ಬಾಗಿಲೊಳು ಕೈಮುಗಿದು ಒಳಗೆ ಬಾ, ಯಾತ್ರಿಕನೆ,
ಶಿಲೆಯಲ್ಲವೀ ಗುಡಿಯು ಕಲೆಯ ಬಲೆಯು!
ಕಂಬನಿಯ ಮಾಲೆಯನು ಎದೆಯ ಬಟ್ಟಲೊಳಿಟ್ಟು
ಧನ್ಯತೆಯ ಕುಸುಮಗಳನರ್ಪಿಸಿಲ್ಲಿ.
ಗಂಟೆಗಳ ದನಿಯಿಲ್ಲ, ಜಾಗಟೆಗಳಿಲ್ಲಿಲ್ಲ;
ಕರ್ಪೂರದಾರತಿಯ ಜೋತಿಯಿಲ್ಲ.
ಭಗವಂತನಾನಂದ ರೂಪುಗೊಂಡಿಹುದಿಲ್ಲಿ;
ರಸಿಕತೆಯ ಕಡಲುಕ್ಕಿ ಹರಿವುದಿಲ್ಲಿ!

ಸರಸದಿಂದುಲಿಯುತಿದೆ ಶಿಲೆಯು ರಾಮಾಯಣವನಿಲ್ಲಿ!
ಬಾದರಾಯಣನಂತೆ ಭಾರತವ ಹಾಡುತಿಹುದಿಲ್ಲಿ!
ಕುಶಲತೆಗೆ ಬೆರಗಾಗಿ ಮೂಕವಾಗಿದೆ ಕಾಲವಿಲ್ಲಿ!
ಮೂರ್ಛೆಯಲಿ ಮೈಮರೆತು ತೇಲುವುದು ಭೂಭಾರವಿಲ್ಲಿ!

೧೦-೭-೧೯೨೮