ಕನ್ನಡ ವಿಶ್ವವಿದ್ಯಾಲಯ ಕನ್ನಡ ಸಂಸ್ಕೃತಿಯ ಬಹುತ್ವದ ನೆಲೆಗಳನ್ನು ಹುಡುಕುವ, ಗಟ್ಟಿಗೊಳಿಸುವ, ಹರಡುವು ಕಾಯಕವನ್ನು ನೋಂಪಿಯಂತೆ ನಡೆಸಿಕೊಂಡು ಬಂದಿದೆ. ಕನ್ನಡ ಸಂಸ್ಕೃತಿಯನ್ನು ಮತ್ತೆ ಮತ್ತೆ ನಿರ್ವಚನ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ಕನ್ನಡ ವಿಶ್ವ ವಿದ್ಯಾಲಯವು ಒಂದು ಆಡುಂಬೊಲವಾಗಿ ಕಾರ್ಯ ನಿರ್ವಹಿಸುತ್ತಿದೆ. ನಮಗೆ ಗೊತ್ತಿರುವ ಸಂಸ್ಕೃತಿಯ ಅರ್ಥಗಳ ಆಚೆಗೆ ಅನೂಹ್ಯ ಲೋಕಗಳ ಕಡೆಗೆ ತನ್ನನ್ನು ಮತ್ತು ಕನ್ನಡಿಗರನ್ನು ಒಯ್ಯುವ ಪಯಣದ ದಾರಿಗಳನ್ನು ರೂಪಿಸುವ ಮಹತ್ವದ ಸಾಹಸರದ ಹೆಜ್ಜೆಗಳು ಮೂಡಿಬಂದಿವೆ. ಇದು ನಿರಂತರ ನಡೆಯಬೇಕಾದ ಬಹುದಾರಿಗಳ ಮಹಾಯಾನ.

ಇಪ್ಪತ್ತೊಂದನೆಯ ಶತಮಾನದ ಆರಂಭದಲ್ಲಿ ಜಾಗತೀಕರಣದ ಈ ಸಂಕ್ರಮಣ ಸ್ಥಿತಿಯಲ್ಲಿ ಕನ್ನಡ ವಿಶ್ವವಿದ್ಯಾಲಯದ ರಚನೆ ಮತ್ತು ಕಾರ್ಯಗಳು ಸವಾಲಿನವು ಮತ್ತು ಜವಾಬ್ದಾರಿಯವೂ ಆಗಿವೆ. ‘ಕನ್ನಡ’ ಎನ್ನುವ ಪರಿಕಲ್ಪನೆಯನ್ನು ಭಾಷೆ, ಸಾಹಿತ್ಯ, ಬದುಕು ಮತ್ತು ಅದರ ಆಧುನಿಕ ಸನ್ನಿವೇಶಗಳಲ್ಲಿ ಅರ್ಥೈಸುವ ಮತ್ತೆ ಕಟ್ಟುವ ಕೆಲಸವನ್ನು ಕನ್ನಡ ವಿಶ್ವವಿದ್ಯಾಲಯ ಒಂದು ಕಾಯಕದಂತೆ ಕೈಗೆತ್ತಿಕೊಂಡಿದೆ. ಕನ್ನಡ ಮತ್ತು ಅಭಿವೃದ್ಧಿ ಎನ್ನುವ ಎರಡು ಪರಿಕಲ್ಪನೆಗಳು ಎದುರುಬದುರಾಗುವ ಆತಂಕ ಒಂದು ಕಡೆಯಾದರೆ, ಅವು ಒಂದುನ್ನೊಂದು ಪ್ರಭಾವಿಸಿ ನೆರವಾಗುವ ಆವರಣವನ್ನು ನಿರ್ಮಾಣಮಾಡುವುದು ಇನ್ನೊಂದೆಡೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಕನ್ನಡ ವಿಶ್ವವಿದ್ಯಾಲಯವು ಈ ಸಂಬಂಧಿಯಾದ ಹೊಸ ಆಲೋಚನೆಗಳ ಸಂವಾದ ಮತ್ತು ಅದರ ಆನ್ವಯಿಕ ಸಾಧನೆಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳಲು ಬಯಸಿದೆ.

ಕನ್ನಡವು ಕಾಗದರಹಿತ ಮಾಧ್ಯಮದಲ್ಲಿ ಕಾಣಿಸಿಕೊಳ್ಳುತ್ತಿರುವಾಗಲೂ ಪುಸ್ತಕ ರೂಪದಲ್ಲಿ ಕನ್ನಡ ಕೃತಿಗಳ ಪ್ರಕಟಣೆ ಸಮಾನಾಂತರವಾಗಿ ಕ್ರಿಯಾಶೀಲವಾಗಿ ನಡೆಯುವುದು ಬಹಳ ಮುಖ್ಯವಾದದ್ದು. ತಾಂತ್ರಿಕ – ಮೌಖಿಕ ಮಾಧ್ಯಮದಲ್ಲಿ ಕನ್ನಡವು ಬಳಕೆಯಾಗುತ್ತಿರುವಾಗಲೇ ಕಾಗದದಲ್ಲಿ ಕನ್ನಡ ಅಕ್ಷರಗಳು ಮುದ್ರಣಗೊಂಡು ಕಣ್ಣಿಗೆ, ಕಿವಿಗೆ ಮತ್ತು ಮನಸ್ಸಿಗೆ ಕನ್ನಡವನ್ನು ಸಂವಹನಗೊಳಿಸುವ ಪ್ರಕ್ರಿಯೆ ನಿರಂತರವಾಗಿ ನಡೆಯಬೇಕಿದೆ. ಇಲ್ಲಿ ಪ್ರಕಟಗೊಳ್ಳುವ ಮಾಧ್ಯಮದೊಂದಿಗೆ ಅಭಿವ್ಯಕ್ತಗೊಳ್ಳುವ ಚಿಂತನಾ ಶರೀರವೂ ಮುಖ್ಯವಾದದ್ದು. ಭಾಷೆ, ಸಾಹಿತ್ಯ, ಕಲೆಗಳು, ವಿಜ್ಞಾನ, ತಂತ್ರಜ್ಞಾನ, ಸಮಾಜವಿಜ್ಞಾನ ಎನ್ನುವ ಬೌದ್ಧಿಕ ಗಡಿರೇಖೆಗಳನ್ನು ಕನ್ನಡ ಜ್ಞಾನವು ಕನ್ನಡ ವಿಶ್ವವಿದ್ಯಾಲಯದಲ್ಲಿ ರೂಪುಗೊಳ್ಳುವ ಮತ್ತು ಪ್ರಕಟಗೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ.

ಡಾ. ಹರಿಶ್ಚಂದ್ರ ದಿಗ್ಸಂಗಿಕರ್ ಅವರು ಲಾವಣಿ: ಸವಾಲ್ಜವಾಬ್ ಪದಗಳು ಎನ್ನುವ ಈ ಗ್ರಂಥದಲ್ಲಿ ಲಾವಣಿ ಸಂಪ್ರದಾಯದ ಸವಾಲ್ ಜವಾಬ್ ಹಾಡುಗಳನ್ನು ದಾಖಲೀಕರಣದ ಮೂಲಕ ವಿವರವಾಗಿ ಸಂಗ್ರಹಿಸಿಕೊಟ್ಟಿದ್ದಾರೆ. ಈ ಲಾವಣಿ ಸಂಪ್ರದಾಯ ಕುರಿತು ವಿಸ್ತಾರವಾಗಿ ಅಧ್ಯಯನದ ಮೂಲಕ ಪ್ರಸ್ತಾವನೆಯನ್ನು ಬರೆದಿದ್ದಾರೆ. ಉತ್ತರ ಕರ್ನಾಟಕದ ಹರದೇಶಿ – ನಾಗೇಶಿ ಸಂಪ್ರದಾಯಕ್ಕೆ ಸೇರಿದ ಲಾವಣಿಗಳ ಕುರಿತು ಸಾಕಷ್ಟು ಅಧ್ಯಯನಗಳು ನಡೆದಿದ್ದರೂ ಇಲ್ಲಿ ನಿರ್ದಿಷ್ಟ ಪಠ್ಯಗಳನ್ನು ಗಮನಿಸಿಕೊಂಡು ಈ ಇಡೀ ಪರಂಪರೆಯನ್ನು ಕುರಿತು ಅನೇಕ ಮಾತುಗಳನ್ನು ಹೇಳಲಾಗಿದೆ. ಕ್ಷೇತ್ರಕಾರ್ಯದ ದಾಖಲೀಕರಣದ ನಿಖರತೆ ಮತ್ತು ವಿಷಯವನ್ನು ಕ್ರಮಬದ್ಧವಾಗಿ ಮಂಡಿಸುವ ಕ್ರಮ, ಉತ್ತಮ ಸಂಶೋಧಕನ ಗುಣವಾಗಿ ಇಲ್ಲಿ ಕಾಣಿಸಿಕೊಂಡಿದೆ. ಈ ಪದಗಳನ್ನು ಹೇಳುವ ಬೇರೆ ಬೇರೆ ಸಂದರ್ಭಗಳು ಮತ್ತು ಸಮುದಾಯದೊಂದಿಗಿರುವ ಅವುಗಳ ಸಂಬಂಧ ಹಾಗೂ ಇದರ ವಸ್ತುವಿನ ನಡುವಿನ ಸಂಬಂಧ ಇತ್ಯಾದಿ ವಿವರವಾಗಿ ಇಲ್ಲಿ ಪ್ರಸ್ತಾಪಿತವಾಗಿವೆ. ತಮ್ಮ ಕ್ಷೇತ್ರಕಾರ್ಯದಲ್ಲಿ ದೊರೆತ ವಸ್ತುಗಳ ವಿವರವಾದ ಯಾದಿಯನ್ನು ಒದಗಿಸಲಾಗಿದೆ. ಇಂತಹ ಮಹತ್ವದ ಲಾವಣಿ ಸಂಪ್ರದಾಯದ ಕುರಿತು ಮುಖ್ಯವಾಗಿ ಮಾಹಿತಿಗಳ ಸಹಿತ ಹಾಡುಗಳನ್ನು ಸಂಗ್ರಹಿಸಿ ಕೊಟ್ಟಿರುವ ಡಾ. ಹರಿಶ್ಚಂದ್ರ ದಿಗ್ಸಂಗಿಕರ್ ಅವರಿಗೆ ಕನ್ನಡ ವಿಶ್ವವಿದ್ಯಾಲಯದ ಪರವಾಗಿ ಅಭಿನಂದನೆಗಳು. ಈ ಗ್ರಂಥವನ್ನು ಅಚ್ಚುಕಟ್ಟಾಗಿ ಹೊರತರಲು ಶ್ರಮಿಸಿದ ಪ್ರಸಾರಾಂಗದ ನಿರ್ದೇಶಕರಾದ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಮತ್ತು ಸಹಾಯಕ ನಿರ್ದೇಶಕರಾದ ಶ್ರೀ ಸುಜ್ಞಾನಮೂರ್ತಿ ಅವರುಗಳನ್ನು ವಿಶೇಷವಾಗಿ ನೆನೆಯುತ್ತೇನೆ.

ಬಿ.ಎ. ವಿವೇಕ ರೈ
ಕುಲಪತಿ