ಕನ್ನಡ ವಿಶ್ವವಿದ್ಯಾಲಯ ಕನ್ನಡ ಸಂಸ್ಕೃತಿಯ ಬಹುತ್ವದ ನೆಲೆಗಳನ್ನು ಹುಡುಕುವ, ಗಟ್ಟಿಗೊಳಿಸುವ, ಹರಡುವ ಕಾಯಕವನ್ನು ನೋಂಪಿಯಂತೆ ನಡೆಸಿಕೊಂಡು ಬಂದಿದೆ. ಕನ್ನಡ ಸಂಸ್ಕೃತಿಯನ್ನು ಮತ್ತೆ ಮತ್ತೆ ನಿರ್ವಚನ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ಕನ್ನಡ ವಿಶ್ವ ವಿದ್ಯಾಲಯವು ಒಂದು ಆಡುಂಬೊಲವಾಗಿ ಕಾರ್ಯ ನಿರ್ವಹಿಸುತ್ತಿದೆ. ನಮಗೆ ಗೊತ್ತಿರುವ ಸಂಸ್ಕೃತಿಯ ಅರ್ಥಗಳ ಆಚೆಗೆ ಅನೂಹ್ಯ ಲೋಕಗಳ ಕಡೆಗೆ ತನ್ನನ್ನು ಮತ್ತು ಕನ್ನಡಿಗರನ್ನು ಒಯ್ಯುವ ಪಯಣದ ದಾರಿಗಳನ್ನು ರೂಪಿಸುವ ಮಹತ್ವದ ಸಾಹಸದ ಹೆಜ್ಜೆಗಳು ಮೂಡಿ ಬಂದಿವೆ. ಇದು ನಿರಂತರ ನಡೆಯಬೇಕಾದ ಬಹುದಾರಿಗಳ ಮಹಾಯಾನ.

ಇಪ್ಪತ್ತೊಂದನೆಯ ಶತಮಾನದ ಆರಂಭದಲ್ಲಿ ಜಾಗತೀಕರಣದ ಈ ಸಂಕ್ರಮಣ ಸ್ಥಿತಿಯಲ್ಲಿ ಕನ್ನಡ ವಿಶ್ವವಿದ್ಯಾಲಯದ ರಚನೆ ಮತ್ತು ಕಾರ್ಯಗಳು ಸವಾಲಿನವು ಮತ್ತು ಜವಾಬ್ದಾರಿಯವೂ ಆಗಿವೆ. ‘ಕನ್ನಡ’ ಎನ್ನುವ ಪರಿಕಲ್ಪನೆಯನ್ನು ಭಾಷೆ, ಸಾಹಿತ್ಯ, ಬದುಕು ಮತ್ತು ಅದರ ಆಧುನಿಕ ಸನ್ನಿವೇಶಗಳಲ್ಲಿ ಅರ್ಥೈಸುವ ಮತ್ತೆ ಕಟ್ಟುವ ಕೆಲಸವನ್ನು ಕನ್ನಡ ವಿಶ್ವವಿದ್ಯಾಲಯ ಒಂದು ಕಾಯಕದಂತೆ ಕೈಗೆತ್ತಿಕೊಂಡಿದೆ. ಕನ್ನಡ ಮತ್ತು ಅಭಿವೃದ್ದಿ ಎನ್ನುವ ಎರಡು ಪರಿಕಲ್ಪನೆಗಳು ಎದುರುಬದುರಾಗುವ ಆತಂಕ ಒಂದು ಕಡೆಯಾದರೆ, ಅವು ಒಂದನ್ನೊಂದು ಪ್ರಭಾವಿಸಿ ನೆರವಾಗುವ ಆವರಣವನ್ನು ನಿರ್ಮಾಣ ಮಾಡುವುದು ಇನ್ನೊಂದೆಡೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಕನ್ನಡ ವಿಶ್ವವಿದ್ಯಾಲಯವು ಈ ಸಂಬಂಧಿಯಾದ ಹೊಸ ಆಲೋಚನೆಗಳ ಸಂವಾದ ಮತ್ತು ಅದರ ಆನ್ವಯಿಕ ಸಾಧನೆಗಳಲ್ಲಿ ತನ್ನನ್ನು ತೊಡಗಿಸಿ ಕೊಳ್ಳಲು ಬಯಸಿದೆ.

ಕನ್ನಡವು ಕಾಗದರಹಿತ ಮಾಧ್ಯಮದಲ್ಲಿ ಕಾಣಿಸಿಕೊಳ್ಳುತ್ತಿರುವಾಗಲೂ ಪುಸ್ತಕ ರೂಪದಲ್ಲಿ ಕನ್ನಡ ಕೃತಿಗಳ ಪ್ರಕಟಣೆ ಸಮಾನಾಂತರವಾಗಿ ಕ್ರಿಯಾಶೀಲವಾಗಿ ನಡೆಯುವುದು ಬಹಳ ಮುಖ್ಯವಾದದ್ದು. ತಾಂತ್ರಿಕ-ಮಖಿಕ ಮಾಧ್ಯಮದಲ್ಲಿ ಕನ್ನಡವು ಬಳಕೆಯಾಗುತ್ತಿರುವಾಗಲೇ ಕಾಗದದಲ್ಲಿ ಕನ್ನಡ ಅಕ್ಷರಗಳು ಮುದ್ರಣಗೊಂಡು ಕಣ್ಣಿಗೆ, ಕಿವಿಗೆ ಮತ್ತು ಮನಸ್ಸಿಗೆ ಕನ್ನಡವನ್ನು ಸಂವಹನಗೊಳಿಸುವ ಪ್ರಕ್ರಿಯೆ ನಿರಂತರವಾಗಿ ನಡೆಯಬೇಕಿದೆ. ಇಲ್ಲಿ ಪ್ರಕಟ ಗೊಳ್ಳುವ ಮಾಧ್ಯಮದೊಂದಿಗೆ ಅಭಿವ್ಯಕ್ತಗೊಳ್ಳುವ ಚಿಂತನಾ ಶರೀರವೂ ಮುಖ್ಯವಾದದ್ದು. ಭಾಷೆ, ಸಾಹಿತ್ಯ, ಕಲೆಗಳು, ವಿeನ, ತಂತ್ರಜ್ಞಾನ, ಸಮಾಜವಿಜ್ಞಾನ ಎನ್ನುವ ಬೌದ್ದಿಕ ಗಡಿರೇಖೆಗಳನ್ನು ಕಳಚಿಕೊಂಡು ಕನ್ನಡ eನವು ಕನ್ನಡ ವಿಶ್ವವಿದ್ಯಾಲಯದಲ್ಲಿ ರೂಪುಗೊಳ್ಳುವ ಮತ್ತು ಪ್ರಕಟಗೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ.

ಡಾ. ಉದಯಕುಮಾರ ಇರ್ವತ್ತೂರು ಅವರ ವಾಣಿಜ್ಯಶಾಸ್ತ್ರ ಎನ್ನುವ ಗ್ರಂಥವು ಈ ವಿಷಯಕ್ಕೆ ಸಂಬಂಧಿಸಿದ ಸಮಗ್ರ ವಿವರಗಳನ್ನು ಕನ್ನಡದಲ್ಲಿ ಅಚ್ಚುಕಟ್ಟಾಗಿ ಕೊಟ್ಟಿರುವ ಕೃತಿ. ವಾಣಿಜ್ಯಶಾಸ್ತ್ರಕ್ಕೆ ಸಂಬಂಧಿಸಿದಂತೆ ಹೆಚ್ಚು ಸಮರ್ಪಕವಾದ ಇಂತಹ ಗ್ರಂಥ ಪ್ರಕಟವಾಗುವುದು ತೀರ ಅಗತ್ಯ. ಡಾ. ಉದಯಕುಮಾರ ಇರ್ವತ್ತೂರು ಈಗಾಗಲೇ ವಾಣಿಜ್ಯಶಾಸ್ತ್ರ ಮತ್ತು ಅರ್ಥಶಾಸ್ತ್ರಗಳಿಗೆ ಸಂಬಂಧಿಸಿದಂತೆ ಲೇಖನಗಳನ್ನು ಕೃತಿಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ. ವಾಣಿಜ್ಯಶಾಸ್ತ್ರವು ಶಾಲಾ ಕಾಲೇಜುಗಳಲ್ಲಿ ಅಧ್ಯಯನ ವಿಷಯವಾಗಿರುವುದರಿಂದ ಇಂತಹ ಕೃತಿಗಳು ಕನ್ನಡ ಮಾಧ್ಯಮದ ಉತ್ತಮ ಪಠ್ಯಪುಸ್ತಕಗಳಾಗಿ ಕಾರ್ಯನಿರ್ವಹಿಸಲು ಶಕ್ತವಾಗಿವೆ. ವ್ಯಾಪಕವಾಗಿ ವಿಸ್ತರಣೆಗೊಂಡಂತೆ ವಾಣಿಜ್ಯಶಾಸ್ತ್ರವನ್ನು ಕುರಿತು ಖಚಿತವಾಗಿ ಸಮರ್ಪಕವಾಗಿ ಎಲ್ಲಾ ಮಾಹಿತಿಗಳನ್ನು ಒಂದೆಡೆ ಸೇರಿಸಿ ಡಾ. ಉದಯಕುಮಾರ ಇರ್ವತ್ತೂರು ಅವರು ಕೃತಿಯನ್ನು ರಚಿಸಿದ್ದಾರೆ. ವಾಣಿಜ್ಯ ಜಗತ್ತು ವಿಶೇಷವಾಗಿ ವಿಸ್ತರಣೆಗೊಳ್ಳುತ್ತಿರುವ ಇಂದಿನ ಸಂದರ್ಭದಲ್ಲಿ ಮತ್ತು ಕರ್ನಾಟಕವು ಜಾಗತೀಕರಣಕ್ಕೆ ಒಳಗಾಗುತ್ತಿರುವ ಈ ಸನ್ನಿವೇಶದಲ್ಲಿ ಕನ್ನಡದಲ್ಲಿ ವಾಣಿಜ್ಯಶಾಸ್ತ್ರ ಕುರಿತು ಇಂತಹ ಗ್ರಂಥಗಳು ಪ್ರಕಟವಾಗುವುದು ಮುಖ್ಯವಾಗುತ್ತದೆ. ವಾಣಿಜ್ಯಶಾಸ್ತ್ರದ ಬಗ್ಗೆ ವಿಶೇಷವಾದ ಅಧ್ಯಯನ ಮತ್ತು ಅಧ್ಯಾಪನದ ಹಿನ್ನೆಲೆಯುಳ್ಳ ಡಾ. ಉದಯಕುಮಾರ ಇರ್ವತ್ತೂರು ಅವರು ಈ ಪುಸ್ತಕವನ್ನು ರಚಿಸಿ ಪ್ರಕಟಿಸಲು ಅನುವು ಮಾಡಿಕೊಟ್ಟಿರು ವುದಕ್ಕಾಗಿ ಕನ್ನಡ ವಿಶ್ವವಿದ್ಯಾಲಯದ ಪರವಾಗಿ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

ಈ ಗ್ರಂಥವನ್ನು ಅಚ್ಚುಕಟ್ಟಾಗಿ ಹೊರತರುತ್ತಿರುವ ಪ್ರಸಾರಾಂಗದ ನಿರ್ದೇಶಕರಾದ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಮತ್ತು ಸಹಾಯಕ ನಿರ್ದೇಶಕರಾದ ಶ್ರೀ ಸುeನಮೂರ್ತಿ ಅವರಿಗೆ ಆಭಾರಿಯಾಗಿದ್ದೇನೆ.

ಬಿ.ಎ. ವಿವೇಕ ರೈ
ಕುಲಪತಿ