ಕರ್ನಾಟಕದ ಆಧುನಿಕ ಚರಿತ್ರೆಯಲ್ಲಿ ಕರ್ನಾಟಕ ಏಕೀಕರಣ ಒಂದು ಮಹತ್ವಪೂರ್ಣ ಐತಿಹಾಸಿಕ ಘಟನೆ. ಹಾಗೆಯೇ ಕನ್ನಡ ವಿಶ್ವವಿದ್ಯಾಲಯದ ಸ್ಥಾಪನೆಯೂ ಮತ್ತೊಂದು ಮಹತ್ವದ ಘಟನೆ. ಕನ್ನಡ-ಕನ್ನಡಿಗ-ಕರ್ನಾಟಕ ಸಂಸ್ಕೃತಿಯ ಕಲ್ಪನೆಯಡಿಯಲ್ಲಿ ಅಸ್ತಿತ್ವಕ್ಕೆ ಬಂದ ಕನ್ನಡ ವಿಶ್ವವಿದ್ಯಾಲಯದ ಹರವು ವಿಸ್ತಾರವಾದದ್ದು. ಈ ಕಾರಣದಿಂದ ಕನ್ನಡ ವಿಶ್ವವಿದ್ಯಾಲಯದ ಆಶಯ ಮತ್ತು ಗುರಿ ಇತರ ವಿಶ್ವವಿದ್ಯಾಲಯಗಳಿಗಿಂತ ಭಿನ್ನ ಹಾಗೂ ಪ್ರಗತಿಪರ. ಕನ್ನಡದ ಸಾಮರ್ಥ್ಯವನ್ನು ಎಚ್ಚರಿಸುವ ಕಾಯಕವನ್ನು ಉದ್ದಕ್ಕೂ ಅದು ನೋಂಪಿಯಿಂದ ಮಾಡಿಕೊಂಡು ಬಂದಿದೆ. ಕರ್ನಾಟಕತ್ವದ ‘ವಿಕಾಸ’ ಈ ವಿಶ್ವವಿದ್ಯಾಲಯದ ಮಹತ್ತರ ಆಶಯವಾಗಿದೆ.

ಕನ್ನಡ ಅಧ್ಯಯನ ಮೂಲತಃ ಶುದ್ಧ ಜ್ಞಾನದ, ಕಾಲ, ದೇಶ, ಜೀವನ ತತ್ವದ ಪರವಾಗಿರುವುದರ ಜೊತೆಗೆ ಅಧ್ಯಯನವನ್ನು ಒಂದು ವಾಗ್ವಾದದ ಭೂಮಿಕೆ ಎಂದು ನಾವು ಭಾವಿಸಬೇಕಾಗಿದೆ. ಕನ್ನಡ ಬದುಕಿನ ಚಿಂತನೆಯ ಭಾಗವೆಂದೇ ಅದನ್ನು ರೂಪಿಸಿ ವಿವರಿಸಬೇಕಾಗಿದೆ. ಅಂದರೆ : ದೇಸಿ ಬೇರುಗಳ ಗುರುತಿಸುವಿಕೆ ಕನ್ನಡ ಅಧ್ಯಯನದ ಮುಖ್ಯ ಭಿತ್ತಿಯಾಗಬೇಕಾಗಿದೆ. ಕನ್ನಡ ಸಂಸ್ಕೃತಿಯು ಬಹುತ್ವದ ನೆಲೆಗಳನ್ನು ಆಧರಿಸಿ ರೂಪುಗೊಂಡಿದೆ. ಸಮಾಜಮುಖಿ ಚಿಂತನೆಗಳ ವ್ಯಾಪಕ ಅಧ್ಯಯನ ಬದುಕಿನ ಸಂಕೀರ್ಣ ಲಕ್ಷಣಗಳ ಸ್ವರೂಪವನ್ನು ಇದು ಪರಿಚಯಿಸುತ್ತದೆ. ನಾವು ಇದನ್ನು ಎಲ್ಲ ವಲಯಗಳಲ್ಲಿ ಕನ್ನಡದ ಅನುಷ್ಠಾನದ ಮೂಲಕ ಉಳಿಸಿ, ಬೆಳೆಸಬೇಕಾಗಿದೆ. ಆಗ ಕನ್ನಡ ಸಂಸ್ಕೃತಿಯು ವಿಶ್ವಪ್ರಜ್ಞೆಯಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ‘ಕನ್ನಡದ್ದೇ ಮಾದರಿ’ಯ ಶೋಧ ಇಂದಿನ ಮತ್ತು ಬರುವ ದಿನಗಳ ತೀವ್ರ ಅಗತ್ಯವಾಗಿದೆ.

ಕನ್ನಡ ಸಂಸ್ಕೃತಿಯ ಭಾಗವಾಗಿರುವ ಕನ್ನಡ ಅಧ್ಯಯನವು ಕಾಲದಿಂದ ಕಾಲಕ್ಕೆ ಹೊಸ ತಿಳಿವಳಿಕೆಯನ್ನು ತನ್ನ ತೆಕ್ಕೆಗೆ ಜೋಡಿಸಿಕೊಳ್ಳುತ್ತ ಬಂದಿದೆ. ಹೀಗಾಗಿ ವಿದೇಶಿ ಮತ್ತು ದೇಶಿ ವಿದ್ವಾಂಸರು ತೊಡಗಿಸಿಕೊಂಡ ಈ ವಿದ್ವತ್‌ಕ್ಷೇತ್ರದಲ್ಲಿ ಮುಂದಿನ ವಿದ್ವಾಂಸರು ಕಾಲದಿಂದ ಕಾಲಕ್ಕೆ ಹೊಸಬೆಳೆಯನ್ನು ತೆಗೆಯುತ್ತ ಬಂದಿದ್ದಾರೆ. ಕನ್ನಡ ಅಧ್ಯಯನ ಪಳೆಯುಳಿಕೆಯ ಶಾಸ್ತ್ರವಾಗದೆ, ಬದಲಾಗುತ್ತಿರುವ ಕಾಲಮಾನದಲ್ಲಿ ಎದುರಾಗುತ್ತಿರುವ ಆಹ್ವಾನಕ್ಕೆ ತಕ್ಕಂತೆ ತನ್ನ ಗತಿಯನ್ನು ಬದಲಾಯಿಸಿಕೊಳ್ಳುತ್ತ ಬಂದಿರುವುದು ಗಮನಿಸತಕ್ಕ ಅಂಶ. ಸಾಂಪ್ರದಾಯಿಕ ಚಿಂತನೆಗಳು ಆಧುನೀಕರಣದ ಈ ಕಾಲಘಟ್ಟದಲ್ಲಿ ಸಕಾಲಿಕಗೊಳ್ಳುವುದು ಅನಿವಾರ್ಯವಾಗಿದೆ. ಮಾಹಿತಿ ತಂತ್ರಜ್ಞಾನದ ಮೂಲಕ ಜಗತ್ತಿನ ಜ್ಞಾನಪ್ರವಾಹವೇ ನಮ್ಮ ಅಂಗೈಯೊಳಗೆ ಚುಳುಕಾಗುವ ಈ ಸಂದರ್ಭದಲ್ಲಿ ಕನ್ನಡದ ಚಹರೆ ಮತ್ತು ಕನ್ನಡ ಭಾಷೆಯ ಚಲನಶೀಲತೆ ಯನ್ನು ಶೋಧಿಸಲಿಕ್ಕೆ ಭಾಷಾ ಆಧುನೀಕರಣ ಮತ್ತು ಪ್ರಮಾಣೀಕರಣದ ಪ್ರಕ್ರಿಯೆಗಳ ನೆಲೆಯಲ್ಲಿ ಅಧ್ಯಯನದ ಹೊಸ ಸಾಧ್ಯತೆಗಳನ್ನು ಅನುಲಕ್ಷಿಸಿ, ಭಾಷಾನೀತಿ, ಭಾಷಾಯೋಜನೆ ರೂಪಿಸುವುದು ಅನಿವಾರ್ಯ ಹಾಗೂ ಅವಶ್ಯವಾಗಿದೆ. ಆಗ ಅಧ್ಯಯನದ ಸ್ವರೂಪ ಹಾಗೂ ಬಳಕೆಯ ವಿಧಾನದಲ್ಲಿ ಪರಿವರ್ತನೆ ಸಾಧ್ಯವಾಗುತ್ತದೆ.

ನಮ್ಮೆದುರು ನುಗ್ಗಿ ಬರುತ್ತಿರುವ ಜಾಗತೀಕರಣಕ್ಕೆ ಪ್ರತಿರೋಧವಾಗಿ ನಮ್ಮ ದೇಶೀಯ ಜ್ಞಾನಪರಂಪರೆಯನ್ನು ಮರುಶೋಧಿಸಿ ಆ ಮೂಲಕ ಕುಸಿಯುತ್ತಿರುವ ನಮ್ಮ ಬೇರುಗಳನ್ನು ಬಲಗೊಳಿಸಿಕೊಳ್ಳಬೇಕಾಗಿದೆ. ಭಾಷೆ, ಸಾಹಿತ್ಯ, ವ್ಯಾಕರಣ, ಛಂದಸ್ಸು, ಚರಿತ್ರೆ, ಕೃಷಿ, ವೈದ್ಯ, ಪರಿಸರ ಮುಂತಾದ ಅಧ್ಯಯನ ವಿಷಯಗಳನ್ನು ಹೊಸ ಆಲೋಚನೆಯ ನೆಲೆಯಲ್ಲಿ ವಿಶ್ಲೇಷಿಸಬೇಕಾಗಿದೆ. ಆಧುನಿಕ ವಿಜ್ಞಾನ, ತಂತ್ರಜ್ಞಾನವೇ ‘ಜ್ಞಾನ’ ಎಂದು ರೂಪಿಸಿರುವ ಇಂದಿನ ಆಲೋಚನೆಗೆ ಪ್ರತಿಯಾಗಿ ಈ ಜ್ಞಾನಶಾಖೆಗಳಲ್ಲಿ ಹುದುಗಿರುವ ದೇಶಿ ಪರಂಪರೆಯ ಜ್ಞಾನದ ಹುಡುಕಾಟ ನಡೆಯಬೇಕಾಗಿದೆ. ಅಂತಹ ಪ್ರಯತ್ನಗಳಿಗೆ ಬೇಕಾದ ಮಾರ್ಗದರ್ಶಕ ಸೂತ್ರಗಳ ಹಾಗೂ ಆಕರ ಪರಿಕರಗಳ ನಿರ್ಮಾಣದ ನೆಲೆ ತುಂಬ ಮುಖ್ಯವಾಗಿದೆ. ಕನ್ನಡ ವಿಶ್ವವಿದ್ಯಾಲಯವು ಕಳೆದ ಹದಿನಾರು ವರ್ಷಗಳಿಂದ ಈ ಕೆಲಸಗಳನ್ನು ಹಲವು ಯೋಜನೆಗಳ ಮೂಲಕ ರೂಪಿಸಿಕೊಂಡಿದೆ, ರೂಪಿಸಿಕೊಳ್ಳುತ್ತಿದೆ. ಇದೊಂದು ಚಲನಶೀಲ ಪ್ರಕ್ರಿಯೆ ಯಾಗಿದೆ. ಸಮಕಾಲೀನ ಭಾಷಿಕ, ಸಾಂಸ್ಕೃತಿಕ ಸಮಸ್ಯೆಗಳಿಗೆ ಮುಖಾಮುಖಿಯಾಗುತ್ತ ಕನ್ನಡ ನಾಡುನುಡಿಯನ್ನು ಹೊಸದಾಗಿ ಶೋಧಿಸುತ್ತಾ, ವಿವರಿಸುತ್ತಾ ಬಂದಿದೆ. ಅಂದರೆ : ಕನ್ನಡದ ಅರಿವಿನ ವಿಕೇಂದ್ರೀಕರಣವೇ ವರ್ತಮಾನದ ಹೊಸ ಬೆಳವಣಿಗೆ. ಇದು ಕನ್ನಡ ವಿಶ್ವವಿದ್ಯಾಲಯದ ಜೀವಧಾತುವಾಗಿದೆ.

ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗವು ಸ್ಥಳೀಯ ಚರಿತ್ರೆ ಮತ್ತು ಪುರಾತತ್ವ ಮಾಲೆ ಯೋಜನೆಯನ್ನು ಹಮ್ಮಿಕೊಂಡು ನಾಡಿನ ನಿರ್ಲಕ್ಷಿತ ಚಾರಿತ್ರಿಕ ಸ್ಥಳಗಳನ್ನು ಬೆಳಕಿಗೆ ತರುವ ಕಾಯಕದಲ್ಲಿ ತೊಡಗಿದೆ. ಸ್ಥಳೀಯ ಶಾಸನಗಳು, ಮೌಖಿಕ ಆಕರಗಳು, ದೇವಾಲಯಗಳು, ಮೂರ್ತಿಶಿಲ್ಪಗಳು, ಸ್ಮಾರಕ ಶಿಲ್ಪಗಳು, ಕೆರೆ-ಕಟ್ಟೆಗಳು ಮೊದಲಾದ ಪ್ರಾಚ್ಯಾವಶೇಷಗಳನ್ನು ಕುರಿತಂತೆ ಸಂಬಂಧಪಟ್ಟ ವಿದ್ವಾಂಸರಿಂದ ಸಂಶೋಧನ ಲೇಖನಗಳನ್ನು ಸಿದ್ಧಪಡಿಸಿ ಸ್ಥಳದಲ್ಲೇ ವಿಚಾರ ಸಂಕಿರಣವನ್ನು ನಡೆಸುವ ಮೂಲಕ ವಿಭಾಗವು ಕನ್ನಡ ವಿಶ್ವವಿದ್ಯಾಲಯದ ಶೈಕ್ಷಣಿಕ ಯೋಜನೆಗಳನ್ನು ಜನರ ಬಳಿಗೆ ಒಯ್ಯುತ್ತಿದೆ, ಇದು ಸಂತಸದ ಸಂಗತಿ. ತೊಣ್ಣೂರು ಚಾರಿತ್ರಿಕವಾಗಿ ಮಹತ್ವದ ಸ್ಥಳವಾಗಿದ್ದು, ಪ್ರಸ್ತುತ ಜನಸಾಮಾನ್ಯರು ಕೆರೆ ತೊಣ್ಣೂರು ಎಂದು ಕರೆಯುತ್ತಾರೆ. ಇಲ್ಲಿರುವ ಕೆರೆ ರಾಜ್ಯದಲ್ಲಿಯೇ ಬಹು ದೊಡ್ಡ  ಕೆರೆಯಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನಲ್ಲಿರುವ ತೊಣ್ಣೂರು ಹೊಯ್ಸಳರ ಕಾಲಕ್ಕೆ ಶ್ರೀ ವೈಷ್ಣವ ಪಂಥದ ಪ್ರಮುಖ ಅಗ್ರಹಾರವಾಗಿತ್ತು. ಅಲ್ಲದೆ ತಮಿಳು ಸಂಸ್ಕೃತಿಯ ನೆಲೆಯೂ ಆಗಿತ್ತು. ಇದು ಕರ್ನಾಟಕದ ಧಾರ್ಮಿಕ ಸಹಬಾಳ್ವೆಗೆ ಒಂದು ಅಪೂರ್ವ ನಿದರ್ಶನ. ಇಂತಹ ಒಂದು ಊರಿನ ಪ್ರಾಚ್ಯಾವಶೇಷಗಳ ಶೋಧನೆ ಮತ್ತು ಅಧ್ಯಯನ ಮೊದಲ ಬಾರಿಗೆ ಸಂಶೋಧಿತಗೊಂಡು ಪ್ರಸ್ತುತ ತೊಣ್ಣೂರು ಕೃತಿಯಲ್ಲಿ ಪ್ರಕಟಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ಹಾಗೂ ಕರ್ನಾಟಕದ ಚರಿತ್ರೆ ಮತ್ತು ಪುರಾತತ್ವಕ್ಕೆ ಒಂದು ಮಹತ್ವದ ಸೇರ್ಪಡೆ. ಇಲ್ಲಿನ ಸಂಶೋಧನ ಲೇಖನಗಳನ್ನು ತುಂಬಾ ಶ್ರದ್ಧೆಯಿಂದ ಸಿದ್ಧಪಡಿಸಿದ ಎಲ್ಲ ಲೇಖಕರನ್ನು ಅಭಿನಂದಿಸಲು ಮರೆಯಲಾರೆ. ಮುಖ್ಯವಾಗಿ ಈ ಕೃತಿಯನ್ನು ಹೊರತರಲು ಅದರ ಎಲ್ಲ ಹಂತಗಳಲ್ಲೂ ಶ್ರಮಿಸಿದ ಡಾ. ಸಿ.ಮಹದೇವ ಅವರ ಶ್ರಮವನ್ನು ಅತ್ಯಂತ ಪ್ರೀತಿಯಿಂದ ನೆನೆಯುತ್ತೇನೆ. ಅದೇ ರೀತಿ ತೊಣ್ಣೂರಿನ ಜನತೆ ತಮ್ಮ ಸಹಾಯ ಸಹಕಾರಗಳನ್ನು ನೀಡುವ ಮೂಲಕ ತಮ್ಮ ಊರಿನ ಮೇಲಿರುವ ಸಾಂಸ್ಕೃತಿಕ ಪ್ರೀತಿಯನ್ನು ಮೆರೆದಿದ್ದಾರೆ. ಪ್ರಸ್ತುತ ಕೃತಿ ರೂಪುಗೊಳ್ಳಲು ಅವರೂ ಕಾರಣರಾಗಿದ್ದಾರೆ. ಹಾಗಾಗಿ ಅವರನ್ನು ಮುಕ್ತ ಕಂಠದಿಂದ ಹೊಗಳುತ್ತೇನೆ.

ಡಾ. .ಮುರಿಗೆಪ್ಪ
ಕುಲಪತಿ