ಕರ್ನಾಟಕದ ಆಧುನಿಕ ಚರಿತ್ರೆಯಲ್ಲಿ ಕರ್ನಾಟಕ ಏಕೀಕರಣ ಒಂದು ಮಹತ್ವ ಪೂರ್ಣ ಐತಿಹಾಸಿಕ ಘಟನೆ. ಹಾಗೆಯೇ ಕನ್ಣಡ ವಿಶ್ವವಿದ್ಯಾಲಯದ ಸ್ಥಾಪನೆಯೂ ಮತ್ತೊಂದು ಮಹತ್ವದ ಘಟನೆ. ಕನ್ನಡ-ಕನ್ನಡಿಗ-ಕರ್ನಾಟಕ ಸಂಸ್ಕೃತಿಯ ಕಲ್ಪನೆಯಡಿಯಲ್ಲಿ ಅಸ್ತಿತ್ವಕ್ಕೆ ಬಂದ ಕನ್ನಡ ವಿಶ್ವವಿದ್ಯಾಲಯದ ಹರವು ವಿಸ್ತಾರವಾದದ್ದು. ಈ ಕಾರಣದಿಂದ ಕನ್ನಡ ವಿಶ್ವವಿದ್ಯಾಲಯದ ಆಶಯ ಮತ್ತು ಗುರಿ ಇತರ ವಿಶ್ವವಿದ್ಯಾಲಯಗಳಿಗಿಂತ ಭಿನ್ನ ಹಾಗೂ ಪ್ರಗತಿಪರ. ಕನ್ನಡದ ಸಾಮರ್ಥ್ಯವನ್ನು ಎಚ್ಚರಿಸುವ ಕಾಯಕವನ್ನು ಉದ್ದಕ್ಕೂ ಅದು ನೋಂಪಿಯಿಂದ ಮಾಡಿಕೊಂಡು ಬಂದಿದೆ. ಕರ್ನಾಟಕತ್ವದ ‘ವಿಕಾಸ’ ಈ ವಿಶ್ವವಿದ್ಯಾಲಯದ ಮಹತ್ತರ ಆಶಯವಾಗಿದೆ.

ಕನ್ನಡ ಅಧ್ಯಯನ ಮೂಲತ: ಶುದ್ಧ ಜ್ಞಾನದ, ಕಾಲ, ದೇಶ, ಜೀವನ ತತ್ವದ ಪರವಾಗಿರುವುದರ ಹೊತೆಗೆ ಅಧ್ಯಯನವನ್ನು ಒಂದು ವಾಗ್ವಾದದ ಭೂಮಿಕೆ ಎಂದು ನಾವು ಭಾವಿಸಬೇಕಾಗಿದೆ. ಕನ್ನಡ ಬದುಕಿನ ಚಿಂತನೆಯ ಭಾಗವೆಂದೇ ಅದನ್ನು ರೂಪಿಸಿ ವಿವರಿಸಬೇಕಾಗಿದೆ. ಅಂದರೆ: ದೇಸಿ ಬೇರುಗಳ ಗುರುತಿಸುವಿಕೆ ಕನ್ನಡ ಅಧ್ಯಯನದ ಮುಖ್ಯ ಭಿತ್ತಿಯಾಗಬೇಕಾಗಿದೆ. ಕನ್ನಡ ಸಂಸ್ಕೃತಿಯು ಬಹುತ್ವದ ನೆಲೆಗಳನ್ನು ಆಧರಿಸಿ ರೂಪುಗೊಂಡಿದೆ. ಸಮಾಜಮುಖಿ ಚಿಂತನೆಗಳ ವ್ಯಾಪಕ ಅಧ್ಯಯನ ಬದುಕಿನ ಸಂಕೀರ್ಣ ಲಕ್ಷಣಗಳ ಸ್ವರೂಪವನ್ನು ಇದು ಪರಿಚಯಿಸುತ್ತದೆ. ನಾವು ಇದನ್ನು ಎಲ್ಲ ವಲಯಗಳಲ್ಲಿ ಕನ್ನಡದ ಅನುಷ್ಠಾನದ ಮೂಲಕ ಉಳಿಸಿ, ಬೆಳಸಬೇಕಾಗಿದೆ. ಆಗ ಕನ್ನಡ ಸಂಸ್ಕೃತಿಯು ವಿಶ್ವಪ್ರಜ್ಞೆಯಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ‘ಕನ್ನಡದ್ದೇ ಮಾದರಿ’ ಯ ಶೋಧ ಇಂದಿನ ಮತ್ತು ಬರುವ ದಿನಗಳ ತೀವ್ರ ಅಗತ್ಯವಾಗಿದೆ.

ಕನ್ನಡ ಸಂಸ್ಕೃತಿಯ ಭಾಗವಾಗಿರುವ ಕನ್ನಡ ಅಧ್ಯಯನವು ಕಾಲದಿಂದ ಕಾಲಕ್ಕೆ ಹೊಸ ತಿಳುವಳಿಕೆಯನ್ನು ತನ್ನ ತೆಕ್ಕೆಗೆ ಜೋಡಿಸಿಕೊಳ್ಳುತ್ತಾ ಬಂದಿದೆ. ಹೀಗಾಗಿ ವಿದೇಶಿ ಮತ್ತು ದೇಶಿ ವಿದ್ವಾಂಸರು ತೊಡಗಿಸಿಕೊಂಡ ವಿದ್ವತ್ ಕ್ಷೇತ್ರದಲ್ಲಿ ಮುಂದಿನ ವಿದ್ವಾಂಸರು ಕಾಲದಿಂದ ಕಾಲಕ್ಕೆ ಹೊಸಬೆಳೆಯನ್ನು ತೆಗೆಯುತ್ತಾ ಬಂದಿದ್ದಾರೆ. ಕನ್ನಡ ಅಧ್ಯಯನ ಪಳೆಯುಳಿಕೆಯ ಶಾಸ್ತ್ರವಾಗದೆ, ಬದಲಾಗುತ್ತಿರುವ ಕಾಲಮಾನದಲ್ಲಿ ಎದುರಾಗುತ್ತಿರುವ ಆಹ್ವಾನಕ್ಕೆ ತಕ್ಕಂತೆ ತನ್ನ ಗತಿಯನ್ನು ಬದಲಾಯಿಸಿಕೊಳ್ಳುತ್ತ ಬಂದಿರುವುದು ಗಮನಿಸತಕ್ಕ ಅಂಶ. ಸಾಂಪ್ರದಾಯಿಕ ಚಿಂತನೆಗಳು ಆಧುನೀಕರಣದ ಈ ಕಾಲ ಘಟ್ಟದಲ್ಲಿ ಸಕಾಲಿಕಗೊಳ್ಳುವುದು ಅನಿವಾರ್ಯವಾಗಿದೆ. ಮಾಹಿತಿ ತಂತ್ರಜ್ಞಾನದ ಮೂಲಕ ಜಗತ್ತಿನ ಜ್ಞಾನಪ್ರವಾಹವೇ ತಮ್ಮ ಅಂ‌ಗೈಯೊಳಗೆ ಚುಳುಕಾಗುವ ಈ ಸಂಧರ್ಭದಲ್ಲಿ ಕನ್ನಡದ ಚಹರೆ ಮತ್ತು ಕನ್ನಡ ಭಾಷೆಯ ಚಲನಶೀಲತೆಯನ್ನು ಶೋಧಿಸಲಿಕ್ಕೆ ಭಾಷಾ ಆಧುನೀಕರಣ ಮತ್ತು ಪ್ರಮಾಣೀಕರಣದ ಪ್ರಕ್ರಿಯೆಗಳ ನೆಲೆಯಲ್ಲಿ ಅಧ್ಯಯನದ ಹೊಸ ಸಾಧ್ಯತೆಗಳನ್ನು ಅನುಲಕ್ಸಿಸಿ, ಭಾಷಾನೀತಿ, ಬಾಷಾಯೋಜನೆ ರೂಪಿಸುವುದು ಅನಿವಾರ್ಯ ಹಾಗೂ ಅವಶ್ಯವಾಗಿದೆ. ಆಗ ಅಧ್ಯಯನದ ಸ್ವರೂಪ ಹಾಗೂ ಬಳಕೆಯ ವಿಧಾನದಲ್ಲಿ ಪರಿರ್ವತನೆ ಸಾಧ್ಯವಾಗುತ್ತದೆ.

ನಮ್ಮೆದುರು ನುಗ್ಗಿ ಬರುತ್ತಿರುವ ಜಾಗತೀಕರಣಕ್ಕೆ ಪ್ರತಿರೋಧಕವಾಗಿ ನಮ್ಮ ದೇಶೀಯ ಜ್ಞಾನಪರಂಪರೆಯನ್ನು ಮರುಶೋಧಿಸಿ ಈ ಮೂಲಕ ಕುಸಿಯುತ್ತಿರುವ ನಮ್ಮ ಬೇರುಗಳನ್ನು ಬಲಗೊಳಿಸಿಕೊಳ್ಳಬೇಕಾಗಿದೆ. ಭಾಷೆ, ಸಾಹಿತ್ಯ, ವ್ಯಾಕರಣ, ಛಂದಸ್ಸು, ಚರಿ‌ತ್ರೆ, ಕೃಷಿ, ವ್ಯೆದ್ಯ, ಪರೆಸರ ಮುಂತಾದ ಅಧ್ಯಯನ ವಿಷಯಗಳನ್ನು ಹೊಸ ಆಲೋಚನೆಯ ನೆಲೆಯಲ್ಲಿ ವಿಶ್ಲೇಷಿಸಬೇಕಾಗಿದೆ. ಆಧುನಿಕ ವಿಜ್ಞಾನ, ತಂತ್ರಜ್ಞಾನವೇ ‘ಜ್ಞಾನ’ ಎಂದು ರೂಪಿಸಿರುವ ಇಂದಿನ ಆಲೋಚನೆಗೆ ಪ್ರತಿಯಾಗಿ ಈ ಜ್ಞಾನ ಶಾಖೆಗಳಲ್ಲಿ ಹುದುಗಿರುವ ದೇಶೀ ಪರಂಪರೆಯ ಜ್ಞಾನದ ಹುಡುಕಾಟ ನಡೆಯಬೇಕಾಗಿದೆ. ಅಂತಹ ಪ್ರಯತ್ನಗಳಿಗೆ ಬೇಕಾದ ಮಾ‌ರ್ಗದರ್ಶಕ ಸೂತ್ರಗಳ ಹಾಗೂ ಆಕರ ಪರಿಕರಗಳ ನಿರ್ಮಾಣದ ನೆಲೆ ತುಂಬ ಮುಖ್ಯವಾಗಿದೆ. ಕನ್ನಡ ವಿಶ್ವವಿದ್ಯಾಲಯವು ಕಳೆದ ಹದಿನಾರು ವರ್ಷಗಳಿಂದ ಈ ಕೆಲಸಗಳನ್ನು ಹಲವು ಯೋಜನೆಗಳ ಮೂಲಕ ರೂಪಿಸಿಕೊಂಡಿದೆ, ರೂಪಿಸಿಕೊಳ್ಳುತ್ತಿದೆ. ಇದೊಂದು ಚಲನಶೀಲ ಪ್ರಕ್ರಿಯೆಯಾಗಿದೆ. ಸಮಕಾಲೀನ ಭಾಷಿಕ, ಸಾಂಸ್ಕೃತಿಕ ಸಮಸ್ಯೆಗಳಿಗೆ ಮುಖಾಮುಖಿಯಾಗುತ್ತಾ ಕನ್ನಡ ನಾಡುನುಡಿಯನ್ನು ಹೊಸದಾಗಿ ಶೋಧಿಸುತ್ತಾ, ವಿವರಿಸುತ್ತಾ ಬಂದಿದೆ. ಅಂದರೆ ಕನ್ನಡದ ಅರಿವಿನ ಏಕೀಕರಣವೇ ವರ್ತಮಾನದ ಹೊಸ ಬೆಳವಣಿಗೆ. ಇದು ಕನ್ನಡ ವಿಶ್ವವಿದ್ಯಾಲಯದ ಜೀವಧಾತುವಾಗಿದೆ.

ನಾಡೋಜ ಬಾಳಪ್ಪ ಹುಕ್ಕೇರಿ ಅವರು ಕರ್ನಾಟಕದ ಶ್ರೇಷ್ಠ ಜನಪದ ಗಾಯಕರು. ದೇಶದಾದ್ಯಂತ ಜನಪದ ಹಾಡುಗಳನ್ನು ಹಾಡಿ ಕರ್ನಾಟಕದ ಕೀರ್ತಿಯನ್ನು ಉತ್ತುಂಗಕ್ಕೇರಿಸಿದವರು, ಸಾವಿರಾರು ಜನಪದ ಗೀತೆಗಳನ್ನು ಅಧ್ಭುತವಾಗಿ ಹಾಡಿದ ಸಾವಿರ ಹಾಡಿನ ಸರದಾರ ಎಂದು ಪ್ರಸಿದ್ಧಿ ಪಡೆದವರು. ಸಾಹಿತ್ಯ, ಸಂಗೀತ, ಸಂಸ್ಕೃತಿಗಳನ್ನು ಜನಪದ ಭಾವದಲ್ಲಿ ಪಸರಿಸಿದ ಹಾಡುಗಾರ. ಇಂತಹ ಉನ್ನತ ಕಲಾವಿದರ ಕುರಿತಂತೆ ಉಪಯುಕ್ತ ಕೃತಿಯನ್ನು ರೂಪಿಸಿರುವ ಡಾ. ನಂದಾ ಎಂ. ಪಾಟೀಲ ಅವರಿಗೆ ಕನ್ನಡ ವಿಶ್ವವಿದ್ಯಾಲಯದ ಅಭಿನಂದನೆಗಳು ಸಲ್ಲುತ್ತದೆ.

ಈ ಗ್ರಂಥವನ್ನು ಅಚ್ಚುಕಟ್ಟಾಗಿ ಹೊರತರುತ್ತಿರುವ ಪ್ರಸಾರಾಂಗದ ನಿರ್ದೇಶಕರಾದ ಡಾ. ಎ. ಮೋಹನ ಕುಂಟಾರ ಮತ್ತು ಸಹಾಯಕ ನಿರ್ದೇಶಕರಾದ ಶ್ರೀ ಬಿ. ಸುಜ್ಞಾನ ಮೂರ್ತಿ ಅವರಿಗೆ ಆಭಾರಿಯಾಗಿದ್ದೇನೆ.

ಡಾ. ಎ. ಮರಿಗೆಪ್ಪ
ಕುಲಪತಿ