ಕನ್ನಡನಾಡು ಏಕೀಕರಣಗೊಂಡು ಐವತ್ತು ವರ್ಷ ತುಂಬಿದ ಚಿನ್ನದ ಹಬ್ಬದ ಹರ್ಷದ ಈ ಸಂದರ್ಭದಲ್ಲಿ ಕನ್ನೆ ವಿಶ್ವವಿದ್ಯಾಲಯವು ಕನ್ನಡವನ್ನು ಕಟ್ಟಿದ ಹಿರಿಯರ ಸಾಹಿತ್ಯ ಕೃತಿಗಳನ್ನು ಪ್ರಕಟಿಸುವ ಕನಸಿನ ಹೊನ್ನಾರು ಮಾಲೆ ಇಲ್ಲಿ ರೂಪು ತಾಳಿದೆ. ಕೃಷಿ ಸಂಸ್ಕೃತಿಯನ್ನು ನೆಲದ ಸಂಸ್ಕೃತಿಯನ್ನಾಗಿ ಭಾವಿಸಿ ಪರಿಭಾವಿಸಿ ಕಟ್ಟಿ ಬೆಳೆಸಿದ ಕನ್ನಡನಾಡಿನಲ್ಲಿ ಕನ್ನಡಸಾಹಿತ್ಯ ಸಂಸ್ಕೃತಿಯ ಬೀಜವನ್ನು ಬಿತ್ತಿ ಚಿನ್ನದ ಬೆಳೆಗಳನ್ನು ಬೆಳೆದ ಹಿರಿಯ ಬೇಸಾಯಗಾರರ ಒಂದೊಂದು ಹೊಸ ಬೆಳೆಯನ್ನು ನಾಡಿಗೆ ಒಪ್ಪಿಸುವ ಧನ್ಯತಾ ಭಾವ ನಮ್ಮದು. ಹೀಗೆ ಹೊನ್ನಾರು ಚಿನ್ನದ ಬೆಳೆಯೂ ಹೌದು, ಕನ್ನಡದ ಚಿಣ್ಣರಿಗೆ ಹೊಸಬೆಳೆ ಬೆಳೆಯಲು ಪ್ರೇರಣೆಯೂ ಹೌದು.

ಕಳೆದ ಐವತ್ತು ವರ್ಷಗಳಿಂದ ಕನ್ನಡಸಾಹಿತ್ಯ ಸಂಸ್ಕೃತಿಯ ಮಣ್ಣಿನಲ್ಲಿ ತಮ್ಮ ಅನುಭವ ಮತ್ತು ಅಧ್ಯಯನದ ಮೂಲಕ ಉತ್ಸಾಹ ಪ್ರೀತಿ ಮತ್ತು ಪರಿಶ್ರಮಗಳಿಂದ ನಿರಂತರವಾಗಿ ಕನ್ನಡದ ಬೆಳೆಗಳನ್ನು ಬೆಳೆಸಿಕೊಂಡುಬಂದ ಹಿರಿಯರ ಹೊಸಬೆಳೆಯ ಹೊನ್ನಾರುಮಾಲೆಯಲ್ಲಿ ಅನನ್ಯ ಫಲಗಳನ್ನು ಪಡೆಯಲಾಗಿದೆ. ಸಾಹಿತ್ಯ, ಬದುಕು, ಸಂಸ್ಕೃತಿ ಇವುಗಳ ಬಗ್ಗೆ ಐವತ್ತು ವರ್ಷಗಳ ಹಿಂದೆ ಇದ್ದ ಪರಿಕಲ್ಪನೆಗಳು ಇಂದು ಬದಲಾವಣೆಗೊಂಡಿವೆ. ಯಾವುದು ಸಾಹಿತ್ಯ, ಯಾವುದು ಸಾಹಿತ್ಯ ಅಲ್ಲ ಎನ್ನುವ ಚರ್ಚೆ ಕಾಲಕಾಲಕ್ಕೆ ನಡೆದು ಬೇರೆ ಬೇರೆ ಅರ್ಥಗಳನ್ನು ಶೋಧಿಸುತ್ತ ಈ ಹಂತವನ್ನು ತಲುಪಿದೆ. ಸಾಹಿತ್ಯ ಮತ್ತು ಸಂಸ್ಕೃತಿ, ಸಾಹಿತ್ಯ ಮತ್ತು ಬದುಕು ಎನ್ನುವ ಭಿನ್ನತೆಗಳು ಕಣ್ಮರೆಯಾಗಿ ಸಂಕೀರ್ಣ ಹಾಗೂ ವೈವಿಧ್ಯದ ವಿನ್ಯಾಸಗಳು ಕಾಣಿಸಿಕೊಂಡಿವೆ. ಸೃಜನಶೀಲ ಮತ್ತು ಸೃಜನೇತರ ಎನ್ನುವ ಪ್ರಭೇಧಗಳು ಸಾಹಿತ್ಯಚರ್ಚೆಗಳಲ್ಲಿ ಹಿಂದಕ್ಕೆ ಸರಿದಿವೆ. ಸಾಹಿತ್ಯದ ಪಠ್ಯ ಮತ್ತು ಪರಿಸರ ಎನ್ನುವ ವರ್ಗೀಕರಣ ಅಪ್ರಸ್ತುತವಾಗಿದೆ. ಸಾಹಿತ್ಯಕ, ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ, ರಾಜಕೀಯ ಎನ್ನುವ ಪರಿಭಾಷೆಗಳು ಈಗ ಪ್ರತ್ಯೇಕ ಅಸ್ತಿತ್ವಗಳನ್ನು ಕಳೆದುಕೊಂಡು ಒಂದು ಇನ್ನೊಂದರರೊಡನೆ ಮಿಳಿತವಾಗಿ ‘ಸಾಹಿತ್ಯ’ ಎನ್ನುವುದು ಸರ್ವವ್ಯಾಪ್ತಿಯಾಗಿದೆ ಮತ್ತು ಸರ್ವರಿಗೂ ಸಲ್ಲುವಂಥದ್ದಾಗಿದೆ.

ಕನ್ನಡ ವಿಶ್ವವಿದ್ಯಾಲಯವು ಕಳೆದ ಹದಿನೈದು ವರ್ಷಗಳಿಂದ ‘ಸಾಹಿತ್ಯ’ದ ಪ್ರಕ್ರಿಯೆಯನ್ನು ಕುರಿತು ಚರ್ಚೆ ಹಾಗೂ ‘ಸಾಹಿತ್ಯ’ ಪರಿಕಲ್ಪಣೆಯ ನಿರಂತರ ಕಟ್ಟುವಿಕೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ಕನ್ನಡ ಭಾಷೆ, ಸಾಹಿತ್ಯ, ಭಾಷಾಂತರ, ಹಸ್ತಪ್ರತಿ, ದ್ರಾವಿಡ ಸಂಸ್ಕೃತಿ, ಮಹಿಳಾ ಅಧ್ಯಯನ, ಚರಿತ್ರೆ, ಪುರಾತತ್ವ, ಶಾಸನಶಾಸ್ತ್ರ, ಜಾನಪದ, ಬುಡಕಟ್ಟು, ಅಭಿವೃದ್ಧಿ, ಸಂಗೀತ, ಚಿತ್ರ, ಶಿಲ್ಪ: ಹೀಗೆ ಬಹುಬಗೆಗಳಲ್ಲಿ ಬಹುಅಧ್ಯಯನ ಶಿಸ್ತುಗಳಲ್ಲಿ ಕನ್ನಡ ವಿಶ್ವವಿದ್ಯಾಲಯವು ಕನ್ನಡಸಂಸ್ಕೃತಿ ಮತ್ತು ಕನ್ನಡನಾಡನ್ನು ಹೊಸತಾಗಿ ಶೋಧಿಸುತ್ತಾ ವಿವರಿಸುತ್ತಾ ರೂಪಿಸುತ್ತಾ ಬಂದಿದೆ. ಐವತ್ತು ವರ್ಷಗಳ ಏಕೀಕೃತ ಕನ್ನಡನಾಡಿನ ಶರೀರದಲ್ಲಿ ಹದಿನೈದು ವರ್ಷಗಳ ಕನ್ನಡ ವಿಶ್ವವಿದ್ಯಾಲಯದ ಭಾವಬುದ್ಧಿಗಳು ಜೀವಧಾತುಗಳಾಗಿವೆ.

ಕರ್ನಾಟಕ ಸರ್ಕಾರವು ಸುವರ್ಣಕರ್ನಾಟಕ ಆಚರಣೆಯ ಸಂದರ್ಭದಲ್ಲಿ ಕನ್ನಡ ವಿಶ್ವವಿದ್ಯಾಲಯದ ಹೊನ್ನಾರುಮಾಲೆಯ ಪ್ರಕಟಣೆಯ ಯೋಜನೆಯನ್ನು ಸಂತೋಷದಿಂದ ಒಪ್ಪಿಕೊಂಡು ಕನ್ನಡಸಂಸ್ಕೃತಿಯ ಮಹತ್ವದ ಸಾಧನೆಯೊಂದನ್ನು ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನಕಾರ್ಯದರ್ಶಿಗಳೂ ಸಾಹಿತ್ಯ ಸಂಸ್ಕೃತಿ ಪ್ರಿಯರೂ ಆಗಿರುವ ಶ್ರೀ ಐ.ಎಂ. ವಿಠ್ಠಲಮೂರ್ತಿ ಅವರು ಹೊನ್ನಾರುಮಾಲೆಯ ಯೋಜನೆಯನ್ನು ಮೆಚ್ಚಿಕೊಂಡು ಸರಕಾರದ ಅಂಗೀಕಾರವನ್ನು ದೊರಕಿಸಿಕೊಟ್ಟು ಚಿನ್ನದ ಕನಸನ್ನು ನನಸನ್ನಾಗಿಸಿದ್ದಾರೆ. ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಎಚ್. ಡಿ. ಕುಮಾರಸ್ವಾಮಿ ಅವರು ಈ ವಿಶಿಷ್ಟ ಯೋಜನೆಯನ್ನು ಅಂಗೀಕರಿಸಿ ತಮ್ಮ ಕನ್ನಡ ಸಾಹಿತ್ಯ ಸಂಸ್ಕೃತಿಯ ಕಾಳಜಿಯನ್ನು ಪ್ರಕಟಿಸಿದ್ದಾರೆ. ಕರ್ನಾಟಕ ಸರಕಾರದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಈ ಸಾಂಸ್ಕೃತಿಕ ಪ್ರೀತಿಯನ್ನು ಕನ್ನಡ ವಿಶ್ವವಿದ್ಯಾಲಯ ಅಕ್ಕರೆಯಿಂದ ಸ್ಮರಿಸುತ್ತದೆ.

ಪ್ರೊ. ಎಮ್. ರಾಮಚಂದ್ರ ಅವರು ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಸುದೀರ್ಘ ಕಾಲ ಕನ್ನಡ ಪ್ರಾಧ್ಯಾಪಕರಾಗಿದ್ದು, ಅಧ್ಯಯನ, ಅಧ್ಯಾಪನ ಮತ್ತು ಕನ್ನಡದ ಪರಿಚಾರಿಕೆಯನ್ನು ನಿರಂತರವಾಗಿ ನಡೆಸಿಕೊಂಡು ಬಂದ ಸಹೃದಯ ವಿಮರ್ಶಕರು. ಪ್ರಾಚೀನ ಮತ್ತು ಆಧುನಿಕ ಕನ್ನಡ ಸಾಹಿತ್ಯವನ್ನು ಸಂವೇದನಶೀಲ ದೃಷ್ಟಿಕೋನದಿಂದ ಪರಿಭಾವಿಸುತ್ತಾ ಪರಿಚಯಿಸುತ್ತಾ ಪರಿಶೋಧಿಸುತ್ತಾ ಬಂದಿರುವ ಪ್ರೊ. ಎಮ್.ರಾಮಚಂದ್ರ ಅವರ ಸಂಪ್ರಬಂಧಗಳ ಸಮುಚ್ಚಯವನ್ನು ಹೊನ್ನಾರು ಮಾಲೆಯಲ್ಲಿ ಪ್ರಕಟಿಸಲು ಕನ್ನಡ ವಿಶ್ವವಿದ್ಯಾಲಯ ಹೆಮ್ಮೆ ಪಡುತ್ತದೆ. ನವೋದಯ ಸಾಹಿತ್ಯದ ಹಿರಿಮೆಯನ್ನು ಆದರ ಅಭಿಮಾನಗಳಿಂದ ಕಾಣುತ್ತಾ ಓದುತ್ತಾ ತಮ್ಮ ಅಂತರಾಳದ ಪರಿಭಾವನೆಗಳ ಮೂಲಕ ಅನಾವರಣ ಮಾಡುತ್ತಾ ಬಂದ ಪ್ರೊ. ಎಮ್. ರಾಮಚಂದ್ರ ಅವರ ಸಮುಚ್ಚಯದ ಲೇಖನಗಳು ಇಲ್ಲಿ ಒಟ್ಟು ಸೇರಿವೆ. ಪಡುಕೋಣೆ, ಡಿ.ವಿ.ಜಿ., ಬೇಂದ್ರೆ, ವಿಸೀ, ಕಾರಂತ, ಕೊಳಂಬೆ, ಇನಾಂದಾರ್, ನಿಸಾರ್ ಇವರ ಕೃತಿಗಳನ್ನು ಕುರಿತು ಹೊಸ ಸನ್ನಿವೇಶವೊಂದನ್ನು ಇಲ್ಲಿನ ಬರಹಗಳು ನಿರ್ಮಾಣ ಮಾಡಿವೆ. ಕವಿ ಮತ್ತು ಕಾವ್ಯದ ಕುರಿತು ಸೂಕ್ಷ್ಮ ಅವಲೋಕನದ ಬರಹಗಳು ಸಮುಚ್ಚಯದ ಸೊಗಸನ್ನು ಹೆಚ್ಚಿಸಿವೆ. ಪದ್ಯ ಗದ್ಯಗಳ ಸರಸ ದಾಂಪತ್ಯದ ಸೊಗಸಿನ ಪ್ರಬಂಧದ ವಿಶಿಷ್ಟ ಶೈಲಿಯು ಪ್ರೊ. ಎಮ್. ರಾಮಚಂದ್ರ ಅವರ ಬರಹದ ಒಂದು ವಿಶಿಷ್ಟ ಶಕ್ತಿ. ಸಾಹಿತ್ಯವನ್ನು ಸೂಕ್ಷ್ಮ ಸಂವೇದನೆಗೆ ಒಳಗು ಮಾಡುವ ಅದ್ಭುತ ಗದ್ಯಶೈಲಿಯ ಸಾಮರ್ಥ್ಯವುಳ್ಳ ಪ್ರೊ. ಎಮ್. ರಾಮಚಂದ್ರ ಅವರು ತಮ್ಮ ಪರಿಪಕ್ವ ಸಂಪ್ರಬಂಧಗಳನ್ನು ಸಮುಚ್ಚಯವಾಗಿ ಪ್ರಕಟಿಸಲು ಹೊನ್ನಾರು ಮಾಲೆಯಲ್ಲಿ ಅವಕಾಶ ಕಲ್ಪಸುವುದಕ್ಕಾಗಿ ಕನ್ನಡ ವಿಶ್ವವಿದ್ಯಾಲಯದ ಪರವಾಗಿ ಪ್ರೀತಿ ಅಭಿಮಾನದ ವಂದನೆಗಳನ್ನು ಸಲ್ಲಿಸುತ್ತೇನೆ.

ಹೊನ್ನಾರು ಮಾಲೆಯ ಪ್ರಕಟಣೆಗಳ ಕನಸಿನ ಬೀಜದಿಂದ ತೊಡಗಿ ನನಸಿನ ಫಲದವರೆಗೆ ನನ್ನೊಡನೆ ಸಹಕರಿಸಿದ ನಮ್ಮ ಪ್ರಸಾರಂಗದ ನಿರ್ದೇಶಕರಾದ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರನ್ನು ವಿಶೇಷವಾಗಿ ಸ್ಮರಿಸುತ್ತೇನೆ. ಸಹಾಯಕ ನಿರ್ದೇಶಕರಾದ ಶ್ರೀ ಸುಜ್ಞಾನಮೂರ್ತಿ ಅವರ ನೆರವಿಗಾಗಿ ವಂದನೆಗಳು.

ಬಿ. . ವಿವೇಕ ರೈ
ಕುಲಪತಿ