ಕರ್ನಾಟಕದ ಆಧುನಿಕ ಚರಿತ್ರೆಯಲ್ಲಿ ಕರ್ನಾಟಕ ಏಕೀಕರಣ ಒಂದು ಮಹತ್ವಪೂರ್ಣ ಐತಿಹಾಸಿಕ ಘಟನೆ. ಹಾಗೆಯೇ ಕನ್ನಡ ವಿಶ್ವವಿದ್ಯಾಲಯದ ಸ್ಥಾಪನೆಯೂ ಮತ್ತೊಂದು ಮಹತ್ವದ ಘಟನೆ. ಕನ್ನಡ – ಕನ್ನಡಿಗ – ಕರ್ನಾಟಕ ಸಂಸ್ಕೃತಿಯ ಕಲ್ಪನೆಯಡಿಯಲ್ಲಿ ಅಸ್ತಿತ್ವಕ್ಕೆ ಬಂದ ಕನ್ನಡ ವಿಶ್ವವಿದ್ಯಾಲಯದ ಹರವು ವಿಸ್ತಾರವಾದದ್ದು. ಈ ಕಾರಣದಿಂದ ಕನ್ನಡ ವಿಶ್ವವಿದ್ಯಾಲಯದ ಆಶಯ ಮತ್ತು ಗುರಿ ಇತರ ವಿಶ್ವವಿದ್ಯಾಲಯಗಳಿಗಿಂತ ಭಿನ್ನ ಹಾಗೂ ಪ್ರಗತಿಪರ. ಕನ್ನಡದ ಸಾಮರ್ಥ್ಯವನ್ನು ಎಚ್ಚರಿಸುವ ಕಾಯಕವನ್ನು ಉದ್ದಕ್ಕೂ ಅದು ನೋಂಪಿಯಿಂದ ಮಾಡಿಕೊಂಡು ಬಂದಿದೆ. ಕರ್ನಾಟಕತ್ವದ ‘ವಿಕಾಸ’ ಈ ವಿಶ್ವವಿದ್ಯಾಲಯದ ಮಹತ್ತರ ಆಶಯವಾಗಿದೆ.

ಕನ್ನಡ ಅಧ್ಯಯನ ಮೂಲತಃ ಶುದ್ಧ ಜ್ಞಾನದ, ಕಾಲ, ದೇಶ, ಜೀವನ ತತ್ವದ ಪರವಾಗಿರುವುದರ ಜೊತೆಗೆ ಅಧ್ಯಯನವನ್ನು ಒಂದು ವಾಗ್ವಾದದ ಭೂಮಿಕೆ ಎಂದು ನಾವು ಭಾವಿಸಬೇಕಾಗಿದೆ. ಕನ್ನಡ ಬದುಕಿನ ಚಿಂತನೆಯ ಭಾಗವೆಂದೇ ಅದನ್ನು ರೂಪಿಸಿ ವಿವರಿಸಬೇಕಾಗಿದೆ. ಅಂದರೆ : ದೇಸಿ ಬೇರುಗಳ ಗುರುತಿಸುವಿಕೆ ಕನ್ನಡ ಅಧ್ಯಯನದ ಮುಖ್ಯ ಭಿತ್ತಿಯಾಗಬೇಕಾಗಿದೆ.ಕನ್ನಡ ಸಂಸ್ಕೃತಿಯು ಬಹುತ್ವದ ನೆಲೆಗಳನ್ನು ಆಧರಿಸಿ ರೂಪುಗೊಂಡಿದೆ. ಸಮಾಜಮುಖಿ ಚಿಂತನೆಗಳ ವ್ಯಾಪಕ ಅಧ್ಯಯನ ಬದುಕಿನ ಸಂಕೀರ್ಣ ಲಕ್ಷಣಗಳ ಸ್ವರೂಪವನ್ನು ಇದು ಪರಿಚಯಿಸುತ್ತದೆ. ನಾವು ಇದನ್ನು ಎಲ್ಲ ವಲಯಗಳಲ್ಲಿ ಕನ್ನಡದ ಅನುಷ್ಠಾನದ ಮೂಲಕ ಉಳಿಸಿ, ಬೆಳಸಬೇಕಾಗಿದೆ. ಆಗ ಕನ್ನಡ ಸಂಸ್ಕೃತಿಯು ವಿಶ್ವಪ್ರಜ್ಞೆಯಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ‘ಕನ್ನಡದ್ದೇ ಮಾದರಿ’ ಯ ಶೋಧ ಇಂದಿನ ಮತ್ತು ಬರುವ ದಿನಗಳ ತೀವ್ರ ಅಗತ್ಯವಾಗಿದೆ.

ಕನ್ನಡ ಸಂಸ್ಕೃತಿಯ ಭಾಗವಾಗಿರುವ ಕನ್ನಡ ಅಧ್ಯಯನವು ಕಾಲದಿಂದ ಕಾಲಕ್ಕೆ ಹೊಸ ತಿಳಿವಳಿಕೆಯನ್ನು ತನ್ನ ತೆಕ್ಕೆಗೆ ಜೋಡಿಸಿಕೊಳ್ಳುತ ಬಂದಿದೆ. ಹೀಗಾಗಿ ವಿದೇಶಿ ಮತ್ತು ದೇಶಿ ವಿದ್ವಾಂಸರು ತೊಡಗಿಸಿಕೊಂಡ ಈ ವಿದ್ವತ್‌ಕ್ಷೇತ್ರದಲ್ಲಿ ಮುಂದಿನ ವಿದ್ವಾಂಸರು ಕಾಲದಿಂದ ಕಾಲಕ್ಕೆ ಹೊಸಬೆಳೆಯನ್ನು ತೆಗೆಯುತ್ತ ಬಂದಿದ್ದಾರೆ. ಕನ್ನಡ ಅಧ್ಯಯನ ಪಳೆಯುಳಿಕೆಯ ಶಾಸ್ತ್ರವಾಗದೆ, ಬದಲಾಗುತ್ತಿರುವ ಕಾಲಮಾನದಲ್ಲಿ ಎದುರಾಗುತ್ತಿರುವ ಆಹ್ವಾನಕ್ಕೆ ತಕ್ಕಂತೆ ತನ್ನ ಗತಿಯನ್ನು ಬದಲಾಯಿಸಿಕೊಳ್ಳುತ್ತ ಬಂದಿರುವುದು ಗಮನಿಸತಕ್ಕ ಅಂಶ. ಸಾಂಪ್ರದಾಯಿಕ ಚಿಂತನೆಗಳು ಆಧುನೀಕರಣದ ಈ ಕಾಲಘಟ್ಟದಲ್ಲಿ ಸಕಾಲಿಕಗೊಳ್ಳುವುದು ಅನಿವಾರ್ಯವಾಗಿದೆ. ಮಾಹಿತಿ ತಂತ್ರಜ್ಞಾನದ ಮೂಲಕ ಜಗತ್ತಿನ ಜ್ಞಾನ ಪ್ರವಾಹವೇ ನಮ್ಮ ಅಂಗೈಯೊಳಗೆ ಚುಳುಕಾಗುವ ಈ ಸಂದರ್ಭದಲ್ಲಿ ಕನ್ನಡದ ಚಹರೆ ಮತ್ತು ಕನ್ನಡ ಭಾಷೆಯ ಚಲನಶೀಲತೆಯನ್ನು ಶೋಧಿಸಲಿಕ್ಕೆ ಭಾಷಾ ಆಧುನೀಕರಣ ಮತ್ತು ಪ್ರಮಾಣೀಕರಣದ ಪ್ರಕ್ರಿಯೆಗಳ ನೆಲೆಯಲ್ಲಿ ಅಧ್ಯಯನದ ಹೊಸ ಸಾಧ್ಯತೆಗಳನ್ನು ಅನುಲಕ್ಷಿಸಿ, ಭಾಷಾನೀತಿ, ಭಾಷಾ ಯೋಜನೆ ರೂಪಿಸುವುದು ಅನಿವಾರ್ಯ ಹಾಗೂ ಅವಶ್ಯಕವಾಗಿದೆ. ಆಗ ಅಧ್ಯಯನದ ಸ್ವರೂಪ ಹಾಗೂ ಬಳಕೆಯ ವಿಧಾನದಲ್ಲಿ ಪರಿವರ್ತನೆ ಸಾಧ್ಯವಾಗುತ್ತದೆ.

ನಮ್ಮೆದುರು ನುಗ್ಗಿ ಬರುತ್ತಿರುವ ಜಾಗತೀಕರಣಕ್ಕೆ ಪ್ರತಿರೋಧವಾಗಿ ನಮ್ಮ ದೇಶೀಯ ಜ್ಞಾನಪರಂಪರೆಯನ್ನು ಮರುಶೋಧಿಸಿ ಆ ಮೂಲಕ ಕುಸಿಯುತ್ತಿರುವ ನಮ್ಮ ಬೇರುಗಳನ್ನು ಬಲಗೊಳಿಸಿಕೊಳ್ಳಬೇಕಾಗಿದೆ. ಭಾಷೆ, ಸಾಹಿತ್ಯ, ವ್ಯಾಕರಣ, ಛಂದಸ್ಸು, ಚರಿತ್ರೆ, ಕರಷಿ, ವೈದ್ಯ, ಪರಿಸರ ಮುಂತಾದ ಅಧ್ಯಯನ ವಿಷಯಗಳನ್ನು ಹೊಸ ಆಲೋಚನೆಯ ನೆಲೆಯಲ್ಲಿ ವಿಶ್ಲೇಷಿಸಬೇಕಾಗಿದೆ. ಆಧುನಿಕ ವಿಜ್ಞಾನ, ತಂತ್ರಜ್ಞಾನವೇ ‘ಜ್ಞಾನ’ ಎಂದು ರೂಪಿಸಿರುವ ಇಂದಿನ ಆಲೋಚನೆಗೆ ಪ್ರತಿಯಾಗಿ ಈ ಜ್ಞಾನಶಾಖೆಗಳಲ್ಲಿ ಹುದುಗಿರುವ ದೇಶಿ ಪರಂಪರೆಯ ಜ್ಞಾನದ ಹುಡುಕಾಟ ನಡೆಯಬೇಕಾಗಿದೆ. ಅಂತಹ ಪ್ರಯತ್ನಗಳಿಗೆ ಬೇಕಾದ ಮಾರ್ಗದರ್ಶಕ ಸೂತ್ರಗಳಹಾಗೂ ಆಕರ ಪರಿಕರಗಳ ನಿರ್ಮಾಣದ ನೆಲೆ ತುಂಬ ಮುಖ್ಯವಾಗಿದೆ. ಕನ್ನಡ ವಿಶ್ವವಿದ್ಯಾಲಯವು ಕಳೆದ ಹದಿನಾರು ವರ್ಷಗಳಿಂದ ಈ ಕೆಲಸಗಳನ್ನು ಹಲವು ಯೋಜೆನಗಳ ಮೂಲಕ ರೂಪಿಸಿಕೊಂಡಿದೆ, ರೂಪಿಸಿಕೊಳ್ಳುತ್ತಿದೆ.ಇದೊಂದು ಚಲನಶೀಲ ಪ್ರಕ್ರಿಯೆಯಾಗಿದೆ. ಸಮಕಾಲೀನ ಭಾಷಿಕ, ಸಾಂಸ್ಕೃತಿಕ ಸಮಸ್ಯೆಗಳಿಗೆ ಮುಖಾಮುಖಿಯಾಗುತ್ತ ಕನ್ನಡ ನಾಡುನುಡಿಯನ್ನು ಹೊಸದಾಗಿ ಶೋಧಿಸುತ್ತಾ, ವಿವರಿಸುತ್ತಾ ಬಂದಿದೆ. ಅಂದರೆ : ಕನ್ನಡದ ಅರಿವಿನ ವಿಕೇಂದ್ರೀಕರಣವೇ ವರ್ತಮಾನದ ಹೊಸ ಬೆಳವಣಿಗೆ.ಇದು ಕನ್ನಡ ವಿಶ್ವವಿದ್ಯಾಲಯದ ಜೀವಧಾತುವಾಗಿದೆ.

ಕ್ರಿ.ಶ. ೭ – ೮ ಶತಮಾನದಲ್ಲಿ ತಮಿಳುನಾಡಿನಲ್ಲಿ ಆಗಿಹೋದ ವೈಷ್ಣವ ಸಂತರಾದ ಆಳ್ವಾರರು ಮತ್ತು ಶೈವ ಸಂತರಾದ ನಾಯನ್ಮಾರರು ಭಕ್ತಿಪಂಥಕ್ಕೆ ಒಂದು ಹೊಸ ಆಯಾಮವನ್ನು ತಂದುಕೊಟ್ಟರು. ಆವರ ಜೀವನ ಮತ್ತು ಭಕ್ತಿ ರಚನೆಗಳು ಭಾರತದಾದ್ಯಂತ ಪ್ರಚಲಿತವಾಗಿ, ಅಲ್ಲಲ್ಲಿನ ಭಕ್ತಿಪಂಥಗಳ ಮೇಲೆ ವಿಶೇಷ ಪ್ರೇರಣೆ – ಪ್ರಭಾವಗಳನ್ನು ಬೀರಿದವು. ಕನ್ನಡ ನಾಡಿನ ಸಾಹಿತ್ಯ ಮತ್ತು ಸಂಸ್ಕೃತಿ ಕ್ಷೇತ್ರಕ್ಕೂ ಈ ಮಾತು ಅನ್ವಯವಾಗುತ್ತದೆ. ಹಾಗಾಗಿಯೇ ತಮಿಳುನಾಡಿನ ಭಕ್ತಿಪಂಥದ ಬಗೆಗೆ ಕನ್ನಡದ ಸಂದರ್ಭದಲ್ಲಿ ಚರ್ಚೆ ಅಗತ್ಯವೆನಿಸುತ್ತದೆ. ಆ ನಿಟ್ಟಿನಲ್ಲಿ ಪ್ರಸ್ತುತ ಡಾ.ಎನ್.ಕೆ.ರಾಮಶೇಷನ್ ಅವರು ಬರೆದಿರುವ ‘ದಕ್ಷಿಣ ಭಾರತದ ಆಳ್ವಾರರು – ಒಂದು ಅವಲೋಕನ’ ಕೃತಿಯು ಮಹತ್ವವನ್ನು ಪಡೆದುಕೊಳ್ಳುತ್ತದೆ. ಆಳ್ವಾರರ ಜೀವನ ಮತ್ತು ಕೃತಿಗಳ ಬಗೆಗೆ ವಿವರವಾದ ಮಾಹಿತಿಯನ್ನೊದಗಿಸುವ ಲೇಖಕರು, ನಂತರದ ಕಾಲಘಟ್ಟದಲ್ಲಿ ಲಭ್ಯವಾಗುವ ಅವರ ಕುರಿತಾದಕೆಲವು ಉಲ್ಲೇಖಗಳನ್ನು ಪ್ರಸ್ತಾಪಿಸುತ್ತಾರೆ. ಒಟ್ಟಿನಲ್ಲಿ ವಿವಿಧ ಮೂಲಗಳ ಸಹಾಯದಿಂದ ರಚಿಸಿರುವ ಈ ಕೃತಿಯು ದ್ರಾವಿಡ ಅಥವಾ ದಕ್ಷಿಣ ಭಾರತ ಸಂದರ್ಭದಲ್ಲಿ ಭಕ್ತಿಪಂಥವನ್ನು ಕುರಿತು ಅಧ್ಯಯನ ನಡೆಸುವವರಿಗೆ ಉಪಯುಕ್ತ ಆಕರ ಗ್ರಂಥವೆನಿಸಬಲ್ಲದು. ಇಂತಹ ಕೃತಿಯನ್ನು ರಚಿಸಿಕೊಟ್ಟ ಡಾ. ಎನ್.ಕೆ. ರಾಮಶೇಷನ್ ಅವರಿಗೆ ಕನ್ನಡ ವಿಶ್ವವಿದ್ಯಾಲಯದ ಪರವಾಗಿ ಕೃತಜ್ಞತೆಗಳು ಸಲ್ಲುತ್ತವೆ.

ಈ ಗ್ರಂಥವನ್ನು ಅಚ್ಚುಕಟ್ಟಾಗಿ ಹೊರತರುತ್ತಿರುವ ಪ್ರಸಾರಾಂಗದ ನಿರ್ದೇಶಕರಾದ ಡಾ. ಎ. ಸುಬ್ಬಣ್ಣ ರೈ ಮತ್ತು ಸಹಾಯಕ ನಿರ್ದೇಶಕರಾದ ಶ್ರೀ ಬಿ. ಸುಜ್ಞಾನಮೂರ್ತಿ ಅವರಿಗೆ ಆಭಾರಿಯಾಗಿದ್ದೇನೆ.

ಡಾ. . ಮುರಿಗೆಪ್ಪ
ಕುಲಪತಿ