ಕನ್ನಡ ವಿಶ್ವವಿದ್ಯಾಲಯವು ಕರ್ನಾಟಕ ಸರಕಾರದ ಆರ್ಥಿಕ ನೆರವಿನಿಂದ ರೂಪಿಸಿ, ಪ್ರಕಟಿಸುತ್ತಿರುವ ಸಮಗ್ರ ಕನ್ನಡ ಸಾಹಿತ್ಯ ಜೈನಸಾಹಿತ್ಯ ಸಂಪುಟಗಳ ಯೋಜನೆಯು ಕನ್ನಡ ಸಾಹಿತ್ಯ ಚರಿತ್ರೆಯಲ್ಲಿಯೇ ಮಹತ್ವಪೂರ್ಣವಾದದ್ದು. ೨೦೦೬ ರ ಶ್ರವಣಬೆಳಗೊಳದ ಐತಿಹಾಸಿಕ ಗೊಮ್ಮಟ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿಯು ಈ ಸಮಗ್ರ ಕನ್ನಡ ಜೈನಸಾಹಿತ್ಯ ಸಂಪುಟಗಳ ಯೋಜನೆಯನ್ನು ರೂಪಿಸಿ ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿತು. ಕರ್ನಾಟಕ ಸರ್ಕಾರವು ಈಗಾಗಲೇ ಸಮಗ್ರ ವಚನಸಾಹಿತ್ಯ ಮತ್ತು ದಾಸಸಾಹಿತ್ಯ ಸಂಪುಟಗಳನ್ನು ಹೊರತಂದಿದ್ದು, ಈಗ ಸಮಗ್ರ ಜೈನಸಾಹಿತ್ಯ ಸಂಪುಟಗಳ ಪ್ರಕಟಣೆಯ ಮೂಲಕ ಪ್ರಾಚೀನ ಕನ್ನಡ ಸಾಹಿತ್ಯದ ಬಹಳ ಮಹತ್ವದ ಶರೀರವೊಂದನ್ನು ಪೂರ್ಣಗೊಳಿಸುತ್ತಿದೆ. ಈ ಸಮಗ್ರ ಜೈನಸಾಹಿತ್ಯ ಸಂಪುಟದ ಯೋಜನೆಯನ್ನು ೨೦೦೬ ರ ಶ್ರವಣಬೆಳಗೊಳದ ಮಹಾಮಸ್ತಭಿಷೇಕದ ಭಾಗವಾಗಿ ಕರ್ನಾಟಕ ಸರಕಾರ ಅಂಗೀಕರಿಸಿ ಸಾರಸ್ವತ ಮಹಾಮಸ್ತಕಾಭಿಷೇಕ ಮಾಡಿದ ಪುಣ್ಯಕ್ಕೆ ಪಾತ್ರವಾಗಿದೆ. ಈ ಯೋಜನೆಯ ಮಹತ್ವವನ್ನು ಮನಗಂಡು ಉದಾರವಾದ ಆರ್ಥಿಕ ನೆರವು ನೀಡಿದ ಆಗಿನ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಎನ್. ಧರ್ಮಸಿಂಗ್ ಅವರಿಗೂ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಎಂ.ಪಿ. ಪ್ರಕಾಶ್ ಅವರಿಗೂ ಸನ್ಮಾನ್ಯ ಲೋಕೋಪಯೋಗಿ ಸಚಿವರಾದ ಶ್ರೀ ಎಚ್.ಡಿ. ರೇವಣ್ಣ ಅವರಿಗೂ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಅಂದು ಚಾಲನೆಗೊಂಡ ಯೋಜನೆಗೆ ಮತ್ತೆ ಜೀವ ತುಂಬಿದ ಈಗಿನ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಎಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಶೇಷ ವಂದನೆಗಳನ್ನು ಸಲ್ಲಿಸುತ್ತೇನೆ. ಈ ಪ್ರಸ್ತಾಪವನ್ನು ವಿಧಾನ ಪರಿಷತ್ತಿನಲ್ಲಿ ಮಂಡಿಸಿದ ಪರಿಷತ್ತಿನ ಸದಸ್ಯರಾದ ಡಾ. ಎಂ. ತಂಗಾ, ಡಾ. ಚಂದ್ರಶೇಖರ ಕಂಬಾರ, ಡಾ. ಎಲ್. ಹನುಮಂತಯ್ಯ, ಶ್ರೀ ಹಸನಬ್ಬ ಅವರ ನೆರವನ್ನು ವಿಶೇಷವಾಗಿ ಸ್ಮರಿಸುತ್ತೇನೆ. ಕನ್ನಡದ ಹಿರಿಯ ಸಾಹಿತಿಗಳಾದ ಮತ್ತು ಜೈನಸಾಹಿತ್ಯದಲ್ಲಿ ವಿಶೇಷ ಪಾಂಡಿತ್ಯವುಳ್ಳ ಡಾ. ಹಂಪ. ನಾಗರಾಜಯ್ಯ ಮತ್ತು ಡಾ. ಕಮಲಾ ಹಂಪನಾ ಅವರು ಈ ಸಂಪುಟಗಳ ರೂಪರೇಷೆಯಿಂದ ತೊಡಗಿ ಕರ್ನಾಟಕ ಸರಕಾರಕ್ಕೆ ಇದರ ಮಹತ್ವವನ್ನು ಮನವರಿಕೆ ಮಾಡಿಕೊಡುವವರೆಗೆ ವಿಶೇಷವಾದ ಕಾಳಜಿ ವಹಿಸಿ ಸಹಕರಿಸಿದ್ದಾರೆ.

ಪ್ರಾಚೀನ ಕನ್ನಡ ಸಾಹಿತ್ಯ ಆರಂಭವಾಗುವುದೇ ಜೈನ ಸಾಹಿತ್ಯ ಕೃತಿಗಳ ಮೂಲಕ. ಆದಿಕವಿ ಪಂಪನ ವಿಕ್ರಮಾರ್ಜುನ ವಿಜಯ ಮತ್ತು ಆದಿಪುರಾಣಗಳು ಕನ್ನಡ ಸಾಹಿತ್ಯದ ಮೊತ್ತಮೊದಲ ಮಹಾಕಾವ್ಯಗಳು. ಶಿವಕೋಟ್ಯಾಚಾರ್ಯನ ವೊಡ್ಡಾರಾಧನೆ ಕನ್ನಡದ ಮೊತ್ತಮೊದಲ ಉಪಲಬ್ಧ ಗದ್ಯಗ್ರಂಥ. ಸಂಸ್ಕೃತವೇ ಸಾಹಿತ್ಯನಿರ್ಮಾಣದ ಪ್ರಧಾನ ಭಾಷೆಯಾಗಿದ್ದ ಭಾರತದೇಶದಲ್ಲಿ ಕನ್ನಡದಂತಹ ಪ್ರಾದೇಶಿಕ ಭಾಷೆಯಲ್ಲಿ ಕಾವ್ಯರಚನೆ ಮಾಡುವ ಮೂಲಕ ಜೈನಕವಿಗಳು, ಪ್ರಾದೇಶಿಕ ಸಾಹಿತ್ಯ ನಿರ್ಮಾಣಕ್ಕೆ ನಾಂದಿ ಹಾಡಿದರು. ಆದಿಕವಿ ಪಂಪ ಇದು ನಿಚ್ಚಂ ಪೊಸತು ಅರ್ಣವಂಬೋಲ್ ಅತಿ ಗಂಭೀರಂ ಕವಿತ್ವಂ ಎಂದು ಹೇಳಿದ್ದಾನೆ. ಪಂಪಕವಿಯು ಆದಿಪುರಾಣದಲ್ಲಿ ಆದಿನಾಥನ ಭವಾವಳಿಗಳನ್ನು ಮತ್ತು ಆತನ ಮಕ್ಕಳಾದ ಭರತ ಬಾಹುಬಲಿಯರು ರಾಜ್ಯದ ಒಡೆತನಕ್ಕಾಗಿ ಪರಸ್ಪರ ಎದುರಾಳಿಗಳಾಗುವ ಸನ್ನೀವೇಶವನ್ನು ಚಿತ್ರಿಸಿದ್ದಾರೆ. ಅಣ್ಣ ತಮ್ಮಂದಿರ ನಡುವೆ ಮುಖಾಮುಖಿ ಯುದ್ಧದಲ್ಲಿ ಅಣ್ಣ ಭರತ ಸೋಲುತ್ತಾನೆ, ತಮ್ಮ ಬಾಹುಬಲಿ ಗೆಲ್ಲುತ್ತಾನೆ. ಆದರೆ ಈ ರೀತಿ ಗೆದ್ದ ಬಾಹುಬಲಿಯು ರಾಜ್ಯದ ಒಡೆತನವನ್ನು ನಿರಾಕರಿಸಿ ವೈರಗ್ಯಪರನಾಗಿ ಪ್ರತಿಮಾಯೋಗದಲ್ಲಿ ನಿಂತು ಗೊಮ್ಮಟನಾಗುತ್ತಾನೆ. ಅಂತಹ ವೈರಾಗ್ಯದ ಪ್ರತಿಮೆಯಾದ ಗೊಮ್ಮಟನ ಮಹಾಮಸ್ತಕಾಭಿಷೇಕದ ನೆನಪಿಗಾಗಿ ಕನ್ನಡ ಸಾಹಿತ್ಯದ ಗೊಮ್ಮಟ ಸದೃಶ ಜೈನಕೃತಿಗಳನ್ನು ಮತ್ತೆ ಹೊಸದಾಗಿ ಶುಭ್ರಗೊಳಿಸಿ ಸಾಹಿತ್ಯ ಮತ್ತು ಶಾಸ್ತ್ರದ ವಿಭಿನ್ನ ಅರ್ಚನೆಗಳ ಮೂಲಕ ಅವುಗಳಿಗೆ ಪ್ರಕಟಣೆಯ ಅಭಿಷೇಕವನ್ನು ಮಾಡಲಾಗಿದೆ.

ಆದಿಕವಿ ಪಂಪನು ತನ್ನ ವಿಕ್ರಮಾರ್ಜುನ ವಿಜಯದಲ್ಲಿ ಬೆಳಗುವೆನಿಲ್ಲಿ ಲೌಕಿಕಮಂ ಅಲ್ಲಿ ಜಿನಾಗಮಮಂ ಎಂದು ಹೇಳಿಕೊಂಡಿದ್ದಾನೆ. ಹೀಗಾಗಿ ಪ್ರಾಚೀನ ಕಾವ್ಯಗಳಲ್ಲಿ ಲೌಕಿಕ ಮತ್ತು ಆಗಮಿಕ ಎನ್ನುವ ಕಾವ್ಯ ಮತ್ತು ಪುರಾಣಗಳ ನಿರ್ಮಾಣದ ಒಂದು ಪರಂಪರೆ ಕಾಣಿಸಿಕೊಳ್ಳುತ್ತದೆ. ಪಂಪನಿಂದ ತೊಡಗಿ ಪೊನ್ನರನ್ನರಿಂದ ಮುಂದುವರಿದು ಮುಂದಿನ ಕವಿಗಳಲ್ಲಿ ಆಗಮಿಕ ಕಾವ್ಯಗಳಾದ ತೀರ್ಥಂಕರರ ಪುರಾಣಕೃತಿಗಳ ನಿರ್ಮಾಣ ಒಂದು ನೋಂಪಿಯಂತೆ ಕಾಣಸಿಗುತ್ತದೆ. ಇನ್ನೊಂದು ಕಡೆ ನಯಸೇನ, ಜನ್ನ, ಬ್ರಹ್ಮಶಿವ, ವೃತ್ತವಿಲಾಸದಂತಹ ಕವಿಗಳು ಲೌಕಿಕ ಕಥೆಗಳಿಗೆ ಜೈನ ಆವರಣವನ್ನು ನಿಮಾರ್ಣ ಮಾಡಿ ಲೌಕಿಕ – ಧಾರ್ಮಿಕಗಳನ್ನು ಒಂದುಗೂಡಿಸುವ ವಿಶಿಷ್ಟ ಕಲೆಗಾರಿಕೆಯನ್ನು ಮೆರೆಯುತ್ತಾರೆ. ಹೀಗೆ ೨೪ ತೀರ್ಥಂಕರರ ಪುರಾಣಕಾವ್ಯ ಒಂದು ಧಾರೆಯಾದರೆ ಚರಿತ್ರೆ ಲೌಕಿಕಕಥೆ ನೀತಿಕಥೆಗಳ ಮೂಲಕ ಸಮಕಾಲೀನ ಬದುಕಿಕಗೆ ಸ್ಪಂದಿಸಿದ ವೈವಿಧ್ಯಮಯ ಕಾವ್ಯಪರಂಪರೆ ಪ್ರಾಚೀನ ಜೈನಸಾಹಿತ್ಯದ ಇನ್ನೊಂದು ಮುಖ್ಯಧಾರೆಯಾಗಿದೆ. ಇದರೊಂದಿಗೆ ಗದ್ಯಸಾಹಿತ್ಯದ ದೃಷ್ಟಿಯಿಂದ ಶಿವಕೋಟ್ಯಾಚಾರ್ಯನ ವೊಡ್ಡಾರಾಧನೆ ಚಾವುಂಡರಾಯನ ಚಾವುಂಡರಾಯ ಪುರಾಣ ಇನ್ನೊಂದು ಪರಂಪರೆಯನ್ನು ಕಟ್ಟಿಕೊಡುತ್ತದೆ. ಒಂದು ಕಡೆ ಜೈನಧರ್ಮದ ಚೌಕಟ್ಟಿನ ಒಳಗಡೆ ಕತೆಗಳು ಮಾಧ್ಯಮವಾಗಿ ಬಳಕೆಯಾದರೆ, ಇನ್ನೊಂದೆಡೆ ಜೈನಧರ್ಮದ ಮೇಲ್ಮೆಗಾಗಿ ಸಾಧನೆ ಮಾಡಿದ ಸಾಂಸ್ಕೃತಿಕ ವ್ಯಕ್ತಿಯ ಸುತ್ತ ಕಥನವೊಂದು ನಿರ್ಮಾಣವಾಗುತ್ತದೆ. ಇವುಗಳ ನಡುವೆ ನಾಗವರ್ಮನಂತಹ ಶಾಸ್ತ್ರಕಾರನು ಭಾಷೆ ಮತ್ತು ಕಾವ್ಯಲಕ್ಷಣಕ್ಕೆ ಸಂಬಂಧಿಸಿದ ಶಾಸ್ತ್ರಗ್ರಂಥಗಳನ್ನು ರಚಿಸಿದ್ದಾನೆ. ಮಧ್ಯಯುಗೀನ ಕಾಲದಲ್ಲಿ ರತ್ನಾಕರವರ್ಣಿಯಂತಹ ಕವಿಯು ಸಾಂಗತ್ಯದಲ್ಲಿ ಭರತೇಶವೈಭವ ಕಾವ್ಯ ರಚಿಸಿ ಜೈನಕಾವ್ಯಗಳ ಆಶಯದ ಸಾಂಸ್ಕೃತಿಕ ಪಲ್ಲಟವನ್ನು ದಾಖಲಿಸುತ್ತಾನೆ. ೧೮೦೦ ರ ಕಾಲಕ್ಕೆ ಬರುವ ದೇವಚಂದ್ರನ ರಾಜಾವಳಿ ಕಥೆಯು ಆಧುನಿಕ ಕನ್ನಡ ಪೂರ್ವದ ಕಥಾರಚನೆಯ ಅರುಣೋದಯ ಹೆಜ್ಜೆಯಾಗಿ ಮುಖ್ಯವಾದ ಕೃತಿಯಾಗಿದೆ.

ಒಂದು ಅಂದಾಜಿನ ಪ್ರಕಾರ ಸುಮಾರು ೪೫೦ ಜೈನಕವಿಗಳು ೫೨೦ ಕ್ಕೂ ಹೆಚ್ಚಿನ ಕನ್ನಡ ಕೃತಿಗಳನ್ನು ರಚಿಸಿದ್ದಾರೆ. ಅವುಗಳಲ್ಲಿ ಸುಮಾರು ಅರ್ಧದಷ್ಟು ಕೃತಿಗಳು ಲಭ್ಯವೆಂದು ನಾವು ಭಾವಿಸಿದರೂ ಇವುಗಳ ಪ್ರಮಾಣ ಪ್ರಾಚೀನ ಕನ್ನಡ ಸಾಹಿತ್ಯದಲ್ಲಿ ಗಣನೀಯ ಎನ್ನಿಸುತ್ತದೆ. ಮಹಾಕಾವ್ಯದಿಂದ ತೊಡಗಿ ಮುಕ್ತಕದ ವರೆಗೆ, ಗಣಿತಶಾಸ್ತ್ರದಿಂದ ಹಿಡಿದು ಸೂಪಶಾಸ್ತ್ರದ ವರೆಗೆ, ಜನಪದ ಕಥೆಯಿಂದ ಆರಂಭಿಸಿ ವಿಡಂಬನ ಸಾಹಿತ್ಯದ ವರೆಗೆ ಕನ್ನಡ ಜೈನಸಾಹಿತ್ಯದ ಹರಹು ವ್ಯಾಪಿಸಿಕೊಂಡಿದೆ.

ಪಂಪಕವಿಯು ತನ್ನ ಕಾವ್ಯದಲ್ಲಿ ಮಾರ್ಗ ಮತ್ತು ದೇಸಿಗಳ ಕುರಿತು ಮಾತನಾಡುತ್ತಾನೆ. ಕನ್ನಡ ಜೈನಸಾಹಿತ್ಯದ ಬಗ್ಗೆ ಹೇಳುವಾಗ ಜೈನ ಪುರಾಣಗಳ ಪರಿಭಾಷೆ ಮತ್ತು ಪರಿಮಾಣಗಳು ಮಾರ್ಗವಾದರೆ, ಇತಿಹಾಸ, ಸಮಾಜ, ಲೌಕಿಕ ಪ್ರಪಂಚ ದೇಶಿಯಾಗುತ್ತದೆ. ಪಂಪನ ಕಾವ್ಯಗಳ ನಾಣ್ನುಡಿಯಿಂದ ತೊಡಗಿ, ವಡ್ಡಾರಾಧನೆ ಕತೆಗಳ ಗ್ರಾಮೀಣ ಬದುಕಿನಿಂದ ಮುಂದುವರಿದು, ನಯಸೇನನ ಧರ್ಮಾಮೃತದ ಕಥೆಗಳ ಮಾಲೋಪಮೆಗಳಿಂದ ಹಾದು ಬಂದು ರತ್ನಾಕರನ ಭರತೇಶವೈಭವದ ನುಡಿಗಟ್ಟುಗಳವರೆಗೆ ಕನ್ನಡದ ನಿಜವಾದ ದೇಸಿಯನ್ನು ಜೈನಸಾಹಿತ್ಯ ನಿರ್ಮಿಸಿಕೊಂಡಿದೆ. ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಚಂಪೂಕಾವ್ಯ ಪ್ರಕಾರ ಜೈನರಿಂದ ಆರಂಭವಾಯಿತು. ಸಾಂಗತ್ಯಕಾವ್ಯ ಪ್ರಕಾರಕ್ಕೆ ನಾಂದಿ ಹಾಡಿದವರು ಜೈನಕವಿಗಳು. ಗದ್ಯವನ್ನು ಮೊದಲು ಮಾಡಿದವರು ಜೈನ ಕಥೆಗಾರರು. ಕಾವ್ಯಶಾಸ್ತ್ರ, ಛಂದಸ್ಸು, ವ್ಯಾಕರಣ, ಸೂಪಶಾಸ್ತ್ರದಂತಹ ಶಾಸ್ತ್ರ ಪಾಂಡಿತ್ಯವನ್ನು ಕನ್ನಡದಲ್ಲಿ ಕಟ್ಟಿಕೊಟ್ಟವರು ಜೈನರು. ಹೀಗೆ ಕನ್ನಡದ ವಿದ್ವತ್ತು, ವಿವೇಕ ಮತ್ತು ವಿಸ್ಮಯ ಕನ್ನಡ ಸಾಹಿತ್ಯದಲ್ಲಿ ಜೈನ ಕವಿಗಳಿಂದ ಅಪೂರ್ವವಾಗಿ ನಿರ್ಮಾಣವಾಗಿದೆ ಮತ್ತು ಪ್ರಸಾರವಾಗಿದೆ.

ಈ ಹಿನ್ನೆಲೆಯಲ್ಲಿ ಸಮಗ್ರ ಕನ್ನಡ ಸಾಹಿತ್ಯ ಯೋಜನೆಯನ್ನು ನಿಗದಿತ ಕಾರ್ಯವಿಧಾನದ ಮೂಲಕ ರೂಪಿಸಿಕೊಂಡು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕೆಂದು ನಾವು ತೀರ್ಮಾನಿಸಿಕೊಂಡೆವು ಇದಕ್ಕಾಗಿ ಈ ಕ್ಷೇತ್ರದಲ್ಲಿ ನುರಿತ ನಾಡಿನ ಹಿರಿಯರನ್ನೊಳಗೊಂಡ ಉನ್ನತ ಸಲಹಾ ಸಮಿತಿ ಹಾಗೂ ಸಂಪನ್ಮೂಲ ವಿದ್ವಾಂಸರನ್ನು ಈ ಯೋಜನೆಯ ವ್ಯಾಪ್ತಿಗೆ ಒಳಗೊಳ್ಳಲು ಬಯಸಲಾಯಿತು. ಅದರಂತೆ ನಾಡಿನ ಗಣ್ಯ ವಿದ್ವಾಂಸರು ಈ ಬೃಹತ್ ಯೋಜನೆಯಲ್ಲಿ ಪಾಲ್ಗೊಂಡರೆಂಬುದು ಕನ್ನಡ ವಿಶ್ವವಿದ್ಯಾಲಯಕ್ಕೆ ಹೆಮ್ಮೆಯ ಸಂಗತಿ.

ಸಮಗ್ರ ಕನ್ನಡ ಜೈನ ಸಾಹಿತ್ಯ ಸಂಪುಟದ ಯೋಜನೆಯ ಉನ್ನತ ಸಲಹಾ ಸಮಿತಿಯ ಸದಸ್ಯರಾದ ಡಾ. ದೇ. ಜವರೇಗೌಡ, ಡಾ. ಜಿ.ಎಸ್. ಶಿವರುದ್ರಪ್ಪ. ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ, ಡಾ. ಹಂಪ. ನಾಗರಾಜಯ್ಯ, ಡಾ. ಕಮಲಾ ಹಂಪನಾ, ಡಾ. ಚಂದ್ರಶೇಖರ ಕಂಬಾರ, ಡಾ. ಎಂ.ಎಂ. ಕಲಬುರ್ಗಿ, ಡಾ. ಎಚ್.ಜೆ. ಲಕ್ಕಪ್ಪಗೌಡ, ಡಾ. ಎಂ.ಜಿ. ಬಿರಾದಾರ ಮತ್ತು ಕನ್ನಡ ಸಂಸ್ಕೃತಿ ನಿರ್ದೇಶನಾಲಯದ ನಿರ್ದೇಶಕರು, ಕರ್ನಾಟಕ ಸರ್ಕಾರದ ಕಂದಾಯ ಮತ್ತು ಮುಜರಾಯಿ ಇಲಾಖೆಯ ಕಾರ್ಯದರ್ಶಿಗಳು ತಮ್ಮ ಸೂಚನೆ ಸಲಹೆಗಳಿಂದ ಈ ಸಂಪುಟಗಳ ಸ್ವರೂಪ ಮತ್ತು ಅನುಷ್ಠಾನಗಳ ಎಲ್ಲಾ ಹಂತಗಳಲ್ಲಿಯೂ ಮಾರ್ಗದರ್ಶನ ಕೊಟ್ಟಿದ್ದಾರೆ. ಪ್ರಸಾರಾಂಗದ ನಿರ್ದೇಶಕರಾದ ಪ್ರೊ. ಮಲ್ಲೇಪುರಂ ಜಿ.ವೆಂಕಟೇಶ ಅವರು ಸಮಿತಿಯ ಸಂಚಾಲಕರಾಗಿ ಇಡೀ ಯೋಜನೆಯ ಅನುಷ್ಠಾನದ ಕೆಲಸವನ್ನು ಹೆಜ್ಜೆ ಹೆಜ್ಜೆಗೂ ಸಮರ್ಥವಾಗಿ ನಿರ್ವಹಿಸಿದ್ದಾರೆ. ಕುಲಸಚಿವರಾದ ಪ್ರೊ.ಕರೀಗೌಡ ಬೀಚನಹಳ್ಳಿ ಅವರು ಯೋಜನೆಯ ಆಡಳಿತಾತ್ಮಕ ನಿರ್ವಹಣೆಯನ್ನು ಅಚ್ಚುಕಟ್ಟಾಗಿ ನಡೆಸಿದ್ದಾರೆ. ನಮ್ಮ ವಿಶ್ವವಿದ್ಯಾಯದ ಜೈನಸಂಸ್ಕೃತಿ ಅಧ್ಯಯನ ಪೀಠದ ಸಂಚಾಲಕರಾದ ಡಾ. ಎಂ.ಉಷಾ ಅವರು ಈ ಯೋಜನೆಯನ್ನು ರೂಪಿಸುವಲ್ಲಿ ವಿಶೇಷವಾಗಿ ಸಹಕರಿಸಿದ್ದಾರೆ.

ವಿಶ್ವವಿದ್ಯಾಲಯವು ಈ ಯೋಜನೆಯನ್ನು ಕೈಗೆತ್ತಿಕೊಂಡಾಗ ಪ್ರಕಟಣ ಸ್ವರೂಪವನ್ನು ಸ್ಥೂಲವಾಗಿ ಹೀಗೆ ಗುರುತಿಸಿಕೊಳ್ಳಲಾಯಿತು. ಇದು ಡೆಮ್ಮಿ ೧/೮ ಆಕಾರದ ಸುಮಾರು ಇಪ್ಪತ್ತು ಸಂಪುಟಗಳಿಂದ ಕೂಡಿರಬೇಕು. ಪ್ರತಿ ಸಂಪುಟವೂ ಅಂದಾಜು ೬೦೦ ಪುಟಗಳಾಗಿರಬೇಕು. ಸಂಪುಟದ ಸಂಪಾದಕರು ಆಯಾ ಸಂಪುಟಕ್ಕೆ ಸೂಕ್ತವಾದ ಕವಿ ಕಾವ್ಯ ಪರಿಚಯ, ಚಾರಿತ್ರಿಕ ಹಾಗೂ ಸಾಹಿತ್ಯಿಕ ಮಹತ್ವ ಇತ್ಯಾದಿ ವಿವರಗಳನ್ನು ಒಳಗೊಂಡ ಪ್ರಸ್ತಾವನೆ ಬರೆಯಬೇಕೆಂದು ನಿರ್ಣಯಿಸಲಾಯಿತು. ಸಂಪುಟಗಳು ಜನಪ್ರಿಯ ಆವೃತ್ತಿ ಆಗಿರುವುದರಿಂದ ಪಠ್ಯಗಳಲ್ಲಿ ಪಾಠಾಂತರಗಳಲ್ಲಿ ನೀಡಬೇಕಾಗಿಲ್ಲ. ಪ್ರತಿಯೊಬ್ಬ ಕವಿಯ ಸಮಗ್ರ ಕಾವ್ಯವನ್ನು ಒಂದು ಸಂಪುಟದಲ್ಲಿ ತರುವುದೆಂದು ಸಮಿತಿ ತೀರ್ಮಾನಿಸಿತು. ವಸ್ತು ವಿಷಯಕ್ಕೆ ಅನುಗುಣವಾಗಿ ಬೇರೆ ಬೇರೆ ಎರಡೆರಡು ಕಾವ್ಯಗಳನ್ನು ಒಂದೇ ಸಂಪುಟದಲ್ಲಿ ಅಳವಡಿಸುವುದು ಸೂಕ್ತವೆಂದು ತೀರ್ಮಾನ ತೆಗೆದುಕೊಳ್ಳಲಾಯಿತು. ಈಗಾಗಲೇ ಸಂಪಾದನೆಗೊಂಡು, ಪ್ರಕಟವಾಗಿರುವ ಕಾವ್ಯಗಳನ್ನು ಮೊದಲ ಹಂತದಲ್ಲಿ ತೆಗೆದುಕೊಳ್ಳವುದೆಂದೂ ಅಪೂರ್ವ ಕೃತಿಗಳನ್ನು ಈ ಮಾಲೆಯಲ್ಲಿ ಸೇರಿಸಿಕೊಳ್ಳವುದೆಂದೂ ನಿಶ್ಚಯಿಸಲಾಯಿತು. ಪಂಪ, ಪನ್ನ, ರನ್ನ, ಜನ್ನ, ನಾಗವರ್ಮ, ನಯಸೇನ, ಸಾಳ್ವ ಮುಂತಾದವರ ಕಾವ್ಯಗಳು ಈಗಾಗಲೇ ಮುದ್ರಣಗೊಂಡಿವೆ. ಆದರೂ ಪಾಠಕ್ಲೇಶ ಅರ್ಥಕ್ಲೇಶಗಳು ಹೇಗೋ ಉಳಿದುಬಿಟ್ಟಿವೆ. ಆದುದರಿಂದ ಎಲ್ಲ ಮುದ್ರಿತ ಪಾಠಗಳನ್ನು ಗಮನಿಸಿ ಈ ಎಲ್ಲ ಕ್ಲೇಶಗಳನ್ನು ನಿವಾರಿಸಿ ಸರ್ವಪ್ರತಿಪಾಠಗಳನ್ನು ಇಟ್ಟುಕೊಳ್ಳುವುದು ಅಗತ್ಯವೆಂದು ಸಮಿತಿ ಭಾವಿಸಿತು. ಗ್ರಂಥದ ಕೊನೆಗೆ ಶಬ್ಧಾರ್ಥಕೋಶ, ಪಾರಿಭಾಷಿಕಕೋಶ, ಸಹಾಯಕ ಸಾಹಿತ್ಯ ನೀಡುವುದು ಅಗತ್ಯವೆಂದು ಸಂಪಾದಕರಿಗೆ ಬಿನ್ನವಿಸಿಕೊಳ್ಳಲಾಯಿತು. ಈ ಹಿನ್ನೆಲೆಯಲ್ಲಿ ಪ್ರಸ್ತುತ ಇಪ್ಪತ್ತು ಸಂಪುಟಗಳು ನಿಮ್ಮ ಎದುರಿಗಿವೆ. ಶ್ರಮಸಾಧ್ಯವಾದ ಇಂಥ ಕಾವ್ಯಗಳನ್ನು ಸಂಪಾದಿಸಿಕೊಟ್ಟ ಕನ್ನಡದ ಹಿರಿಯ ವಿದ್ವಾಂಸರಾದ ಎಲ್ಲ ಸಂಪಾದಕರಿಗೆ ಕೃತಜ್ಞತೆ ಹೇಳುವುದು ಮಾತ್ರ ಈಗ ನಮಗೆ ಸಾಧ್ಯವಾಗಿದೆ.

ಪಂಪಕವಿಯಿಂದ ಆರಂಭಗೊಂಡ ಲೌಕಿಕ – ಆಗಮಿಕ ಕಾವ್ಯವಿಭಜನೆಯ ಪರಂಪರೆಯನ್ನು ಸ್ಥೂಲವಾಗಿ ಅನುಸರಿಸಿಕೊಂಡು ವಸ್ತು ಆಶ್ರಯಗಳ ದೃಷ್ಟಿಯಿಂದ ರೂಪಾಂತರಗಳನ್ನು ಮಾಡಿಕೊಂಡ ಕವಿಗಳಲ್ಲಿ ನೇಮಿಚಂದ್ರ ಪ್ರಮುಖ. ಕರ್ನಾಟಕ ಕೃತಿಗೆ ಸೀಮಾಪುರುಷರಲ್ಲಿ ಒಬ್ಬನೆಂದು ಹೆಸರು ಪಡೆದ ನೇಮಿಚಂದ್ರ ಪರಂಪರಾಗತ ಕನ್ನಡ ಜೈನ ಚಂಪೂಕಾವ್ಯ ಪರಂಪರೆಯ ಉತ್ತರದ ಸೀಮೆಯಾಗಿಯೂ ಕಾಣಿಸಿಕೊಳ್ಳುತ್ತಾನೆ. ಲೀಲಾವತೀ ಪ್ರಬಂಧಂ ಎನ್ನುವ ಲೌಕಿಕ ಕಾವ್ಯ, ನೇಮಿನಾಥ ಪುರಾಣಂ ಎನ್ನುವ ಆಗಮಿಕ ಕಾವ್ಯಗಳನ್ನು ನಿರ್ಮಾಣ ಮಾಡುತ್ತಲೇ ಪರಂಪರೆಯನ್ನು ತುದಿ ಮುಟ್ಟಿಸುವ ನೇಮಿಚಂದ್ರ, ಇನ್ನೊಂದು ಕಡೆ ಕಾವ್ಯವನ್ನು ಅನನ್ಯ ಮತ್ತು ಶ್ರೇಷ್ಠ ಎಂದು ಮಾದರಿಯಾಗಿ ಉತ್ಸಾಹದಿಂದ ಮಾತನಾಡುತ್ತಾನೆ. ‘ಇದೇನು ಅಗ್ಗಳಮೋ ಕವೀಂದ್ರರಾ’ ಮತ್ತು ‘ಬೆಲೆಯಿಂದಕ್ಕುಮೆ ಕೃತಿ ಗಾವಿಲ ಭುವನದ ಭಾಗ್ಯದಿಂದಮಕ್ಕುಂ’ ಎನ್ನುವ ಜನಪ್ರಿಯ ಉದ್ಗಾರಗಳ ಮೂಲಕ ನೇಮಿಚಂದ್ರ ಕಾವ್ಯ ಪಕ್ಷಪಾತಿಯಾಗಿ ಕನ್ನಡಸಾಹಿತ್ಯ ಚರಿತ್ರೆಯಲ್ಲಿ ಪ್ರಸಿದ್ಧನಾಗಿದ್ದಾನೆ. ನೇಮಿಚಂದ್ರನ ಪೂರ್ವದ ಕವಿಗಳು ತಮ್ಮ ಕಾವ್ಯದ ರಸಗಳ ಬಗ್ಗೆ ಪ್ರತ್ಯೇಕವಾಗಿ ಚರ್ಚಿಸಿದವರಲ್ಲ. ಆದರೆ, ನೇಮಿಚಂದ್ರನು ‘ಶೃಂಗಾರಮೆ ರಸಂ’ ಎನ್ನುವ ಪದ್ಯದಲ್ಲಿ ‘ಲೀಲಾವತೀ ಪ್ರಬಂಧ’ ಕಾವ್ಯದ ವಸ್ತುವಿನ್ಯಾಸವನ್ನಷ್ಟೇ ಹೇಳದೆ, ತನ್ನ ಹಾಗೂ ತನ್ನ ಕಾಲದ ರಸಿಕರ ಶೃಂಗಾರ ರಸದ ಅಭಿರುಚಿಯನ್ನು ಪ್ರಕಟಿಸುತ್ತಾನೆ. ‘ಲೀಲಾವತೀ ಪ್ರಬಂಧ’ ಕಾವ್ಯದ ವಸ್ತುವಿನ್ಯಾಸವನ್ನಷ್ಟೇ ಹೇಳದೆ, ತನ್ನ ಹಾಗೂ ತನ್ನ ಕಾಲದ ರಸಿಕರ ಶೃಂಗಾರ ರಸದ ಅಭಿರುಚಿಯನ್ನು ಪ್ರಕಟಿಸುತ್ತಾನೆ. ‘ಲೀಲಾವತೀ ಪ್ರಬಂಧ’ ಕಾವ್ಯದ ವಸ್ತುವಿನ ಆಯ್ಕೆಯು ಶೃಂಗಾರ ಪ್ರಧಾನವಾದ ರಸವತ್ತಾದ ಕಥನವೊಂದನ್ನು ಕಾವ್ಯವನ್ನಾಗಿಸಬೇಕು ಎನ್ನುವ ಸ್ಪಷ್ಟ ಉದ್ದೇಶವನ್ನು ಹೊಂದಿದೆ. ನಾಗವರ್ಮನ ‘ಕರ್ಣಾಟಕ ಕಾದಂಬರಿ’ಗೆ ಹೋಲಿಸುವಾಗಲೂ ಅಲ್ಲಿಯ ವಿಪ್ರಲಂಭ ಶೃಂಗಾರದ ವರ್ಣನೆಗಳು ಅಧಿಕವಾಗಿವೆ. ಹತ್ತನೆಯ ಶತಮಾನದಿಂದ ಹನ್ನೆರಡನೆಯ ಶತಮಾನದ ವೇಳೆಗೆ ಜೈನಕವಿಯೊಬ್ಬ ಬದಲಾಗುತ್ತಿರುವ ಪರಿಸರದ ರಸಿಕರ ಅಭಿರುಚಿಗಳನ್ನು ಗಮನಿಸಿಕೊಂಡು ಕಾವ್ಯದ ವಸ್ತು ಮತ್ತು ಶೈಲಿಯನ್ನು ಬದಲಾಯಿಸಿಕೊಂಡಿರುವುದು ಸ್ಪಷ್ಟವಾಗುತ್ತದೆ. ಜನಮೆಚ್ಚುಗೆಗಾಗಿ ಶೃಂಗಾರಸದ ಅತಿಯಾದ ವರ್ಣನಾತ್ಮಕ ಚಿತ್ರಣ, ಪಂಡಿತರ ಮೆಚ್ಚುಗೆಗಾಗಿ ಸಂಸ್ಕೃತ ಭೂಯಿಷ್ಠ ಪದನಿರ್ಮಾಣ ಚಾತುರ್ಯ ಇವೆರಡನ್ನು ಒಟ್ಟಿಗೆ ಕೊಂಡುಹೋಗುವ ವಿನ್ಯಾಸ ನೇಮಿಚಂದ್ರನಲ್ಲಿ ಕಾಣಿಸುತ್ತದೆ.

ನೇಮಿಚಂದ್ರನ ನೇಮಿನಾಥ ಪುರಾಣದ ಆಯ್ಕೆ ಕೂಡ ಆತನ ಕಾಲದ ಒಟ್ಟು ಮನೋಧರ್ಮಕ್ಕೆ ಪೂರಕವಾಗಿದೆ. ಅರ್ಧನೇಮಿ ಪುರಾಣವೆಂದು ಕರೆಯಲಾಗುವ ಈಗ ದೊರೆತಿರುವ ಕಾವ್ಯಭಾಗವನ್ನು ಗಮನಿಸಿದಾಗಲೂ ಭಾರತ ಮತ್ತು ಹರಿವಂಶದ ಜನಪ್ರಿಯತೆ ಮತ್ತು ಅದಕ್ಕೆ ಪೂರಕವಾದ ರಮ್ಯಪ್ರಸಂಗಗಳು ನೇಮಿನಾಥ ಪುರಾಣದ ಜನಸಮ್ಮುಖತೆಗೆ ಕಾರಣವಾಗಿದೆ. ಈ ಕಾವ್ಯದಲ್ಲಿ ಕೂಡ ಶಾಸ್ತ್ರಜ್ಞಾನ ಪ್ರಧಾನವಾಗಿದ್ದು ಆತನ ಪಾಂಡಿತ್ಯದ ಪೂರ್ಣ ತೆರೆದುಕೊಳ್ಳುವಿಕೆಗೆ ಕೃತಿ ಬಳಕೆಯಾಗಿದೆ. ನೇಮಿನಾಥ ಪುರಾಣದಲ್ಲಿ ನವರಸಗಳ ಅಭಿವ್ಯಕ್ತಿಗೆ ಅಪರಿಮಿತ ಅವಕಾಶ ದೊರಕಿದೆ.

ನೇಮಿಚಂದ್ರನ ಎರಡು ಕಾವ್ಯಗಳು ಚಂಪೂಕಾವ್ಯಗಳು. ಇವು ಪರಂಪರಾಗತವಾದ ತಾಂತ್ರಿಕ ಅರ್ಥದಲ್ಲಿ ವಸ್ತುಕಕಾವ್ಯಗಳು. ಆದರೆ, ಎರಡೂ ಕಾವ್ಯಗಳಲ್ಲಿಯೂ ಕವಿ ಬಳಸಿರುವ ವಿಸ್ತಾರವಾದ ವರ್ಣನೆಗಳನ್ನು ಗಮನಿಸಿದಾಗ ಇವು ವರ್ಣಕ ಕಾವ್ಯಗಳೆನ್ನುವ ಹೆಸರನ್ನು ಪಡೆಯಲು ಅರ್ಹವಾಗುತ್ತವೆ. ಹೀಗೆ ತೋರಿಕೆಗೆ ವಸ್ತುಕವಾಗಿ ನಿರ್ವಹಣೆಯಲ್ಲಿ ವರ್ಣಕವಾಗಿ ಮುಂದಿನ ಮಧ್ಯಯುಗೀನ ವರ್ಣಕ ಕಾವ್ಯಗಳ ನಿರ್ಮಾಣಕ್ಕೆ ರಂಗವನ್ನು ಸಜ್ಜುಗೊಳಿಸಿದ ನೇಮಿಚಂದ್ರ ಈ ದೃಷ್ಟಿಯಿಂದಲೂ ಸೀಮಾಪುರುಷ. ‘ಕಾವ್ಯದ ಆತ್ಮರಸ’ ಮತ್ತು ‘ಕಾವ್ಯದ ಆತ್ಮರೀತಿ’ ಎನ್ನುವ ಎರಡೂ ಹೇಳಿಕೆಗಳು ನೇಮಿಚಂದ್ರನ ಕಾವ್ಯಗಳಿಗೆ ಸಮರ್ಪಕವಾಗಿ ಅನ್ವಯವಾಗುತ್ತವೆ.

ಹನ್ನೆರಡೆಯ ಶತಮಾನದಲ್ಲಿ ಒಂದು ಕಡೆ ಶಿವಶರಣರ ವಚನಗಳು ಭಕ್ತಿಪಂಥವನ್ನು ಸಾರುತ್ತ ಜನರನ್ನು ಲೌಕಿಕದಿಂದ ಕಡೆಗೆ ಕೊಂಡೊಯ್ಯುತ್ತಿರುವಾಗಲೇ, ಇನ್ನೊಂದು ಕಡೆ ನೇಮಿಚಂದ್ರನಂಥ ಜೈನಕವಿಗಳು ಲೌಕಿಕ – ಅಲೌಕಿಕ ಎರಡೂ ಕೃತಿಗಳಲ್ಲಿಯೂ ರಸಾಪೇಕ್ಷಿಯಾದ ಲೌಕಿಕದ ಕಡೆಗೆ ಜನರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದರು ಎನ್ನುವುದಕ್ಕೆ ಈ ಎರಡೂ ಕೃತಿಗಳು ಸಾಕ್ಷಿಯಾಗಿವೆ. ಇಂಗ್ಲಿಷ್ ಸಾಹಿತ್ಯ ವಿಮರ್ಶೆಯಲ್ಲಿ ಶೆಲ್ಲಿ ಕಾವ್ಯದ ಸಮರ್ಥನೆಯನ್ನು ಮಾಡಿದಂತೆ ಅದಕ್ಕಿಂತ ಬಹಳ ಹಿಂದೆಯೆ ನೇಮಿಚಂದ್ರ ಈ ಕೆಲಸವನ್ನು ತನ್ನ ಕಾವ್ಯಗಳ ಮೂಲಕ ಮಾಡಿದ್ದಾನೆ. ಹೀಗೆ ಕಾವ್ಯದ ಅನನ್ಯತೆ, ರಸಗಳ ಅನುಸಂಧಾನ, ಕಾವ್ಯತತ್ವದ ಪ್ರತಿಪಾದನೆ ಈ ನಿಟ್ಟಿನಿಂದ ನೇಮಿಚಂದ್ರ ಕನ್ನಡ ಕಾವ್ಯಲೋಕದಲ್ಲಿ ತನ್ನದೇ ಛಾಪನ್ನು ಮೂಡಿಸಿದ ಅನನ್ಯ ಕವಿಯಾಗಿದ್ದಾನೆ.

ನೇಮಿಚಂದ್ರನು ಈ ಎರಡೂ ಕಾವ್ಯಗಳನ್ನು ಸಮರ್ಥವಾಗಿ ಅಚ್ಚುಕಟ್ಟಾಗಿ ಸಂಪಾದಿಸಿಕೊಟ್ಟವರು ಕನ್ನಡದ ಹಿರಿಯ ಪ್ರಾಧ್ಯಾಪಕ ವಿದ್ವಾಂಸರಾದ ಪ್ರೊ.ದೇ.ಜವರೇಗೌಡರು. ದೇಜಗೌ ಅವರ ಹೆಸರು ಕನ್ನಡ ವಿದ್ವತ್ತು, ಕನ್ನಡ ಮಾಧ್ಯಮ, ಕನ್ನಡ ಆಡಳಿತಗಳಲ್ಲಿ ಅವಿನಾಭಾವ ಹೊಂದಿದೆ. ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಕೋಶ – ವಿಶ್ವಕೋಶ ಗ್ರಂಥಗಳ ನಿರ್ಮಾಣ, ನಿಘಂಟಗಳ ರಚನೆ, ಸಾಹಿತ್ಯ ಚರಿತ್ರೆಗಳ ಪುನರುಜ್ಜೀವನಗಳನ್ನು ನಡೆಸಿದ್ದಾರೆ. ಪ್ರಾಚೀನ ಕನ್ನಡ ಸಾಹಿತ್ಯದ ನೇಮಿಚಂದ್ರ, ನಂಜುಂಡ, ಆಂಡಯ್ಯ, ನಯಸೇನ ಮುಂತಾದ ಕವಿಗಳ ಕಾವ್ಯಗಳನ್ನು ಶಾಸ್ತ್ರೀಯವಾಗಿ ಸಂಪಾದಿಸಿದ್ದಾರೆ. ಜಗತ್ತಿನ ಶ್ರೇಷ್ಟಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಕುವೆಂಪು ಮತ್ತು ಕನ್ನಡವನ್ನು ದಿವ್ಯಮಂತ್ರವನ್ನಾಗಿ ಸ್ವೀಕರಿಸಿಕೊಂಡು ಇಂದಿಗೂ ಕನ್ನಡಪರ ಆಂದೋಲನಗಳ ಮುಂಚೂಣಿಯಲ್ಲಿದ್ದಾರೆ. ಜೈನ ಸಾಹಿತ್ಯ ಸಂಪುಟಗಳ ಉನ್ನತ ಸಲಹಾ ಸಮಿತಿಯ ಸದಸ್ಯರಾಗಿರುವ ಪ್ರೊ. ದೇಜಗೌ ಅವರು ನೇಮಿಚಂದ್ರನ ಲೀಲಾವತೀ ಪ್ರಬಂಧ, ಅರ್ಧನೇಮಿ ಪುರಾಣಗಳನ್ನು ಸಮರ್ಪಕವಾಗಿ ಸಂಪಾದಿಸಿ ಅಧ್ಯಯನಪೂರ್ಣ ಪ್ರಸ್ತಾವನೆಯನ್ನು ಬರೆದಿರುವುದಕ್ಕಾಗಿ ಕನ್ನಡ ವಿಶ್ವವಿದ್ಯಾಲಯದ ಪರವಾಗಿ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

ಬಿ.ಎ. ವಿವೇಕ ರೈ
ಕುಲಪತಿ