ಕನ್ನಡನಾಡು ಏಕೀಕರಣಗೊಂಡು ಐವತ್ತುವರ್ಷ ತುಂಬಿದ ಚಿನ್ನದ ಹಬ್ಬದ ವರ್ಷದ ಈ ಸಂದರ್ಭದಲ್ಲಿ ಕನ್ನಡ ವಿಶ್ವವಿದ್ಯಾಲಯವು ಕನ್ನಡವನ್ನು ಕಟ್ಟಿದ ಹಿರಿಯರ ಸಾಹಿತ್ಯ ಕೃತಿಗಳನ್ನು ಪ್ರಕಟಿಸುವ ಕನಸಿನ ಹೊನ್ನಾರುಮಾಲೆ ಇಲ್ಲಿ ರೂಪು ತಾಳಿದೆ. ಕೃಷಿಸಂಸ್ಕೃತಿಯನ್ನು ನೆಲದ ಸಂಸ್ಕೃತಿಯನ್ನಾಗಿ ಭಾವಿಸಿ ಪರಿಭಾವಿಸಿ ಕಟ್ಟಿ ಬೆಳೆಸಿದ ಕನ್ನಡ ನಾಡಿನಲ್ಲಿ ಕನ್ನಡ ಸಾಹಿತ್ಯ ಸಂಸ್ಕೃತಿಯ ಬೀಜವನ್ನು ಬಿತ್ತಿ ಚಿನ್ನದ ಬೆಳೆಗಳನ್ನು ಬೆಳೆದ ಹಿರಿಯ ಬೇಸಾಯಗಾರರ ಒಂದೊಂದು ಹೊಸ ಬೆಳೆಯನ್ನು ನಾಡಿಗೆ ಒಪ್ಪಿಸುವ ಧನ್ಯತಾ ಭಾವ ನಮ್ಮದು. ಹೀಗೆ ಹೊನ್ನಾರು ಚಿನ್ನದ ಬೆಳೆಯೂ ಹೌದು, ಕನ್ನಡದ ಚಿಣ್ಣರಿಗೆ ಹೊಸಬೆಳೆ ಬೆಳೆಯಲು ಪ್ರೇರಣೆಯೂ ಹೌದು.

ಕಳೆದ ಐವತ್ತು ವರ್ಷಗಳಿಂದ ಕನ್ನಡ ಸಾಹಿತ್ಯ ಸಂಸ್ಕೃತಿಯ ಮಣ್ಣಿನಲ್ಲಿ ತಮ್ಮ ಅನುಭವ ಮತ್ತು ಅಧ್ಯಯನದ ಮೂಲಕ ಉತ್ಸಾಹ ಪ್ರೀತಿ ಮತ್ತು ಪರಿಶ್ರಮಗಳಿಂದ ನಿರಂತರವಾಗಿ ಕನ್ನಡದ ಬಹುಬೆಳೆಗಳನ್ನು ಬೆಳೆಸಿಕೊಂಡು ಬಂದ ಹಿರಿಯರ ಹೊಸ ಬೆಳೆಯ ಹೊನ್ನಾರು ಮಾಲೆಯಲ್ಲಿ ಅನನ್ಯ ಫಲಗಳನ್ನು ಪಡೆಯಲಾಗಿದೆ. ಸಾಹಿತ್ಯ, ಬದುಕು, ಸಂಸ್ಕೃತಿ ಇವುಗಳ ಬಗ್ಗೆ ಐವತ್ತು ವರ್ಷಗಳ ಹಿಂದೆ ಇದ್ದ ಪರಿಕಲ್ಪನೆಗಳು ಇಂದು ಬದಲಾವಣೆಗೊಂಡಿವೆ. ಯಾವುದು ಸಾಹಿತ್ಯ, ಯಾವುದ ಸಾಹಿತ್ಯ ಅಲ್ಲ ಎನ್ನುವ ಚರ್ಚೆ ಕಾಲಕಾಲಕ್ಕೆ ನಡೆದು ಬೇರೆ ಬೇರೆ ಅರ್ಥಗಳನ್ನು ಶೋಧಿಸುತ್ತ ಈ ಹಂತವನ್ನು ತಲುಪಿದೆ. ಸಾಹಿತ್ಯ ಮತ್ತು ಸಂಸ್ಕೃತಿ, ಸಾಹಿತ್ಯ ಮತ್ತು ಬದುಕು ಎನ್ನುವ ಭಿನ್ನತೆಗಳು ಕಣ್ಮರೆಯಾಗಿ ಸಂಕೀರ್ಣ ಹಾಗೂ ವೈವಿಧ್ಯದ ವಿನ್ಯಾಸಗಳು ಕಾಣಿಸಿಕೊಂಡಿವೆ. ಸೃಜನಶೀಲ ಮತ್ತು ಸೃಜನೇತರ ಎನ್ನುವ ಪ್ರಭೇದಗಳು ಸಾಹಿತ್ಯ ಚರ್ಚೆಗಳಲ್ಲಿ ಹಿಂದಕ್ಕೆ ಸರಿದಿವೆ. ಸಾಹಿತ್ಯದ ಪಠ್ಯ ಮತ್ತು ಪರಿಸರ ಎನ್ನುವ ವರ್ಗೀಕರಣ ಅಪ್ರಸ್ತುತವಾಗಿದೆ. ಸಾಹಿತ್ಯಕ, ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ, ರಾಜಕೀಯ ಎನ್ನುವ ಪರಿಭಾಷೆಗಳು ಈಗ ಪ್ರತ್ಯೇಕ ಅಸ್ತಿತ್ವಗಳನ್ನು ಕಳೆದುಕೊಂಡು ಒಂದು ಇನ್ನೊಂದರೊಡನೆ ಮಿಳಿತವಾಗಿ ‘ಸಾಹಿತ್ಯ’ ಎನ್ನುವುದು ಸರ್ವ ವ್ಯಾಪಿಯಾಗಿದೆ ಮತ್ತು ಸರ್ವರಿಗೂ ಸಲ್ಲುವಂತದ್ದಾಗಿದೆ.

ಕನ್ನಡ ವಿಶ್ವವಿದ್ಯಾಲಯವು ಕಳೆದ ಹದಿನೈದು ವರ್ಷಗಳಿಂದ ‘ಸಾಹಿತ್ಯ’ದ ಪ್ರಕ್ರಿಯೆಯನ್ನು ಕುರಿತ ಚರ್ಚೆ ಹಾಗೂ ‘ಸಾಹಿತ್ಯ’ ಪರಿಕಲ್ಪನೆಯ ನಿರಂತರ ಕಟ್ಟುವಿಕೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ಕನ್ನಡ ಭಾಷೆ, ಸಾಹಿತ್ಯ, ಭಾಷಾಂತರ, ಹಸ್ತಪ್ರತಿ, ದ್ರಾವಿಡ ಸಂಸ್ಕೃತಿ, ಮಹಿಳಾ ಅಧ್ಯಯನ, ಚರಿತ್ರೆ, ಪುರಾತತ್ವ, ಶಾಸನಶಾಸ್ತ್ರ, ಜಾನಪದ, ಬುಡಕಟ್ಟು, ಅಭಿವೃದ್ಧಿ, ಸಂಗೀತ, ಚಿತ್ರ, ಶಿಲ್ಪ; ಹೀಗೆ ಬಹುಬಗೆಗಳಲ್ಲಿ ಬಹುಅಧ್ಯಯನ ಶಿಸ್ತುಗಳಲ್ಲಿ ಕನ್ನಡ ವಿಶ್ವವಿದ್ಯಾಯವು ಕನ್ನಡ ಸಂಸ್ಕೃತಿ ಮತ್ತು ಕನ್ನಡನಾಡನ್ನು ಹೊಸತಾಗಿ ಶೋಧಿಸುತ್ತಾ ವಿವರಿಸುತ್ತಾ ರೂಪಿಸುತ್ತಾ ಬಂದಿದೆ. ೫೦ ವರ್ಷಗಳ ಏಕೀಕೃತ ಕನ್ನಡ ನಾಡಿನ ಶರೀರದಲ್ಲಿ ೧೫ ವರ್ಷಗಳ ಕನ್ನಡ ವಿಶ್ವವಿದ್ಯಾಲಯದ ಭಾವಬುದ್ಧಿಗಳು ಜೀವಧಾತುಗಳಾಗಿವೆ.

ಕರ್ನಾಟಕ ಸರಕಾರವು ಸುವರ್ಣಕರ್ನಾಟಕ ಆಚರಣೆಯ ಸಂದರ್ಭದಲ್ಲಿ ಕನ್ನಡ ವಿಶ್ವವಿದ್ಯಾಲಯದ ಹೊನ್ನಾರುಮಲೆಯ ಪ್ರಕಟಣೆಯ ಯೋಜನೆಯನ್ನು ಸಂತೋಷದಿಂದ ಒಪ್ಪಿಕೊಂಡು ಕನ್ನಡ ಸಂಸ್ಕೃತಿಯ ಮಹತ್ವದ ಸಾಧನೆಯೊಂದನ್ನು ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನಕಾರ್ಯದರ್ಶಿಗಳು ಸಾಹಿತ್ಯ ಸಂಸ್ಕೃತಿ ಪ್ರಿಯರೂ ಆಗಿರುವ ಶ್ರೀ ಐ.ಎಂ. ವಿಠ್ಠಲಮೂರ್ತಿ ಅವರು ಹೊನ್ನಾರುಮಾಲೆಯ ಯೋಜನೆಯನ್ನು ಮೆಚ್ಚಿಕೊಂಡು ಸರಕಾರದ ಅಂಗೀಕಾರವನ್ನು ದೊರಕಿಸಿಕೊಟ್ಟು ಚಿನ್ನದ ಕನಸನ್ನು ನನಸನ್ನಾಗಿಸಿದ್ದಾರೆ. ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಎಚ್.ಡಿ. ಕುಮಾರಸ್ವಾಮಿ ಅವರು ಈ ವಿಶಿಷ್ಟ ಯೋಜನೆಯನ್ನು ಅಂಗೀಕರಿಸಿ ತಮ್ಮ ಕನ್ನಡ ಸಾಹಿತ್ಯ ಸಂಸ್ಕೃತಿಯ ಕಾಳಜಿಯನ್ನು ಪ್ರಕಟಿಸಿದ್ದಾರೆ. ಕರ್ನಾಟಕ ಸರಕಾರದ, ಕನ್ನಡ ಸಂಸ್ಕೃತಿ ಇಲಾಖೆಯ ಈ ಸಾಂಸ್ಕೃತಿಕ ಪ್ರೀತಿಯನ್ನು ಕನ್ನಡ ವಿಶ್ವವಿದ್ಯಾಲಯ ಅಕ್ಕರೆಯಿಂದ ಸ್ಮರಿಸುತ್ತದೆ.

ಡಾ. ಸಿ.ಎನ್. ರಾಮಚಂದ್ರನ್ ಅವರು ಇಂಗ್ಲಿಶ್ ಪ್ರಾಧ್ಯಾಪಕರಾಗಿದ್ದು, ಕನ್ನಡ ವಿಮರ್ಶಾ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಒಳನೋಟ ಮತ್ತು ಸೂಕ್ಷ್ಮ ಅವಲೋಕನಗಳಿಂದ ಮುಖ್ಯರಾಗಿರುವವರು. ತೌಲನಿಕ ಅಧ್ಯಯನ, ಪ್ರಾಚೀನ ಮತ್ತು ಆಧುನಿಕ ವಿಮರ್ಶೆ, ಭಾರತೀಯ ಸಾಹಿತ್ಯದ ಅವಲೋಕನ, ಮೌಖಿಕ ಕಾವ್ಯಗಳ ವಿವೇಚನೆ- ಹೀಗೆ ವಿಶಿಷ್ಟ ಮಾದರಿಗಳನ್ನು ಕನ್ನಡ ವಿಮರ್ಶೆಗೆ ಕೊಟ್ಟಿರುವ ಅವರ ರಕ್ತಿರೂಪಣೆ ಮಹತ್ವದ ವಿಮರ್ಶಾ ಸಂಕಲನ. ಈ ಕೃತಿಯಲ್ಲಿ ಇಂಗ್ಲಿಶ್ ಲೇಖಕರು ಎನ್ನುವ ಭಾಗದಲ್ಲಿ ಭಾರತ ಮತ್ತು ಕರ್ನಾಟಕದ ಲೇಖಕರು ಹಾಗೂ ಕೃತಿಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ. ಕನ್ನಡ ಲೇಖಕರು ಎನ್ನುವ ಭಾಗದಲ್ಲಿ ತೀನಂಶ್ರೀ, ಪುತಿನ, ಕಾರ್ನಾಡ್ ಅವರ ಸಾಹಿತ್ಯದ ವಿಶಿಷ್ಟವಾದ ಒಳನೋಟಗಳ ವಿವೇಚನೆ ದೊರೆಯುತ್ತದೆ. ಮೌಖಿಕ ರಾಮಾಯಣ, ಮಹಾಭಾರತ ಕುರಿತ ಅಪೂರ್ವ ಮಾಹಿತಿ ಹಾಗೂ ಅಧ್ಯಯನದ ವಿಶಿಷ್ಟ ಒಳನೋಟಗಳು ಇಲ್ಲಿ ದೊರೆಯುತ್ತವೆ. ತೌಲನಿಕ ಅಧ್ಯಯನ ಎನ್ನುವ ಆರಂಭಿಕ ಲೇಖನದಲ್ಲಿ ಈ ವಿಶಿಷ್ಟ ವಿಧಾನ ಮತ್ತು ಶಿಸ್ತಿಗೆ ಸಂಬಂಧಿಸಿದ ಅನೇಕ ಚರ್ಚೆಗಳ ಜೊತೆಗೆ ಹೊಸ ನೋಟಗಳು ಕಾಣಸಿಗುತ್ತವೆ. ಇಲ್ಲಿನ ಎಲ್ಲ ಬರವಣಿಗೆಗಳು ಕನ್ನಡದಲ್ಲಿ ತುಂಬ ಹೊಸ ಚಿಂತನೆಗಳನ್ನು ಉಳ್ಳವು, ಕನ್ನಡ ವಿಮರ್ಶೆಯ ಶಿಸ್ತು ಮತ್ತು ರಚನೆಯನ್ನು ಬದಲಾಯಿಸಲು ಸಶಕ್ತವಾದವು. ವಿಸ್ತಾರವಾದ ಅಧ್ಯಯನ, ಸೂಕ್ಷ್ಮವಾದ ಅವಲೋಕನ, ಸಂವಾದದ ಉತ್ಸಾಹ, ತೀರ್ಮಾನದ ಅಚ್ಚುಕಟ್ಟು, ಚರ್ಚೆಗೆ ಮುಕ್ತ ಅವಕಾಶ-ಇವೆಲ್ಲ ಡಾ. ಸಿ.ಎನ್. ರಾಮಚಂದ್ರನ್ ಅವರ ವಿಮಶೆಯ ಕೀರ್ತಿಪತಾಕೆಗಳು. ಕನ್ನಡ ವಿಶ್ವವಿದ್ಯಾಲಯದೊಂದಿಗೆ ನಿರಂತರ ಪ್ರೀತಿಯ ಸಂಬಂಧವಿಟ್ಟುಕೊಂಡಿರುವ ಸ್ನೇಹಿತರಾದ ಡಾ. ಸಿ.ಎನ್. ರಾಮಚಂದ್ರನ್ ಅವರಿಗೆ ವಿಶ್ವವಿದ್ಯಾಲಯದ ಪರವಾಗಿ ಅಭಿನಂದನೆಯನ್ನು ಸಲ್ಲಿಸುತ್ತೇನೆ.

ಹೊನ್ನಾರುಮಾಲೆಯ ಪ್ರಕಟಣೆಗಳ ಕನಸಿನ ಬೀಜದಿಂದ ತೊಡಗಿ ನನಸಿನ ಫಲದ ವರೆಗೆ ನನ್ನೊಡನೆ ಸಹಕರಿಸಿದ ನಮ್ಮ ಪ್ರಸಾರಾಂಗದ ನಿರ್ದೇಶಕರಾದ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರನ್ನು ವಿಶೇಷವಾಗಿ ಸ್ಮರಿಸುತ್ತೇನೆ. ಸಹಾಯಕ ನಿರ್ದೇಶಕರಾದ ಶ್ರೀ ಸುಜ್ಞಾನಮೂರ್ತಿ ಅವರ ನೆರವಿಗಾಗಿ ವಂದನೆಗಳು.

ಬಿ.. ವಿವೇಕ ರೈ
ಕುಲಪತಿ