದ
ಗ್ಗಳಿಕೆ ಪದವಿಟ್ಟಳುಪದೊಂದ
ಗ್ಗಳಿಕೆ ಪರರೊಡ್ಡವದ ರೀತಿಯ ಕೊಳ್ಳದಗ್ಗಳಿಕೆ
ಬಳಸಿ ಬರೆಯಲು ಕಂಠಪತ್ರದ
ವುಲುಹುಗೆಡದಗ್ಗಳಿಕೆಯೆಂಬೀ
ಬಲುಹು ಗದುಗಿನ ವೀರನಾರಾಯಣನ ಕಿಂಕರಗೆ ೧೫

ಕೃತಿಯನವಧರಿಸುವುದು ಸುಕವಿಯ
ಮತಿಗೆ ಮಂಗಳವೀವುದಧಿಕರು
ಮಥಿಸುವುದು ತಿದ್ದುವುದು ಮೆರೆವುದು ಲೇಸ ಸಂಚಿಪುದು
ನುತಗುಣರು ಭಾವುಕರು ವರಪಂ
ಡಿತರು ಸುಜನರು ಸೂಕ್ತಿಕಾರರು
ಮತಿಯನೀವುದು ವೀರನಾರಾಯಣನ ಕಿಂಕರಗೆ  ೧೬

ತಿಣಿಕಿದನು ಫಣಿರಾಯ ರಾಮಾ
ಯಣದ ಕವಿಗಳ ಭಾರದಲಿ ತಿಂ
ತಿಣಿಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ
ಬಣಗು ಕವಿಗಳ ಲೆಕ್ಕಿಪನೆ ಸಾ
ಕೆಣಿಸದಿರು ಶುಕರೂಪನಲ್ಲವೆ
ಕುಣಿಸಿ ನಗನೇ ಕವಿ ಕುಮಾರವ್ಯಾಸನುಳಿದವರ ೧೭

ಹರಿಯ ಬಸುರೊಳಗಖಿಳ ಲೋಕದ
ವಿರಡವಡಗಿಹವೋಲು ಭಾರತ
ಶರಧಿಯೊಳಗಡಗಿಹವನೇಕ ಪುರಾಣ ಶಾಸ್ತ್ರಗಳು
ಪರಮ ಭಕ್ತಿಯಲೀ ಕೃತಿಯನವ
ಧರಿಸಿ ಕೇಳ್ದಾ ನರರ ದುರಿತಾಂ
ಕುರದ ಬೇರಿನ ಬೇಗೆಯೆಂದರುಹಿದನು ಮುನಿನಾಥ  ೧೮

ಅರಸುಗಳಿಗಿದು ವೀರ ದ್ವಿಜರಿಗೆ
ಪರಮವೇದದ ಸಾರ ಯೋಗೀ
ಶ್ವರರ ತತ್ವವಿಚಾರ ಮಂತ್ರಿಜನಕ್ಕೆ ಬುದ್ಧಿಗುಣ
ವಿರಹಿಗಳ ಶೃಂಗಾರ ವಿದ್ಯಾ
ಪರಿಣತರಲಂಕಾರ ಕಾವ್ಯಕೆ
ಗುರುವೆನಲು ರಚಿಸಿದ ಕುಮಾರವ್ಯಾಸ ಭಾರತವ  ೧೯

ವೇದ ಪಾರಾಯಣದ ಫಲ ಗಂ
ಗಾದಿ ತೀರ್ಥಸ್ನಾನ ಫಲ ಕೃ
ಚ್ಛ್ರಾದಿ ತಪಸಿನ ಫಲವು ಜ್ಯೋತಿಷ್ಟೋಮಯಾಗಫಲ
ಮೇದಿನಿಯನೊಲಿದಿತ್ತ ಫಲ ವ
ಸ್ತ್ರಾದಿ ಕನ್ಯಾದಾನ ಫಲವಹು
ದಾದರಿಸಿ ಭಾರತದೊಳೊಂದಕ್ಷರವ ಕೇಳ್ದರಿಗೆ  ೨೦

ಹೇಮ ಖುರ ಶೃಂಗಾಭರಣದಲಿ
ಕಾಮಧೇನು ಸಹಸ್ರ ಕಪಿಲೆಯ
ಸೋಮ ಸೂರ್ಯ ಗ್ರಹಣದಲಿ ಸುರನದಿಯ ತೀರದಲಿ
ಶ್ರೀಮುಕುಂದಾರ್ಪಣವೆನಿಸಿ ಶತ
ಭೂಮಿದೇವರಿಗಿತ್ತ ಫಲವಹು
ದೀ ಮಹಾಭಾರತದೊಳೊಂದಕ್ಷರವ ಕೇಳ್ದರಿಗೆ ೨೧

ಚೋರ ನಿಂದಿಸಿ ಶಶಿಯ ಬೈದಡೆ
ಕ್ಷೀರವನು ಕ್ಷಯರೋಗಿ ಹಳಿದರೆ
ವಾರಣಾಸಿಯ ಹೆಳವ ನಿಂದಿಸಿ ನಕ್ಕರೇನಹುದು
ಭಾರತದ ಕಥನ ಪ್ರಸಂಗವ
ಕ್ರೂರ ಕರ್ಮಿಗಳೆತ್ತ ಬಲ್ಲರು
ಘೋರ ರೌರವವನ್ನು ಕೆಡಿಸುಗು ಕೇಳ್ದ ಸಜ್ಜನರ  ೨೨

ವೇದಪುರುಷನ ಸುತನ ಸುತನ ಸ
ಹೋದರನ ಹೆಮ್ಮಗನ ಮಗನ ತ
ಳೋದರಿಯ ಮಾತುಳನ ರೂಪನನತುಳ ಭುಜಬಲದಿ
ಕಾದಿ ಗೆಲಿದನನಣ್ಣನವ್ವೆಯ
ನಾದಿನಿಯ ಜಠರದಲಿ ಜನಿಸಿದ
ನಾದಿ ಮೂರುತಿ ಸಲಹೊ ಗದುಗಿನ ವೀರನಾರಯಣ ೨೩