ಕನ್ನಡ ವಿಶ್ವವಿದ್ಯಾಲಯ ಕನ್ನಡ ಸಂಸ್ಕೃತಿಯ ಬಹುತ್ವದ ನೆಲೆಗಳನ್ನು ಹುಡುಕುವ, ಗಟ್ಟಿಗೊಳಿಸುವ, ಹರಡುವ ಕಾಯಕವನ್ನು ನೋಂಪಿಯಲ್ಲಿ ನಡೆಸಿಕೊಂಡು ಬಂದಿದೆ. ಕನ್ನಡ ಸಂಸ್ಕೃತಿಯನ್ನು ಮತ್ತೆ ಮತ್ತೆ ನಿರ್ವಚನ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ಕನ್ನಡ ವಿಶ್ವವಿದ್ಯಾಲಯವು ಒಂದು ಆಡುಂಬೊಲವಾಗಿ ಕಾರ್ಯನಿರ್ವಹಿಸುತ್ತಿದೆ. ನಮಗೆ ಗೊತ್ತಿರುವ ಸಂಸ್ಕೃತಿಯ ಅರ್ಥಗಳ ಆಚೆಗೆ ಅನೂಹ್ಯ ಲೋಕಗಳ ಕಡೆಗೆ ತನ್ನನ್ನು ಮತ್ತು ಕನ್ನಡಿಗರನ್ನು ಒಯ್ಯುವ ಪಯಣದ ದಾರಿಗಳನ್ನು ರೂಪಿಸುವ ಮಹತ್ವದ ಸಾಹಸದ ಹೆಜ್ಜೆಗಳು ಮೂಡಿ ಬಂದಿವೆ. ಇದು ನಿರಂತ೪ರ ನಡೆಯಬೇಕಾದ ಬಹುದಾರಿಗಳ ಮಹಾಯಾನ.

ಇಪ್ಪತ್ತೊಂದನೆಯ ಶತಮಾನದ ಆರಂಭದಲ್ಲಿ ಜಾಗತೀಕರಣದ ಈ ಸಂಕ್ರಮಣ ಸ್ಥಿತಿಯಲ್ಲಿ ಕನ್ನಡ ವಿಶ್ವವಿದ್ಯಾಲಯದ ರಚನೆ ಮತ್ತು ಕಾರ್ಯಗಳು ಸವಾಲಿನವು ಮತ್ತು ಜವಾಬ್ದಾರಿಯವೂ ಆಗಿವೆ. ‘ಕನ್ನಡ’ ಎನ್ನುವ ಪರಿಕಲ್ಪನೆಯನ್ನು ಭಾಷೆ, ಸಾಹಿತ್ಯ, ಬದುಕು ಮತ್ತು ಅದರ ಆಧುನಿಕ ಸನ್ನಿವೇಶಗಳಲ್ಲಿ ಅರ್ಥೈಸುವ ಮತ್ತೆ ಕಟ್ಟುವ ಕೆಲಸವನ್ನು ಕನ್ನಡ ವಿಶ್ವವಿದ್ಯಾಲಯ ಒಂದು ಕಾಯಕದಂತೆ ಕೈಗೆತ್ತಿಕೊಂಡಿದೆ. ಕನ್ನಡ ಮತ್ತು ಅಭಿವೃದ್ಧಿ ಎನ್ನುವ ಎರಡು ಪರಿಕಲ್ಪನೆಗಳು ಎದುರುಬದುರಾಗುವ ಆತಂಕ ಒಂದು ಕಡೆಯಾದರೆ, ಅವು ಒಂದನ್ನೊಂದು ಪ್ರಭಾವಿಸಿ ನೆರವಾಗುವ ಆವರಣವನ್ನು ನಿರ್ಮಾಣ ಮಾಡುವುದು ಇನ್ನೊಂದೆಡೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಕನ್ನಡ ವಿಶ್ವವಿದ್ಯಾಲಯವು ಈ ಸಂಬಂಧಿಯಾದ ಹೊಸ ಆಲೋಚನೆಗಳ ಸಂವಾದ ಮತ್ತು ಅದರ ಅನ್ವಯಿಕ ಸಾಧನೆಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳಲು ಬಯಸಿದೆ.

ಕನ್ನಡವು ಕಾಗದರಹಿತ ಮಾಧ್ಯಮದಲ್ಲಿ ಕಾಣಿಸಿಕೊಳ್ಳುತ್ತಿರುವಾಗಲೂ ಪುಸ್ತಕ ರೂಪದಲ್ಲಿ ಕನ್ನಡ ಕೃತಿಗಳ ಪ್ರಕಟಣೆ ಸಮಾನಾಂತರವಾಗಿ ಕ್ರಿಯಾಶೀಲವಾಗಿ ನಡೆಯುವುದು ಬಹಳ ಮುಖ್ಯವಾದದ್ದು. ತಾಂತ್ರಿಕ – ಮೌಖಿಕ ಮಾಧ್ಯಮದಲ್ಲಿ ಕಣ್ಣಿಗೆ, ಕಿವಿಗೆ ಮತ್ತು ಮನಸ್ಸಿಗೆ ಕನ್ನಡವನ್ನು ಸಂವಹನಗೊಳಿಸುವ ಪ್ರಕ್ರಿಯೆ ನಿರಂತರವಾಗಿ ನಡೆಯಬೇಕಿದೆ. ಇಲ್ಲಿ ಪ್ರಕಟಗೊಳ್ಳುವ ಮಾಧ್ಯಮದೊಂದಿಗೆ ಅಭಿವ್ಯಕ್ತಗೊಳ್ಳುವ ಚಿಂತನಾ ಶರೀರವೂ ಮುಖ್ಯವಾದದ್ದು. ಭಾಷೆ, ಸಾಹಿತ್ಯ, ಕಲೆಗಳು, ವಿಜ್ಞಾನ, ತಂತ್ರಜ್ಞಾನ, ಸಮಾಜವಿಜ್ಞಾನ ಎನ್ನುವ ಬೌದ್ಧಿಕ ಗಡಿರೇಖೆಗಳನ್ನು ಕಳಚಿಕೊಂಡು ಕನ್ನಡ ಜ್ಞಾನವು ಕನ್ನಡ ವಿಶ್ವವಿದ್ಯಾಲಯದಲ್ಲಿ ರೂಪುಗೊಳ್ಳುವ ಮತ್ತು ಪ್ರಕಟಗೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ.

ಕನ್ನಡ ವಿಶ್ವವಿದ್ಯಾಲಯದ ವಾಲ್ಮೀಕಿ ಅಧ್ಯಯನ ಪೀಠದ ವತಿಯಿಂದ ಪ್ರಕಟವಾಗುತ್ತಿರುವ ‘ಕಾಮಗೇತಿ ವಂಶಜರ ಚರಿತ್ರೆ’ ಎನ್ನುವ ಗ್ರಂಥವನ್ನು ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದ ಅಧ್ಯಾಪಕರಾದ ಡಾ. ವಿರೂಪಾಕ್ಷಿ ಪೂಜಾರಹಳ್ಳಿ ಅವರು ವ್ಯಾಪಕ ಕ್ಷೇತ್ರಕಾರ್ಯ ಮತ್ತು ಅಧ್ಯಯನದ ಮೂಲಕ ರಚನೆ ಮಾಡಿದ್ದಾರೆ. ಮ್ಯಾಸನಾಯಕರ ಒಂದು ಬೆಡಗಾಗಿರುವ ‘ಕಾಮಗೇತಿ’ ಎನ್ನುವುದು ಒಂದು ವಂಶಜರ ಚರಿತ್ರೆಯಾಗಿ ರೂಪುಗೊಂಡು ಮತ್ತು ಐತಿಹಾಸಿಕವಾಗಿ ಬೆಳೆದುಬಂದ ಸಂಕಥನವನ್ನು ಡಾ. ವಿರೂಪಾಕ್ಷಿ ಪೂಜಾರಹಳ್ಳಿ ಅವರು ಪರಿಶ್ರಮಪೂರ್ವಕವಾಗಿ ಇಲ್ಲಿ ಕಟ್ಟಿಕೊಟ್ಟಿದ್ದಾರೆ. ಬೇಡ ನಾಯಕರ ಚಾರಿತ್ರಿಕ ಹಿನ್ನೆಲೆಯಿಂದ ತೊಡಗಿ ಅವರ ಕಟ್ಟೆಮನೆಗಳಿಂದ ಮುಂದುವರೆದು ನ್ಯಾಯ ಕಟ್ಟೆಗಳವರೆಗೆ ಇಲ್ಲಿ ಅಧ್ಯಯನ ನಡೆಸಿದ್ದಾರೆ. ಕಾಮಗೇತನಹಳ್ಳಿ ಆಚಾರದ ಕಟ್ಟೆಮನೆ ಬಗ್ಗೆ ಇಲ್ಲಿ ವಿಸ್ತಾರವಾಗಿ ಚರ್ಚಿಸಲಾಗಿದೆ. ಕಾಮಗೇತಿ ವಂಶಜರ ರಾಜಕೀಯ ಚರಿತ್ರೆಯನ್ನು ಅದರ ಎಲ್ಲ ವಿವರಗಳ ಸಹಿತ ಕೊಡಲಾಗಿದೆ. ಕಾಮಗೇತಿ ಸಮುದಾಯದ ಚರ್ಚೆ ಮತ್ತು ಸಂಸ್ಕೃತಿಯನ್ನು ಇಲ್ಲಿ ವಿವರವಾಗಿ ಪರಿಶೀಲಿಸಲಾಗಿದೆ. ಈ ಕೃತಿಯನ್ನು ಪರಿಶ್ರಮ ಮತ್ತು ಪ್ರೀತಿಯಿಂದ ರಚಿಸಿಕೊಟ್ಟ ಡಾ. ವಿರೂಪಾಕ್ಷಿ ಪೂಜಾರಹಳ್ಳಿ ಅವರಿಗೆ ಕನ್ನಡ ವಿಶ್ವವಿದ್ಯಾಲಯದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ಗ್ರಂಥವನ್ನು ಅಚ್ಚುಕಟ್ಟಾಗಿ ಹೊರತರುತ್ತಿರುವ ಪ್ರಸಾರಾಂಗದ ನಿರ್ದೇಶಕರಾದ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ, ಸಹಾಯಕ ನಿರ್ದೇಶಕರಾದ ಶ್ರೀ ಬಿ. ಸುಜ್ಞಾನಮೂರ್ತಿ ಅವರಿಗೆ ಅಭಾರಿಯಾಗಿದ್ದೇನೆ.

ಬಿ.ಎ. ವಿವೇಕ ರೈ
ಕುಲಪತಿ