ಕರ್ನಾಟಕದ ಆಧುನಿಕ ಚರಿತ್ರೆಯಲ್ಲಿ ಕರ್ನಾಟಕ ಏಕೀಕರಣ ಒಂದು ಮಹತ್ವಪೂರ್ಣ ಐತಿಹಾಸಿಕ ಘಟನೆ. ಹಾಗೆಯೇ ಕನ್ನಡ ವಿಶ್ವವಿದ್ಯಾಲಯದ ಸ್ಥಾಪನೆಯೂ ಮತ್ತೊಂದು ಮಹತ್ವದ ಘಟನೆ. ಕನ್ನಡ-ಕನ್ನಡಿಗ-ಕರ್ನಾಟಕ ಸಂಸ್ಕೃತಿಯ ಕಲ್ಪನೆಯಡಿಯಲ್ಲಿ ಅಸ್ತಿತ್ವಕ್ಕೆ ಬಂದ ಕನ್ನಡ ವಿಶ್ವವಿದ್ಯಾಲಯದ ಹರವು ವಿಸ್ತಾರವಾದದ್ದು. ಈ ಕಾರಣದಿಂದ ಕನ್ನಡ ವಿಶ್ವವಿದ್ಯಾಲಯದ ಆಶಯ ಮತ್ತು ಗುರಿ ಇತರ ವಿಶ್ವವಿದ್ಯಾಲಯಗಳಿಗಿಂತ ಭಿನ್ನ ಹಾಗೂ ಪ್ರಗತಿಪರ. ಕನ್ನಡದ ಸಾಮರ್ಥ್ಯವನ್ನು ಎಚ್ಚರಿಸುವ ಕಾಯಕವನ್ನು ಉದ್ದಕ್ಕೂ ಅದು ನೋಂಪಿಯಿಂದ ಮಾಡಿಕೊಂಡು ಬಂದಿದೆ. ಕರ್ನಾಟಕತ್ವದ ‘ವಿಕಾಸ’ ಈ ವಿಶ್ವವಿದ್ಯಾಲಯದ ಮಹತ್ತರ ಆಶಯವಾಗಿದೆ.

ಕನ್ನಡ ಅಧ್ಯಯನ ಮೂಲತಃ ಶುದ್ಧ ಜ್ಞಾನದ, ಕಾಲ, ದೇಶ, ಜೀವನ ತತ್ವದ ಪರವಾಗಿರುವುದರ ಜೊತೆಗೆ ಅಧ್ಯಯನವನ್ನು ಒಂದು ವಾಗ್ವಾದದ ಭೂಮಿಕೆ ಎಂದು ನಾವು ಭಾವಿಸಬೇಕಾಗಿದೆ. ಕನ್ನಡ ಬದುಕಿನ ಚಿಂತನೆಯ ಭಾಗವೆಂದೇ ಅದನ್ನು ರೂಪಿಸಿ ವಿವರಿಸಬೇಕಾಗಿದೆ. ಅಂದರೆ : ದೇಸಿ ಬೇರುಗಳ ಗುರುತಿಸುವಿಕೆ ಕನ್ನಡ ಅಧ್ಯಯನದ ಮುಖ್ಯ ಭಿತ್ತಿಯಾಗಬೇಕಾಗಿದೆ. ಕನ್ನಡ ಸಂಸ್ಕೃತಿಯು ಬಹುತ್ವದ ನೆಲೆಗಳನ್ನು ಆಧರಿಸಿ ರೂಪುಗೊಂಡಿದೆ. ಸಮಾಜಮುಖಿ ಚಿಂತನೆಗಳ ವ್ಯಾಪಕ ಅಧ್ಯಯನ ಬದುಕಿನ ಸಂಕೀರ್ಣ ಲಕ್ಷಣಗಳ ಸ್ವರೂಪವನ್ನು ಇದು ಪರಿಚಯಿಸುತ್ತದೆ. ನಾವು ಇದನ್ನು ಎಲ್ಲ ವಲಯಗಳಲ್ಲಿ ಕನ್ನಡದ ಅನುಷ್ಠಾನದ ಮೂಲಕ ಉಳಿಸಿ, ಬೆಳೆಸಬೇಕಾಗಿದೆ. ಆಗ ಕನ್ನಡ ಸಂಸ್ಕೃತಿಯು ವಿಶ್ವಪ್ರಜ್ಞೆಯಾಗಿ ರೂಪು ಗೊಳ್ಳಲು ಸಾಧ್ಯವಾಗುತ್ತದೆ. ‘ಕನ್ನಡದ್ದೇ ಮಾದರಿ’ಯ ಶೋಧ ಇಂದಿನ ಮತ್ತು ಬರುವ ದಿನಗಳ ತೀವ್ರ ಅಗತ್ಯವಾಗಿದೆ.

ಕನ್ನಡ ಸಂಸ್ಕೃತಿಯ ಭಾಗವಾಗಿರುವ ಕನ್ನಡ ಅಧ್ಯಯನವು ಕಾಲದಿಂದ ಕಾಲಕ್ಕೆ ಹೊಸ ತಿಳಿವಳಿಕೆಯನ್ನು ತನ್ನ ತೆಕ್ಕೆಗೆ ಜೋಡಿಸಿಕೊಳ್ಳುತ್ತ ಬಂದಿದೆ. ಹೀಗಾಗಿ ವಿದೇಶಿ ಮತ್ತು ದೇಶಿ ವಿದ್ವಾಂಸರು ತೊಡಗಿಸಿಕೊಂಡ ಈ ವಿದ್ವತ್‌ಕ್ಷೇತ್ರದಲ್ಲಿ ಮುಂದಿನ ವಿದ್ವಾಂಸರು ಕಾಲದಿಂದ ಕಾಲಕ್ಕೆ ಹೊಸಬೆಳೆಯನ್ನು ತೆಗೆಯುತ್ತ ಬಂದಿದ್ದಾರೆ. ಕನ್ನಡ ಅಧ್ಯಯನ ಪಳೆಯುಳಿಕೆಯ ಶಾಸ್ತ್ರವಾಗದೆ, ಬದಲಾಗುತ್ತಿರುವ ಕಾಲಮಾನದಲ್ಲಿ ಎದುರಾಗುತ್ತಿರುವ ಆಹ್ವಾನಕ್ಕೆ ತಕ್ಕಂತೆ ತನ್ನ ಗತಿಯನ್ನು ಬದಲಾಯಿಸಿಕೊಳ್ಳುತ್ತ ಬಂದಿರುವುದು ಗಮನಿಸತಕ್ಕ ಅಂಶ. ಸಾಂಪ್ರದಾಯಿಕ ಚಿಂತನೆಗಳು ಆಧುನೀಕರಣದ ಈ ಕಾಲಘಟ್ಟದಲ್ಲಿ ಸಕಾಲಿಕಗೊಳ್ಳುವುದು ಅನಿವಾರ್ಯವಾಗಿದೆ. ಮಾಹಿತಿ ತಂತ್ರಜ್ಞಾನದ ಮೂಲಕ ಜಗತ್ತಿನ ಜ್ಞಾನಪ್ರವಾಹವೇ ನಮ್ಮ ಅಂಗೈಯೊಳಗೆ ಚುಳುಕಾಗುವ ಈ ಸಂದರ್ಭದಲ್ಲಿ ಕನ್ನಡದ ಚಹೆ ಮತ್ತು ಕನ್ನಡ ಭಾಷೆಯ ಚಲನಶೀಲತೆ ಯನ್ನು ಶೋಧಿಸಲಿಕ್ಕೆ ಭಾಷಾ ಆಧುನೀಕರಣ ಮತ್ತು ಪ್ರಮಾಣೀಕರಣದ ಪ್ರಕ್ರಿಯೆಗಳ ನೆಲೆಯಲ್ಲಿ ಅಧ್ಯಯನದ ಹೊಸ ಸಾಧ್ಯತೆಗಳನ್ನು ಅನುಲಕ್ಷಿಸಿ, ಭಾಷಾನೀತಿ, ಭಾಷಾಯೋಜನೆ ರೂಪಿಸುವುದು ಅನಿವಾರ್ಯ ಹಾಗೂ ಅವಶ್ಯವಾಗಿದೆ. ಆಗ ಅಧ್ಯಯನದ ಸ್ವರೂಪ ಹಾಗೂ ಬಳಕೆಯ ವಿಧಾನದಲ್ಲಿ ಪರಿವರ್ತನೆ ಸಾಧ್ಯವಾಗುತ್ತದೆ.

ನಮ್ಮೆದುರು ನುಗ್ಗಿ ಬರುತ್ತಿರುವ ಜಾಗತೀಕರಣಕ್ಕೆ ಪ್ರತಿರೋಧವಾಗಿ ನಮ್ಮ ದೇಶೀಯ ಜ್ಞಾನಪರಂಪರೆಯನ್ನು ಮರುಶೋಧಿಸಿ ಆ ಮೂಲಕ ಕುಸಿಯುತ್ತಿರುವ ನಮ್ಮ ಬೇರುಗಳನ್ನು ಬಲಗೊಳಿಸಿಕೊಳ್ಳಬೇಕಾಗಿದೆ. ಭಾಷೆ, ಸಾಹಿತ್ಯ, ವ್ಯಾಕರಣ, ಛಂದಸ್ಸು, ಚರಿತ್ರೆ, ಕೃಷಿ, ವೈದ್ಯ, ಪರಿಸರ ಮುಂತಾದ ಅಧ್ಯಯನ ವಿಷಯಗಳನ್ನು ಹೊಸ ಆಲೋಚನೆಯ ನೆಲೆಯಲ್ಲಿ ವಿಶ್ಲೇಷಿಸಬೇಕಾಗಿದೆ. ಆಧುನಿಕ ವಿಜ್ಞಾನ, ತಂತ್ರಜ್ಞಾನವೇ ‘ಜ್ಞಾನ’ ಎಂದು ರೂಪಿಸಿರುವ ಇಂದಿನ ಆಲೋಚನೆಗೆ ಪ್ರತಿಯಾಗಿ ಈ ಜ್ಞಾನಶಾಖೆಗಳಲ್ಲಿ ಹುದುಗಿರುವ ದೇಶಿ ಪರಂಪರೆಯ ಜ್ಞಾನದ ಹುಡುಕಾಟ ನಡೆಯಬೇಕಾಗಿದೆ. ಅಂತಹ ಪ್ರಯತ್ನಗಳಿಗೆ ಬೇಕಾದ ಮಾರ್ಗದರ್ಶಕ ಸೂತ್ರಗಳ ಹಾಗೂ ಆಕರ ಪರಿಕರಗಳ ನಿರ್ಮಾಣದ ನೆಲೆ ತುಂಬ ಮುಖ್ಯವಾಗಿದೆ. ಕನ್ನಡ ವಿಶ್ವವಿದ್ಯಾಲಯವು ಕಳೆದ ಹದಿನಾರು ವರ್ಷಗಳಿಂದ ಈ ಕೆಲಸಗಳನ್ನು ಹಲವು ಯೋಜನೆಗಳ ಮೂಲಕ ರೂಪಿಸಿಕೊಂಡಿದೆ, ರೂಪಿಸಿಕೊಳ್ಳುತ್ತಿದೆ. ಇದೊಂದು ಚಲನಶೀಲ ಪ್ರಕ್ರಿಯೆ ಯಾಗಿದೆ. ಸಮಕಾಲೀನ ಭಾಷಿಕ, ಸಾಂಸ್ಕೃತಿಕ ಸಮಸ್ಯೆಗಳಿಗೆ ಮುಖಾಮುಖಿಯಾಗುತ್ತ ಕನ್ನಡ ನಾಡುನುಡಿ ಯನ್ನು ಹೊಸದಾಗಿ ಶೋಧಿಸುತ್ತಾ, ವಿವರಿಸುತ್ತಾ ಬಂದಿದೆ. ಅಂದರೆ : ಕನ್ನಡದ ಅರಿವಿನ ವಿಕೇಂದ್ರೀಕರಣವೇ ವರ್ತಮಾನದ ಹೊಸ ಬೆಳವಣಿಗೆ. ಇದು ಕನ್ನಡ ವಿಶ್ವವಿದ್ಯಾಲಯದ ಜೀವಧಾತುವಾಗಿದೆ.

ಕರ್ನಾಟಕದ ಪ್ರಾಚೀನ ಚರಿತ್ರೆಯಲ್ಲಿ ಬಾದಾಮಿ ಚಾಲುಕ್ಯರ ಇತಿಹಾಸ ಮಹತ್ವದ ವೈಶಿಷ್ಟ್ಯಗಳಿಂದ ಕೂಡಿದೆ. ವಿಶಾಲ ಕರ್ನಾಟಕದ ಕಲ್ಪನೆಗಳಿಗೆ ಅಸ್ತಿಭಾರ ಹಾಕಿದ ಈ ಮನೆತನದ ಅರಸರು ಉತ್ಕೃಷ್ಟ ಸಾಂಸ್ಕೃತಿಕ ಕೊಡುಗೆಗಳನ್ನು ಕಲಾ ಪ್ರಪಂಚಕ್ಕೆ ನೀಡಿದ್ದಾರೆ. ಕನ್ನಡ ಬರಹಕ್ಕೆ ಹೊಸ ರೂಪವನ್ನು ನೀಡಿದ ಇವರ ಕಾಲದಲ್ಲಿ ಮೊಟ್ಟಮೊದಲ ತ್ರಿಪದಿ ಪ್ರಕಾರ ಪ್ರಾರಂಭವಾಯಿತು. ಪ್ರಾಚೀನ ಕರ್ನಾಟಕದ ಅನೇಕ ಮತಪಂಥಗಳನ್ನು ಪೋಷಿಸಿ ಅವುಗಳ ನಡುವೆ ಸಮನ್ವಯತೆ ತರುವ ನಿಟ್ಟಿನಲ್ಲಿ ಈ ಅರಸರು ಆಡಳಿತ ನಿರ್ವಹಿಸಿದರು. ಇಂಥ ಸಾಕ್ಷಿಪ್ರಜ್ಞೆಗಳನ್ನು ಬಾದಾಮಿ ಪರಿಸರದಲ್ಲಿ ವಾಸ್ತುವಿಶೇಷಗಳ ಮೂಲಕ ಕಾಣುತ್ತೇವೆ.  ಇತಿಹಾಸ-ಸಂಸ್ಕೃತಿಯ ಅಧ್ಯಯನಗಳ ವಿದ್ವತ್‌ಲೋಕದ ಹಲವು ವಿದ್ವಾಂಸರು ಈ ಮನೆತನದ ಚರಿತ್ರೆ ಕುರಿತಂತೆ ಮೌಲ್ಯಯುತವಾದ ಲೇಖನಗಳನ್ನು ಈಗಾಗಲೇ ಪ್ರಕಟಿಸಿದ್ದಾರೆ. ಸಂಶೋಧನೆಯ ಮೂಸೆಯಲ್ಲಿ ಮಿಂದು ಬಂದಿರುವ ಇಂಥ ಮಹತ್ವದ ಲೇಖನಗಳನ್ನು ಸಂಕಲಿಸಿ ನೀಡಬೇಕೆನ್ನುವ ಉದ್ದೇಶದಿಂದ ಈ ಸಂಪುಟವನ್ನು ಪ್ರಕಟಿಸಲಾಗಿದೆ. ಪ್ರಾಚೀನ ಕರ್ನಾಟಕದ ಚರಿತ್ರೆಯ ಅಧ್ಯಯನಗಳಿಗೆ ಅಡಿಗಲ್ಲುಗಳಾಗಿ ರೂಪಿತವಾಗಿರುವ ಇಲ್ಲಿನ ಲೇಖನಗಳನ್ನು ಗ್ರಂಥ ರೂಪದಲ್ಲಿ ತರುವ ಕಾರ್ಯವನ್ನು ನಮ್ಮ ವಿಶ್ವವಿದ್ಯಾಲಯ ಅರ್ಥಪೂರ್ಣವಾಗಿ ಮಾಡಿದೆ. ಈ ಸಂಪುಟಕ್ಕೆ ಲೇಖನಗಳನ್ನು ಬಳಸಿಕೊಳ್ಳಲು ಅನುಮತಿ ನೀಡಿದ ವಿದ್ವಾಂಸರಿಗೆ, ಪ್ರಕಾಶನ ಸಂಸ್ಥೆಗಳಿಗೆ ವಿಶ್ವವಿದ್ಯಾಲಯದ ಪರವಾಗಿ ಕೃತಜ್ಞತೆಗಳು.

ಇಂತಹ ಮಹತ್ವದ ಕೆಲಸವನ್ನು ಆಗುಮಾಡಿಕೊಟ್ಟ ಸಂಪಾದಕತ್ರಯರಾದ ಡಾ. ಎನ್. ಚಿನ್ನಸ್ವಾಮಿ ಸೋಸಲೆ, ರಮೇಶ ನಾಯಕ ಮತ್ತು ಡಾ. ಎಂ. ಕೊಟ್ರೇಶ್ ಅವರಿಗೆ ವಿಶ್ವವಿದ್ಯಾಲಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಉಪಯುಕ್ತ ಲೇಖನಗಳುಳ್ಳ ಇಂತಹ ಸಂಪುಟವನ್ನು ಸರ್ವಾಂಗ ಸುಂದರವಾಗಿ ಕಡಿಮೆ ಅವಧಿಯಲ್ಲಿ ಪ್ರಕಟಿಸಲು ಶ್ರಮಿಸಿದ ಪ್ರಸಾರಾಂಗದ ನಿರ್ದೇಶಕರಾದ ಡಾ. ಎ. ಮೋಹನ ಕುಂಟಾರ್ ಮತ್ತು ಸಹಾಯಕ ನಿರ್ದೇಶಕರಾದ ಶ್ರೀ ಬಿ.ಸುಜ್ಞಾನಮೂರ್ತಿ ಅವರಿಗೆ ಆಭಾರಿ ಯಾಗಿದ್ದೇನೆ.

ಡಾ. ಎ. ಮುರಿಗೆಪ್ಪ
ಕುಲಪತಿ