ಕನ್ನಡನಾಡು ಏಕೀಕರಣಗೊಂಡು ಐವತ್ತು ವರ್ಷ ತುಂಬಿದ ಚಿನ್ನದ ಹಬ್ಬದ ಹರ್ಷದ ಈ ಸಂದರ್ಭದಲ್ಲಿ ಕನ್ನಡ ವಿಶ್ವವಿದ್ಯಾಲಯವು ಕನ್ನಡವನ್ನು ಕಟ್ಟಿದ ಹಿರಿಯರ ಸಾಹಿತ್ಯ ಕೃತಿಗಳನ್ನು ಪ್ರಕಟಿಸುವ ಕನಸಿಗೆ ಹೊನ್ನಾರುಮಾಲೆ ಇಲ್ಲಿ ರೂಪು ತಾಳಿದೆ. ಕೃಷಿ ಸಂಸ್ಕೃತಿಯನ್ನು ನೆಲದ ಸಂಸ್ಕೃತಿಯನ್ನಾಗಿ ಭಾವಿಸಿ ಪರಿಭಾವಿಸಿ ಕಟ್ಟಿ ಬೆಳೆಸಿದ ಕನ್ನಡನಾಡಿನಲ್ಲಿ ಕನ್ನಡ ಸಾಹಿತ್ಯ ಸಂಸ್ಕೃತಿಯ ಬೀಜವನ್ನು ಬಿತ್ತಿ ಚಿನ್ನದ ಬೆಳೆಗಳನ್ನು ಬೆಳೆದ ಹಿರಿಯ ಬೇಸಾಯಗಾರರ ಒಂದೊಂದು ಹೊಸ ಬೆಳೆಯನ್ನು ನಾಡಿಗೆ ಒಪ್ಪಿಸುವ ಧನ್ಯತಾ ಭಾವ ನಮ್ಮದು. ಹೀಗೆ ಹೊನ್ನಾರುಮಾಲೆ ಚಿನ್ನದ ಬೆಳೆಯೂ ಹೌದು, ಕನ್ನಡದ ಚಿಣ್ಣರಿಗೆ ಹೊಸಬೆಳೆ ಬೆಳೆಯಲು ಪ್ರೇರಣೆಯೂ ಹೌದು.

ಕಳೆದ ಐವತ್ತು ವರ್ಷಗಳಿಂದ ಕನ್ನಡ ಸಾಹಿತ್ಯ ಸಂಸ್ಕೃತಿಯ ಮಣ್ಣಿನಲ್ಲಿ ತಮ್ಮ ಅನುಭವ ಮತ್ತು ಅಧ್ಯಯನದ ಮೂಲಕ ಉತ್ಸಾಹ ಪ್ರೀತಿ ಮತ್ತು ಪರಿಶ್ರಮಗಳಿಂದ ನಿರಂತರವಾಗಿ ಕನ್ನಡದ ಬಹುಬೆಳೆಗಳನ್ನು ಬೆಳೆಸಿಕೊಂಡು ಬಂದ ಹಿರಿಯರ ಹೊಸಬೆಳೆಯ ಕನ್ನಡ ಕಾವ್ಯತತ್ತ್ವ ಚಿಂತನೆಯಲ್ಲಿ ಅನನ್ಯ ಫಲಗಳನ್ನು ಪಡೆಯಲಾಗಿದೆ. ಸಾಹಿತ್ಯ, ಬದುಕು, ಸಂಸ್ಕೃತಿ ಇವುಗಳ ಬಗ್ಗೆ ಐವತ್ತು ವರ್ಷಗಳ ಹಿಂದೆ ಇದ್ದ ಪರಿಕಲ್ಪನೆಗಳು ಇಂದು ಬದಲಾವಣೆಗೊಂಡಿವೆ. ಯಾವುದು ಸಾಹಿತ್ಯ, ಯಾವುದು ಸಾಹಿತ್ಯ ಅಲ್ಲ ಎನ್ನುವ ಚರ್ಚೆ ಕಾಲಕಾಲಕ್ಕೆ ನಡೆದು ಬೇರೆ ಬೇರೆ ಅರ್ಥಗಳನ್ನು ಶೋಧಿಸುತ್ತ ಈ ಹಂತವನ್ನು ತಲುಪಿದೆ. ಸಾಹಿತ್ಯ ಮತ್ತು ಸಂಸ್ಕೃತಿ, ಸಾಹಿತ್ಯ ಮತ್ತು ಬದುಕು ಎನ್ನುವ ಭಿನ್ನತೆಗಳು ಕಣ್ಮರೆಯಾಗಿ ಸಂಕೀರ್ಣ ಹಾಗೂ ವೈವಿಧ್ಯದ ವಿನ್ಯಾಸಗಳು ಕಾಣಿಸಿಕೊಂಡಿವೆ. ಸೃಜನಶೀಲ ಮತ್ತು ಸೃಜನೇತರ ಎನ್ನುವ ಪ್ರಭೇದಗಳು ಸಾಹಿತ್ಯಚರ್ಚೆಗಳಲ್ಲಿ ಹಿಂದಕ್ಕೆ ಸರಿದಿವೆ. ಸಾಹಿತ್ಯದ ಪಠ್ಯ ಮತ್ತು ಪರಿಸರ ಎನ್ನುವ ವರ್ಗೀಕರಣ ಅಪ್ರಸ್ತುತವಾಗಿದೆ. ಸಾಹಿತ್ಯಕ, ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ, ರಾಜಕೀಯ ಎನ್ನುವ ಪರಿಭಾಷೆಗಳು ಈಗ ಪ್ರತ್ಯೇಕ ಅಸ್ತಿತ್ವಗಳನ್ನು ಕಳೆದುಕೊಂಡು ಒಂದು ಇನ್ನೊಂದರೊಡನೆ ಮಿಳಿತವಾಗಿ ‘ಸಾಹಿತ್ಯ’ ಎನ್ನುವುದು ಸರ್ವ ವ್ಯಾಪಿಯಾಗಿದೆ ಮತ್ತು ಸರ್ವರಿಗೂ ಸಲ್ಲುವಂತದ್ದಾಗಿದೆ.

ಕನ್ನಡ ವಿಶ್ವವಿದ್ಯಾಲಯವು ಕಳೆದ ಹದಿನೈದು ವರ್ಷಗಳಿಂದ ‘ಸಾಹಿತ್ಯ’ದ ಪ್ರಕ್ರಿಯೆಯನ್ನು ಕುರಿತ ಚರ್ಚೆ ಹಾಗೂ ‘ಸಾಹಿತ್ಯ’ ಪರಿಕಲ್ಪನೆಯ ನಿರಂತರ ಕಟ್ಟುವಿಕೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ಕನ್ನಡ ಭಾಷೆ-ಸಾಹಿತ್ಯ, ಭಾಷಾಂತರ, ಹಸ್ತಪ್ರತಿ, ದ್ರಾವಿಡ ಸಂಸ್ಕೃತಿ, ಮಹಿಳಾ ಅಧ್ಯಯನ, ಚರಿತ್ರೆ, ಪುರಾತತ್ವ, ಶಾಸನಶಾಸ್ತ್ರ, ಜಾನಪದ, ಬುಡಕಟ್ಟು, ಅಭಿವೃದ್ಧಿ, ಸಂಗೀತ, ಚಿತ್ರ, ಶಿಲ್ಪ; ಹೀಗೆ ಬಹುಬಗೆಗಳನ್ನು ಬಹು ಅಧ್ಯಯನ ಶಿಸ್ತುಗಳಲ್ಲಿ ಕನ್ನಡ ವಿಶ್ವವಿದ್ಯಾಲಯವು ಕನ್ನಡ ಸಂಸ್ಕೃತಿ ಮತ್ತು ಕನ್ನಡನಾಡನ್ನು ಹೊಸತಾಗಿ ಶೋಧಿಸುತ್ತಾ ವಿವರಿಸುತ್ತಾ ಬಂದಿದೆ. ೫೦ ವರ್ಷಗಳ ಏಕೀಕೃತ ಕನ್ನಡನಾಡಿನ ಶರೀರದಲ್ಲಿ ೧೫ ವರ್ಷಗಳ ಕನ್ನಡ ವಿಶ್ವವಿದ್ಯಾಲಯದ ಭಾವಬುದ್ಧಿಗಳು ಜೀವಧಾತುಗಳಾಗಿವೆ.

ಕರ್ನಾಟಕ ಸರಕಾರವು ಸುವರ್ಣ ಕರ್ನಾಟಕ ಆಚರಣೆಯ ಸಂದರ್ಭದಲ್ಲಿ ಕನ್ನಡ ವಿಶ್ವವಿದ್ಯಾಲಯ ಹೊನ್ನಾರುಮಾಲೆಯ ಪ್ರಕಟಣೆಯ ಯೋಜನೆಯನ್ನು ಸಂತೋಷದಿಂದ ಒಪ್ಪಿಕೊಂಡು ಕನ್ನಡ ಸಂಸ್ಕೃತಿಯ ಮಹತ್ವದ ಸಾಧನೆಯೊಂದನ್ನು ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೂ ಸಾಹಿತ್ಯ ಸಂಸ್ಕೃತಿ ಪ್ರಿಯರೂ ಆಗಿರುವ ಶ್ರೀ ಐ.ಎಂ. ವಿಠ್ಠಲಮೂರ್ತಿ ಅವರು ಹೊನ್ನಾರುಮಾಲೆಯ ಯೋಜನೆಯನ್ನು ಮೆಚ್ಚಿಕೊಂಡು ಸರಕಾರದ ಅಂಗೀಕಾರವನ್ನು ದೊರಕಿಸಿಕೊಟ್ಟು ಚಿನ್ನದ ಕನಸನ್ನು ನನಸನ್ನಾಗಿಸಿದ್ದಾರೆ. ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಎಚ್.ಡಿ. ಕುಮಾರಸ್ವಾಮಿ ಅವರು ಈ ವಿಶಿಷ್ಟ ಯೋಜನೆಯನ್ನು ಅಂಗೀಕರಿಸಿ ತಮ್ಮ ಕನ್ನಡ ಸಾಹಿತ್ಯ ಸಂಸ್ಕೃತಿಯ ಕಾಳಜಿಯನ್ನು ಪ್ರಕಟಿಸಿದ್ದಾರೆ. ಕರ್ನಾಟಕ ಸರಕಾರದ, ಕನ್ನಡ ಸಂಸ್ಕೃತಿ ಇಲಾಖೆಯ ಈ ಸಾಂಸ್ಕೃತಿಕ ಪ್ರೀತಿಯನ್ನು ಕನ್ನಡ ವಿಶ್ವವಿದ್ಯಾಲಯ ಅಕ್ಕರೆಯಿಂದ ಸ್ಮರಿಸುತ್ತದೆ.

ಪ್ರಾಚೀನ ಸಾಹಿತ್ಯ ಜೈನಸಾಹಿತ್ಯ, ಶಾಸ್ತ್ರ ಸಾಹಿತ್ಯಗಳ ಜೊತೆಗೆ ಆಧುನಿಕ ಕರ್ನಾಟಕದ ಒಳಿತಿನ ಚಿಂತನೆಯಲ್ಲಿ ಸದಾತೊಡಗಿರುವ ಡಾ. ಹಂಪ ನಾಗರಾಜ್ಯ ಕನ್ನಡ ಸಾಹಿತ್ಯದ ತರುಣ ಸಾಗರ ಯತಿ ಲಕ್ಷಣ ಗ್ರಂಥಗಳ ವಿವೇಚನೆಯಿಂದ ತೊಡಗಿ ಗ್ರಂಥಸಂಪಾದನೆ, ವ್ಯಾಕರಣ, ನಿಘಂಟುಗಳಿಂದ ಮುಂದುವರೆದು ಕಾದಂಬರಿ ಹಾಗೂ ಕಾದಂಬರಿಕಾರರ ಚಚೆಯನ್ನು ನಡೆಸಿ ಕೊನೆಗೆ ಆಧುನಿಕ ಸನ್ನಿವೇಶದಲ್ಲಿ ಕನ್ನಡವನ್ನು ಕುರಿತು ಬಹುಬಗೆಯಲ್ಲಿ ಚಿಂತನೆ ನಡೆಸಿದ ವಿಶಿಷ್ಟ ಸಂಕಲನ ಡಾ. ಹಂಪನಾ ಅವರ ‘ಕಡೆಗೋಲು. ಕನ್ನಡದ ಬಗೆಗಿನ ಜ್ಞಾನದ ಭದ್ರಬುನಾದಿಯ ಮೇಲೆ ಕನ್ನಡ ಸಾಹಿತ್ಯದ ಕೃತಿಗಳನ್ನು ಕನ್ನಡದ ಕೀತಿ ಪತಾಕೆಗಳಾಗಿ ಎತ್ತಿ ಹಿಡಿಯುವುದರ ಜೊತೆಗೆ, ಕರ್ನಾಟಕದ ವರ್ತಮಾನ ಮತ್ತು ಭವಿಷ್ಯಗಳಿಗೆ ಸಂಬಂಧಿಸಿದಂತೆ ಇರುವ ಅಡ್ಡಿ ಆತಂಕಗಳನ್ನು, ತವಕ-ತಲ್ಲಣಗಳನ್ನು ಹಾ. ಹಂಪನಾ ವಿವವರವಾಗಿ ಪರಾಮರ್ಶಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ದಾರ್ಶನಿಕ ಅಧ್ಯಕ್ಷರಾಗಿದ್ದ, ಕನ್ನಡ ವಿದ್ವತ್ ಪರಂಪರೆಯ ಆದರ್ಶ ಪ್ರಾಧ್ಯಾಪಕ ಸಂಶೋಧಕರಾಗಿ ಡಾ. ಹಂಪನಾ ಅವರು ‘ಕಡೆಗೋಲು’ ಸಂಕಲನದ ಮೂಲಕ ಕಾಲದೇಶಾತೀತವಾದ ಕನ್ನಡ ಮಂಥನವನ್ನು ನಡೆಸಿರುವುದಕ್ಕಾಗಿ ಅವರಿಗೆ ಪ್ರೀತಿ ಗೌರವದ ನಮನಗಳನ್ನು ಸಲ್ಲಿಸುತ್ತೇನೆ.

ಹೊನ್ನಾರುಮಾಲೆಯ ಪ್ರಕಟಣೆಗಳ ಕನಸಿನ ಬೀಜದಿಂದ ತೊಡಗಿ ನನಸಿದ ಫಲದ ವರೆಗೆ ನನ್ನೊಡನೆ ಸಹಕರಿಸಿದ ನಮ್ಮ ಪ್ರಸಾರಾಂಗದ ನಿರ್ದೇಶಕರಾದ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರನ್ನು ವಿಶೇಷವಾಗಿ ಸ್ಮರಿಸುತ್ತೇನೆ. ಸಹಾಯಕ ನಿರ್ದೇಶಕರಾದ ಶ್ರೀ ಸುಜ್ಞಾನಮೂರ್ತಿ ಅವರ ನೆರವಿಗಾಗಿ ವಂದನೆಗಳು.

ಬಿ.ಎ.ವಿವೇಕ ರೈ
ಕುಲಪತಿ