ಕರ್ನಾಟಕದ ಆಧುನಿಕ ಚರಿತ್ರೆಯಲ್ಲಿ ಕರ್ನಾಟಕ ಏಕೀಕರಣ ಒಂದು ಮಹತ್ವಪೂರ್ಣ ಐತಿಹಾಸಿಕ ಘಟನೆ. ಹಾಗೆಯೇ ಕನ್ನಡ ವಿಶ್ವವಿದ್ಯಾಲಯದ ಸ್ಥಾಪನೆಯೂ ಮತ್ತೊಂದು ಮಹತ್ವದ ಘಟನೆ. ಕನ್ನಡ-ಕನ್ನಡಿಗ-ಕರ್ನಾಟಕ ಸಂಸ್ಕೃತಿಯ ಕಲ್ಪನೆಯಡಿಯಲ್ಲಿ ಅಸ್ತಿತ್ವಕ್ಕೆ ಬಂದ ಕನ್ನಡ ವಿಶ್ವವಿದ್ಯಾಲಯದ ಆಶಯ ಮತ್ತು ಗುರಿ ಇತರ ವಿಶ್ವವಿದ್ಯಾಲಯಗಳಿಗಿಂತ ಭಿನ್ನ ಹಾಗೂ ಪ್ರಗತಿಪರ. ಕನ್ನಡದ ಸಾಮರ್ಥ್ಯವನ್ನು ಎಚ್ಚರಿಸುವ ಕಾಯಕವನ್ನು ಉದ್ದಕ್ಕೂ ಅದು ನೋಂಪಿಯಿಂದ ಮಾಡಿಕೊಂಡು ಬಂದಿದೆ. ಕರ್ನಾಟಕತ್ವದ ‘ವಿಕಾಸ’ ಈ ವಿಶ್ವವಿದ್ಯಾಲಯದ ಮಹತ್ತರ ಆಶಯವಾಗಿದೆ.

ಕನ್ನಡ ಅಧ್ಯಯನ ಮೂಲತಃ ಶುದ್ಧ ಜ್ಞಾನದ, ಕಾಲ, ದೇಶ, ಜಿವನ ತತ್ವದ ಪರವಾಗಿರುವುದರ ಜೊತೆಗೆ ಅಧ್ಯಯನವನ್ನು ಒಂದು ವಾಗ್ವಾದದ ಭೂಮಿಕೆ ಎಂದು ನಾವು ಭಾವಿಸಬೇಕಾಗಿದೆ. ಕನ್ನಡ ಬದುಕಿನ ಚಿಂತನೆಯ ಭಾಗವೆಂದೇ ಅದನ್ನು ರೂಪಿಸಿ ವಿವರಿಸಬೇಕಾಗಿದೆ. ಅಂದರೆ : ದೇಶಿ ಬೇರುಗಳ ಗುರುತಿಸುವಿಕೆ ಕನ್ನಡ ಅಧ್ಯಯನದ ಮುಖ್ಯ ಭಿತ್ತಿಯಾಗಬೇಕಾಗಿದೆ. ಕನ್ನಡ ಸಂಸ್ಕೃತಿಯು ಬಹುತ್ವದ ನೆಲೆಗಳನ್ನು ಆಧರಿಸಿ ರೂಪುಗೊಂಡಿದೆ. ಸಮಾಜಮುಖಿ ಚಿಂತನೆಗಳ ವ್ಯಾಪಕ ಅಧ್ಯಯನ ಬದುಕಿನ ಸಂಕೀರ್ಣ ಲಕ್ಷಣಗಳ ಸ್ವರೂಪವನ್ನು ಇದು ಪರಿಚಯಿಸುತ್ತದೆ. ನಾವು ಇದನ್ನು ಎಲ್ಲ ವಲಯಗಳಲ್ಲಿ ಕನ್ನಡದ ಅನುಷ್ಠಾನದ ಮೂಲಕ ಉಳಿಸಿ, ಬೆಳೆಸಬೇಕಾಗಿದೆ. ಆಗ ಕನ್ನಡ ಸಂಸ್ಕೃತಿಯು ವಿಶ್ವಪ್ರಜ್ಞೆಯಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ‘ಕನ್ನಡದ್ದೆ ಮಾದರಿ’ ಯ ಶೋಧ ಇಂದಿನ ಮತ್ತು ಬರುವ ದಿನಗಳ ತೀವ್ರ ಅಗತ್ಯವಾಗಿದೆ.

ಕನ್ನಡ ಸಂಸ್ಕೃತಿಯ ಭಾಗವಾಗಿರುವ ಕನ್ನಡ ಅಧ್ಯಯನವು ಕಾಲದಿಂದ ಕಾಲಕ್ಕೆ ಹೊಸ ತಿಳುವಳಿಕೆಯನ್ನು ತನ್ನ ತೆಕ್ಕೆಗೆ ಜೊಡಿಸಿಕೊಳ್ಳುತ್ತ ಬಂದಿದೆ. ಹೀಗಾಗಿ ವಿದೇಶಿ ಮತ್ತು ದೇಶಿ ವಿದ್ವಾಂಸರು ತೊಡಗಿಸಿಕೊಂಡ ಈ ವಿದ್ವತ್ ಕ್ಷೇತ್ರದಲ್ಲಿ ಮುಂದಿನ ವಿದ್ವಾಂಸರು ಕಾಲದಿಂದ ಕಾಲಕ್ಕೆ ಹೊಸ ಬೆಳೆಯನ್ನು ತೆಗೆಯುತ್ತ ಬಂದಿದ್ದಾರೆ. ಕನ್ನಡ ಅಧ್ಯಯನ ಪಳೆಯುಳಿಕೆಯ ಶಾಸ್ತ್ರವಾಗದೆ, ಬದಲಾಗುತ್ತಿರುವ ಕಾಲಮಾನದಲ್ಲಿ ಎದುರಾಗುತ್ತಿರುವ ಆಹ್ವಾನಕ್ಕೆ ತಕ್ಕಂತೆ ತನ್ನ ಗತಿಯನ್ನು ಬದಲಾಯಿಸಿಕೊಳ್ಳುತ್ತ ಬಂದಿರುವುದು ಗಮನಿಸತಕ್ಕ ಅಂಶ. ಸಾಂಪ್ರದಾಯಿಕ ಚಿಂತನೆಗಳು ಆಧುನೀಕರಣ ಈ ಕಾಲಘಟ್ಟದಲ್ಲಿ ಸಕಾಲಿಕಗೊಳ್ಳುವುದು ಅನಿವಾರ್ಯವಾಗಿದೆ. ಮಾಹಿತಿ ತಂತ್ರಜ್ಞಾನದ ಮೂಲಕ ಜಗತ್ತಿನ ಜ್ಞಾನಪ್ರವಾಹವೇ ನಮ್ಮ ಅಂಗೈಯೊಳಗೆ ಚುಳುಕಾಗುವ ಈ ಸಂದರ್ಭದಲ್ಲಿ ಕನ್ನಡದ ಚಹರೆ ಮತ್ತು ಕನ್ನಡ ಭಾಷೆಯ ಚಲನಶೀಲತೆಯನ್ನು ಶೋಧಿಸಲಿಕ್ಕೆ ಭಾಷಾ ಆಧುನೀಕರಣ ಮತ್ತು ಪ್ರಮಾಣೀಕರಣದ ಪ್ರಕ್ರಿಯೆಗಳ ನೆಲೆಯಲ್ಲಿ ಅಧ್ಯಯನದ ಹೊಸ ಸಾಧ್ಯತೆಗಳನ್ನು ಅನುಲಕ್ಷಿಸಿ, ಭಾಷಾನಿತಿ, ಭಾಷಾಯೋಜನೆ ರೂಪಿಸುವುದು ಅನಿವಾರ್ಯ ಹಾಗೂ ಅವಶ್ಯವಾಗಿದೆ. ಆಗ ಅಧ್ಯಯನದ ಸ್ವರೂಪ ಹಾಗೂ ಬಳಕೆಯ ವಿಧಾನದಲ್ಲಿ ಪರಿವರ್ತನೆ ಸಾದ್ಯವಾಗುತ್ತದೆ.

ನಮ್ಮೆದುರಿಗೆ ನುಗ್ಗಿ ಬರುತ್ತಿರುವ ಜಾಗತೀಕರಣಕ್ಕೆ ಪ್ರತಿರೋಧವಾಗಿ ನಮ್ಮ ದೇಶೀಯ ಜ್ಞಾನಪರಂಪರೆಯನ್ನು ಮರುಶೋಧಿಸಿ ಆ ಮೂಲಕ ಕುಸಿಯುತ್ತಿರುವ ನಮ್ಮ ಬೇರುಗಳನ್ನು ಬಲಗೊಳಿಸಿಕೊಳ್ಳಬೇಕಾಗಿದೆ. ಭಾಷೆ, ಸಾಹಿತ್ಯ, ವ್ಯಾಕರಣ, ಛಂದಸ್ಸು, ಚರಿತ್ರೆ, ಕೃಷಿ, ವೈದ್ಯ, ಪರಿಸರ ಮುಂತಾದ ಅಧ್ಯಯನ ವಿಷಯಗಳನ್ನು ಹೊಸ ಆಲೋಚನೆಯ ನೆಲೆಯಲ್ಲಿ ವಿಶ್ಲೇಷಿಸಬೇಕಾಗಿದೆ. ಆಧುನಿಕ ವಿಜ್ಞಾನ, ತಂತ್ರಜ್ಞಾನವೇ ‘ಜ್ಞಾನ’ ಎಂದು ರೂಪಿಸಿರುವ ಇಂದಿನ ಆಲೋಚನೆಗೆ ಪ್ರತಿಯಾಗಿ ಈ ಜ್ಞಾನಶಾಖೆಗಳಲ್ಲಿ ಹುದುಗಿರುವ ದೇಶಿ ಪರಂಪರೆಯ ಜ್ಞಾನದ ಹುಡುಕಾಟ ನಡೆಯಬೇಕಾಗಿದೆ. ಅಂತಹ ಪ್ರಯತ್ನಗಳಿಗೆ ಬೇಕಾದ ಮಾರ್ಗದರ್ಶಕ ಸೂತ್ರಗಳ ಹಾಗೂ ಆಕರ ಪರಿಕರಗಳ ನಿರ್ಮಾಣದ ನೆಲೆ ತುಂಬ ಮುಖ್ಯವಾಗಿದೆ. ಕನ್ನಡ ವಿಶ್ವವಿದ್ಯಾಲಯವು ಕಳೆದ ಹದಿನೇಳು ವರ್ಷಗಳಿಂದ ಈ ಕೆಲಸಗಳನ್ನು ಹಲವು ಯೋಜನೆಗಳ ಮೂಲಕ ರೂಪಿಸಿಕೊಂಡಿದೆ. ರೂಪಿಸಿಕೊಳ್ಳುತ್ತಿದೆ. ಇದೊಂದು ಚಲನಶೀಲ ಪ್ರಕ್ರಿಯೆಯಾಗಿದೆ. ಸಮಕಾಲೀನ ಭಾಷಿಕ, ಸಾಂಸ್ಕೃತಿಕ ಸಮಸ್ಯೆಗಳಿಗೆ ಮುಖಾಮುಖಿಯಾಗುತ್ತ ಕನ್ನಡ ನಾಡುನುಡಿಯನ್ನು ಹೊಸದಾಗಿ ಶೋಧಿಸುತ್ತಾ, ವಿವರಿಸುತ್ತಾ ಬಂದಿದೆ. ಅಂದರೆ : ಕನ್ನಡದ ಅರಿವಿನ ವಿಕೇಂದ್ರೀಕರಣವೇ ವರ್ತಮಾನದ ಹೊಸ ಬೆಳವಣಿಗೆ. ಇದು ಕನ್ನಡ ವಿಶ್ವವಿದ್ಯಾಲಯದ ಜೀವಧಾತುವಾಗಿದೆ.

‘ಪುರಂದರ ಸಾಹಿತ್ಯ ಅಧ್ಯಯನ’ ಎಂಬ ಈ ಸಂಪಾದನ ಕೃತಿ ವಿಶಿಷ್ಟವಾಗಿದೆ. ಹೊಸ ಪೀಳಿಗೆಯ ವಿಮರ್ಶಕರು ಪುರಂದರರ ಕೀರ್ತನೆಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ ಗ್ರಹಿಸಿರುವುದು ಮೆಚ್ಚಬೇಕಾದ ಸಂಗತಿ. ಪುರಂದರರು ಹರಿದಾಸ ಪರಂಪರೆಯಲ್ಲಿ ಸಮರ್ಥ ಪ್ರತಿನಿಧಿಯಾಗಿ ನಿಂತವರು. ಅವರ ಕೀರ್ತನೆಗಳು ಓದುಗರ ಸತ್ವ ಸಾಮರ್ಥ್ಯವನ್ನು ಪರೀಕ್ಷಿಸುತ್ತವೆ. ಇದು ಶತಮಾನಗಳ ಉದ್ದಕ್ಕೂ ನಿರಂತರವಾಗಿ ನಡೆದುಬಂದಿದೆ. ಈ ಹೊತ್ತಿನ ಸಾಂಸ್ಕೃತಿಕ ವಿದ್ಯಮಾನಗಳ ನೆಲೆಯಲ್ಲಿ ಪುರಂದರರ ಕೀರ್ತನೆಗಳನ್ನು ಅಧ್ಯಯನಕ್ಕೆ ಒಳಗು ಮಾಡಿದರೂ ಅವು ಗೆಲ್ಲುತ್ತವೆ. ಹೊಸ ಚಿಂತನೆಗಳು ಹೊರಹೊಮ್ಮುತ್ತವೆ ಎಂಬುದಕ್ಕೆ ಈ ವಿಚಾರ ಸಂಕೀರ್ಣದ ಕೃತಿಯೇ ಸಾಕ್ಷಿಯಾಗಿದೆ. ಪ್ರಭುತ್ವ, ಸಮಾಜ, ಅನುಭಾವ, ದೇಸೀಯತೆ, ಲೋಕದೃಷ್ಟಿ, ಜೀವನಪ್ರೀತಿ ಮುಂತಾದ ಪರಿಕಲ್ಪನಾತ್ಮಕ ವಸ್ತುಗಳ, ವಿಷಯಗಳ ಶೋಧಕ್ಕೆ ಪುರಂದರರ ಕೀರ್ತನೆಗಳು ಆಕರವಾಗಿ ಬಳಕೆಯಾಗಿರುವುದು ವಿಶೇಷವೇ. ಈ ಬಗೆಯಲ್ಲಿ ವಿಚಾರ ಸಂಕೀರಣವನ್ನು ನಡೆಸಿ, ಹೊಸ ಪೀಳಿಗೆಯ ವಿಮರ್ಶಕರಿಂದ ಪ್ರಬಂಧವನ್ನು ಬರೆಯಿಸಿ, ಸಂಪಾದಿಸಿ ಈ ಕೃತಿಯನ್ನು ಸಿದ್ಧಪಡಿಸಿದ ಡಾ. ಅಮರೇಶ ನುಗಡೋಣಿ ಅಭಿನಂದನಾರ್ಹರು.

ಈ ಗ್ರಂಥವನ್ನು ಅಚ್ಚುಕಟ್ಟಾಗಿ ಹೊರತರುತ್ತಿರುವ ಪ್ರಸಾರಾಂಗದ ನಿರ್ದೇಶಕರಾದ ಡಾ. ಮಂಜುನಾಥ ಬೇವಿನಕಟ್ಟಿ ಮತ್ತು ಸಹಾಯಕ ನಿದೇರ್ಶಕರಾದ ಶ್ರೀ ಬಿ. ಸುಜ್ಞಾನಮೂರ್ತಿ ಅವರಿಗೆ ಆಭಾರಿಯಾಗಿದ್ದೇನೆ.

ಡಾ. ಎ. ಮುರಿಗೆಪ್ಪ
ಕುಲಪತಿ