ಕರ್ನಾಟಕದ ಆಧುನಿಕ ಚರಿತ್ರೆಯಲ್ಲಿ ಕರ್ನಾಟಕ ಏಕೀಕರಣ ಒಂದು ಮಹತ್ವ ಪೂರ್ಣ ಐತಿಹಾಸಿಕ ಘಟನೆ. ಹಾಗೆಯೇ ಕನ್ನಡ ವಿಶ್ವವಿದ್ಯಾಲಯದ ಸ್ಥಾಪನೆಯೂ ಮತ್ತೊಂದು ಮಹತ್ವದ ಘಟನೆ. ಕನ್ನಡ-ಕನ್ನಡಿಗ-ಕರ್ನಾಟಕ ಸಂಸ್ಕೃತಿಯ ಕಲ್ಪನೆಯಡಿಯಲ್ಲಿ ಅಸ್ತಿತ್ವಕ್ಕೆ ಬಂದ ಕನ್ನಡ ವಿಶ್ವವಿದ್ಯಾಲಯದ ಹರವು ವಿಸ್ತಾರವಾದದ್ದು. ಈ ಕಾರಣದಿಂದ ಕನ್ನಡ ವಿಶ್ವವಿದ್ಯಾಲಯದ ಆಶಯ ಮತ್ತು ಗುರಿ ಇತರ ವಿಶ್ವವಿದ್ಯಾಲಯಗಳಿಗಿಂತ ಭಿನ್ನ ಹಾಗೂ ಪ್ರಗತಿಪರ. ಕನ್ನಡದ ಸಾಮರ್ಥ್ಯವನ್ನು ಎಚ್ಚರಿಸುವ ಕಾಯಕವನ್ನು ಉದ್ದಕ್ಕೂ ಅದು ನೋಂಪಿಯಿಂದ ಮಾಡಿಕೊಂಡು ಬಂದಿದೆ. ಕರ್ನಾಟಕತ್ವದ ‘ವಿಕಾಸ’ ಈ ವಿಶ್ವ ವಿದ್ಯಾಲಯದ ಮಹತ್ತರ ಆಶಯವಾಗಿದೆ.

ಕನ್ನಡ ಅಧ್ಯಯನ ಮೂಲತಃ ಶುದ್ಧ ಜ್ಞಾನದ, ಕಾಲ, ದೇಶ, ಜೀವನ ತತ್ವದ ಪರವಾಗಿ ರುವುದರ ಜೊತೆಗೆ ಅಧ್ಯಯನವನ್ನು ಒಂದು ವಾಗ್ವಾದದ ಭೂಮಿಕೆ ಎಂದು ನಾವು ಭಾವಿಸ ಬೇಕಾಗಿದೆ. ಕನ್ನಡ ಬದುಕಿನ ಚಿಂತನೆಯ ಭಾಗವೆಂದೇ ಅದನ್ನು ರೂಪಿಸಿ ವಿವರಿಸಬೇಕಾಗಿದೆ. ಅಂದರೆ : ದೇಸಿ ಬೇರುಗಳ ಗುರುತಿಸುವಿಕೆ ಕನ್ನಡ ಅಧ್ಯಯನದ ಮುಖ್ಯ ಭಿತ್ತಿಯಾಗ ಬೇಕಾಗಿದೆ. ಕನ್ನಡ ಸಂಸ್ಕೃತಿಯು ಬಹುತ್ವದ ನೆಲೆಗಳನ್ನು ಆಧರಿಸಿ ರೂಪುಗೊಂಡಿದೆ. ಸಮಾಜಮುಖಿ ಚಿಂತನೆಗಳ ವ್ಯಾಪಕ ಅಧ್ಯಯನ ಬದುಕಿನ ಸಂಕೀರ್ಣ ಲಕ್ಷಣಗಳ ಸ್ವರೂಪ ವನ್ನು ಇದು ಪರಿಚಯಿಸುತ್ತದೆ. ನಾವು ಇದನ್ನು ಎಲ್ಲ ವಲಯಗಳಲ್ಲಿ ಕನ್ನಡದ ಅನುಷ್ಠಾನದ ಮೂಲಕ ಉಳಿಸಿ, ಬೆಳೆಸಬೇಕಾಗಿದೆ. ಆಗ ಕನ್ನಡ ಸಂಸ್ಕೃತಿಯು ವಿಶ್ವಪ್ರಜ್ಞೆಯಾಗಿ ರೂಪು ಗೊಳ್ಳಲು ಸಾಧ್ಯವಾಗುತ್ತದೆ. ‘ಕನ್ನಡದ್ದೇ ಮಾದರಿ’ಯ ಶೋಧ ಇಂದಿನ ಮತ್ತು ಬರುವ ದಿನಗಳ ತೀವ್ರ ಅಗತ್ಯವಾಗಿದೆ.

ಕನ್ನಡ ಸಂಸ್ಕೃತಿಯ ಭಾಗವಾಗಿರುವ ಕನ್ನಡ ಅಧ್ಯಯನವು ಕಾಲದಿಂದ ಕಾಲಕ್ಕೆ ಹೊಸ ತಿಳಿವಳಿಕೆಯನ್ನು ತನ್ನ ತೆಕ್ಕೆಗೆ ಜೋಡಿಸಿಕೊಳ್ಳುತ್ತ ಬಂದಿದೆ. ಹೀಗಾಗಿ ವಿದೇಶಿ ಮತ್ತು ದೇಶಿ ವಿದ್ವಾಂಸರು ತೊಡಗಿಸಿಕೊಂಡ ಈ ವಿದ್ವತ್‌ಕ್ಷೇತ್ರದಲ್ಲಿ ಮುಂದಿನ ವಿದ್ವಾಂಸರು ಕಾಲದಿಂದ ಕಾಲಕ್ಕೆ ಹೊಸಬೆಳೆಯನ್ನು ತೆಗೆಯುತ್ತ ಬಂದಿದ್ದಾರೆ. ಕನ್ನಡ ಅಧ್ಯಯನ ಪಳೆಯುಳಿಕೆಯ ಶಾಸ್ತ್ರವಾಗದೆ, ಬದಲಾಗುತ್ತಿರುವ ಕಾಲಮಾನದಲ್ಲಿ ಎದುರಾಗುತ್ತಿರುವ ಆಹ್ವಾನಕ್ಕೆ ತಕ್ಕಂತೆ ತನ್ನ ಗತಿಯನ್ನು ಬದಲಾಯಿಸಿಕೊಳ್ಳುತ್ತ ಬಂದಿರುವುದು ಗಮನಿಸತಕ್ಕ ಅಂಶ. ಸಾಂಪ್ರದಾಯಿಕ ಚಿಂತನೆಗಳು ಆಧುನೀಕರಣದ ಈ ಕಾಲಘಟ್ಟದಲ್ಲಿ ಸಕಾಲಿಕಗೊಳ್ಳುವುದು ಅನಿವಾರ್ಯವಾಗಿದೆ. ಮಾಹಿತಿ ತಂತ್ರಜ್ಞಾನದ ಮೂಲಕ ಜಗತ್ತಿನ ಜ್ಞಾನಪ್ರವಾಹವೇ ನಮ್ಮ ಅಂಗೈಯೊಳಗೆ ಚುಳುಕಾಗುವ ಈ ಸಂದರ್ಭದಲ್ಲಿ ಕನ್ನಡದ ಚಹರೆ ಮತ್ತು ಕನ್ನಡ ಭಾಷೆಯ ಚಲನಶೀಲತೆಯನ್ನು ಶೋಧಿಸಲಿಕ್ಕೆ ಭಾಷಾ ಆಧುನೀಕರಣ ಮತ್ತು ಪ್ರಮಾಣೀ ಕರಣದ ಪ್ರಕ್ರಿಯೆಗಳ ನೆಲೆಯಲ್ಲಿ ಅಧ್ಯಯನದ ಹೊಸ ಸಾಧ್ಯತೆಗಳನ್ನು ಅನುಲಕ್ಷಿಸಿ, ಭಾಷಾನೀತಿ, ಭಾಷಾಯೋಜನೆ ರೂಪಿಸುವುದು ಅನಿವಾರ್ಯ ಹಾಗೂ ಅವಶ್ಯವಾಗಿದೆ. ಆಗ ಅಧ್ಯಯನದ ಸ್ವರೂಪ ಹಾಗೂ ಬಳಕೆಯ ವಿಧಾನದಲ್ಲಿ ಪರಿವರ್ತನೆ ಸಾಧ್ಯವಾಗುತ್ತದೆ.

ನಮ್ಮೆದುರು ನುಗ್ಗಿ ಬರುತ್ತಿರುವ ಜಾಗತೀಕರಣಕ್ಕೆ ಪ್ರತಿರೋಧವಾಗಿ ನಮ್ಮ ದೇಶೀಯ ಜ್ಞಾನಪರಂಪರೆಯನ್ನು ಮರುಶೋಧಿಸಿ ಆ ಮೂಲಕ ಕುಸಿಯುತ್ತಿರುವ ನಮ್ಮ ಬೇರುಗಳನ್ನು ಬಲಗೊಳಿಸಿಕೊಳ್ಳಬೇಕಾಗಿದೆ. ಭಾಷೆ, ಸಾಹಿತ್ಯ, ವ್ಯಾಕರಣ, ಛಂದಸ್ಸು, ಚರಿತ್ರೆ, ಕೃಷಿ, ವೈದ್ಯ, ಪರಿಸರ ಮುಂತಾದ ಅಧ್ಯಯನ ವಿಷಯಗಳನ್ನು ಹೊಸ ಆಲೋಚನೆಯ ನೆಲೆಯಲ್ಲಿ ವಿಶ್ಲೇಷಿಸಬೇಕಾಗಿದೆ. ಆಧುನಿಕ ವಿಜ್ಞಾನ, ತಂತ್ರಜ್ಞಾನವೇ ‘ಜ್ಞಾನ’ ಎಂದು ರೂಪಿಸಿರುವ ಇಂದಿನ ಆಲೋಚನೆಗೆ ಪ್ರತಿಯಾಗಿ ಈ ಜ್ಞಾನಶಾಖೆಗಳಲ್ಲಿ ಹುದುಗಿರುವ ದೇಶಿ ಪರಂಪರೆಯ ಜ್ಞಾನದ ಹುಡುಕಾಟ ನಡೆಯಬೇಕಾಗಿದೆ. ಅಂತಹ ಪ್ರಯತ್ನಗಳಿಗೆ ಬೇಕಾದ ಮಾರ್ಗದರ್ಶಕ ಸೂತ್ರಗಳ ಹಾಗೂ ಆಕರ ಪರಿಕರಗಳ ನಿರ್ಮಾಣದ ನೆಲೆ ತುಂಬ ಮುಖ್ಯವಾಗಿದೆ. ಕನ್ನಡ ವಿಶ್ವವಿದ್ಯಾಲಯವು ಕಳೆದ ಹದಿನಾರು ವರ್ಷಗಳಿಂದ ಈ ಕೆಲಸಗಳನ್ನು ಹಲವು ಯೋಜನೆಗಳ ಮೂಲಕ ರೂಪಿಸಿಕೊಂಡಿದೆ, ರೂಪಿಸಿಕೊಳ್ಳುತ್ತಿದೆ. ಇದೊಂದು ಚಲನಶೀಲ ಪ್ರಕ್ರಿಯೆ ಯಾಗಿದೆ. ಸಮಕಾಲೀನ ಭಾಷಿಕ, ಸಾಂಸ್ಕೃತಿಕ ಸಮಸ್ಯೆಗಳಿಗೆ ಮುಖಾಮುಖಿಯಾಗುತ್ತ ಕನ್ನಡ ನಾಡುನುಡಿಯನ್ನು ಹೊಸದಾಗಿ ಶೋಧಿಸುತ್ತಾ, ವಿವರಿಸುತ್ತಾ ಬಂದಿದೆ. ಅಂದರೆ : ಕನ್ನಡದ ಅರಿವಿನ ವಿಕೇಂದ್ರೀಕರಣವೇ ವರ್ತಮಾನದ ಹೊಸ ಬೆಳವಣಿಗೆ. ಇದು ಕನ್ನಡ ವಿಶ್ವವಿದ್ಯಾಲಯದ ಜೀವಧಾತುವಾಗಿದೆ.

ಕನ್ನಡ ವಿಶ್ವವಿದ್ಯಾಲಯದ ವಾಲ್ಮೀಕಿ ಅಧ್ಯಯನ ಪೀಠವು ತನ್ನ ಸ್ಥಾಪನೆಯ ಆರಂಭದಿಂದಲೂ ವಾಲ್ಮೀಕಿ ಸಮುದಾಯದ ಸ್ಥಿತಿಗತಿಗಳನ್ನು, ಸಾಹಿತ್ಯ, ಆಚಾರ-ವಿಚಾರಗಳನ್ನು ಕುರಿತು ವಿಸ್ತೃತವಾಗಿ ಅಧ್ಯಯನಕ್ಕೆ ಒಳಪಡಿಸಿರುವುದು ಕಂಡುಬರುತ್ತದೆ. ವಾಲ್ಮೀಕಿ ಅಧ್ಯಯನ ಪೀಠದ ಮುಖಾಂತರ ಕರ್ನಾಟಕದ ಬೇರೆ ಬೇರೆ ಸ್ಥಳಗಳಲ್ಲಿ ವಿಚಾರ ಸಂಕಿರಣಗಳನ್ನು ಹಮ್ಮಿಕೊಳ್ಳುವುದರ ಮೂಲಕ ವಾಲ್ಮೀಕಿ ಹಾಗೂ ಇನ್ನಿತರ ತಳ ಸಮುದಾಯಗಳ ಅಧ್ಯಯನವನ್ನು ಮಾಡಲಾಗಿದೆ. ಪ್ರಸ್ತುತ ಕೃತಿಯ ಮುಖಾಂತರ ಡಾ. ಮಂಜುನಾಥ ಬೇವಿನಕಟ್ಟಿ ಅವರು ಬೇಡ ಸಮುದಾಯದ ಅನನ್ಯತೆ, ಹೋರಾಟ ಹಾಗೂ ಪ್ರಸ್ತುತ ಸಂದರ್ಭದಲ್ಲಿ ತಳಸಮುದಾಯಗಳ ಸ್ಥಿತಿಗತಿಗಳನ್ನು ಅಧ್ಯಯನಕ್ಕೆ ಒಳಪಡಿಸಿದ್ದಾರೆ. ೪೭ ಲೇಖನಗಳನ್ನು ಒಳಗೊಂಡಿರುವ ಪ್ರಸ್ತುತ ಗ್ರಂಥ ಹಲಗಲಿ ಬಂಡಾಯ ವನ್ನು ಕುರಿತಂತೆ ಹಾಗೂ ಬಾಗಲಕೋಟೆಯ ಪರಿಸರದ ವಾಲ್ಮೀಕಿ ಸಮುದಾಯದ ಸ್ಥಿತಿಗತಿ ಗಳನ್ನು ಕುರಿತಂತೆ ವಿವರವಾಗಿ ತಿಳಿಸಿಕೊಟ್ಟಿದೆ. ಅಲ್ಲದೆ ಬಾಗಲಕೋಟೆ ಪರಿಸರದ ಬೇಡ ಸಮುದಾಯಕ್ಕೆ ಸಂಬಂಧಿಸಿದ ವಿಧಿ-ವಿಧಾನಗಳನ್ನು, ದೈವ ನಂಬಿಕೆಗಳನ್ನು, ಜಾತ್ರೆ ಉತ್ಸವ ಗಳನ್ನು ಪರಿಚಯಿಸಿದೆ. ವಿಶೇಷವಾಗಿ ಬೇಡ ಸಮುದಾಯದ ಪ್ರತೀಕವಾಗಿ ಸಿಂಧೂರ ಲಕ್ಷ್ಮಣನನ್ನು ಕುರಿತ ಸಾಹಿತ್ಯ ಮೂಲವಾದ, ಮೌಖಿಕ ಪರಂಪರೆಯಿಂದ ಬಂದಿರುವ ಹಾಗೂ ಜಾನಪದ ಆಕರಗಳ ಮುಖಾಂತರ ಅವನ ವ್ಯಕ್ತಿತ್ವವನ್ನು ಕಟ್ಟಿಕೊಡುವ ನೆಲೆಯಲ್ಲಿ ಪ್ರಸ್ತುತ ವಿಚಾರಸಂಕಿರಣದಲ್ಲಿ ಮಂಡಿಸಿದ ಲೇಖನಗಳನ್ನು ಇದು ಒಳಗೊಂಡಿದೆ. ಈ ಕೃತಿಯಲ್ಲಿ ಹಲಗಲಿ ಬಂಡಾಯವನ್ನು ಕುರಿತಂತೆ ಮಾಹಿತಿಯನ್ನು ನೀಡಲಾಗಿದೆ. ಸಿಂಧೂರ ಲಕ್ಷ್ಮಣನೇ ಇರಲಿ ಹಲಗಲಿ ಬಂಡಾಯದ ಸದಸ್ಯರೇ ಇರಲಿ ಬ್ರಿಟಿಷ್ ಆಳ್ವಿಕೆಯ ಸಂದರ್ಭದಲ್ಲಿ ಅಂದಿನ ಪರಿಸ್ಥಿತಿಗೆ ಪ್ರತಿರೋಧವನ್ನು ಒಡ್ಡಿದವರು. ಆಳರಸರ ಅವಕೃಪೆಗೆ ಪಾತ್ರರಾದವರು. ಹೀಗಾಗಿ ಅವರ ಎಲ್ಲ ಪ್ರತಿರೋಧಕ ಪ್ರಕ್ರಿಯೆಗಳನ್ನು ಆಡಳಿತ ನಕಾರವಾಗಿ ಗಮನಿಸುತ್ತದೆ. ಅಲ್ಲದೆ ಇವರೆಲ್ಲರನ್ನು ಸಮುದಾಯ ಘಾತಕರೆಂದು ಪರಿಗಣಿಸುವುದು ಸಹಜ. ಆದರೆ ದೇಶೀಯತೆಯ ಬಗ್ಗೆ, ದೇಶದ ಸ್ವಾತಂತ್ರ್ಯದ ಬಗ್ಗೆ ಕಾಳಜಿ ಇರುವಾಗ ಈ ಎಲ್ಲ ಕೃತ್ಯಗಳು ಸಕಾರಾತ್ಮಕವಾಗುತ್ತವೆ ಹಾಗೂ ಇವರನ್ನು ಸಮುದಾಯ ಚಿಂತಕರೆಂದು ಪರಿಗಣಿಸಬೇಕಾಗುತ್ತದೆ. ಈ ಸಮ್ಮೇಳನ ಇಂತಹ ವಾಸ್ತವತೆಯನ್ನು ಬಿಚ್ಚಿಡುವಲ್ಲಿ ಅತ್ಯಂತ ಸಹಕಾರಿಯಾಗುತ್ತದೆಂದು ಭಾವಿಸಿದ್ದೇನೆ. ವಾಲ್ಮೀಕಿ ಅಧ್ಯಯನ ಪೀಠ ಮುಂದಿನ ದಿನಗಳಲ್ಲಿ ತಳ ಸಮುದಾಯಗಳ್ನು ಕುರಿತಂತೆ ಇನ್ನಷ್ಟು ಅಧ್ಯಯನವನ್ನು ನಡೆಸುತ್ತದೆ ಎಂಬ ಭರವಸೆಯೊಂದಿಗೆ ನನ್ನ ಮಾತುಗಳನ್ನು ಮುಗಿಸುತ್ತೇನೆ. ನಮ್ಮ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಹಾಗೂ ವಾಲ್ಮೀಕಿ ಪೀಠದ ಸಂಚಾಲಕರೂ ಆಗಿದ್ದ ಡಾ. ಮಂಜುನಾಥ ಬೇವಿನಕಟ್ಟಿ ಅವರು ತುಂಬ ಪರಿಶ್ರಮದಿಂದ ಈ ಲೇಖನಗಳನ್ನು ಸಂಗ್ರಹಿಸಿಕೊಟ್ಟಿದ್ದಾರೆ. ಅದಕ್ಕಾಗಿ ಅವರಿಗೆ ಅಭಿನಂದನೆಗಳು.

ಈ ಗ್ರಂಥವನ್ನು ಅಚ್ಚುಕಟ್ಟಾಗಿ ಹೊರತರುತ್ತಿರುವ ಪ್ರಸಾರಾಂಗದ ನಿರ್ದೇಶಕರಾದ ಡಾ. ಎ. ಮೋಹನ ಕುಂಟಾರ್ ಮತ್ತು ಸಹಾಯಕ ನಿರ್ದೇಶಕರಾದ ಶ್ರೀ ಬಿ. ಸುಜ್ಞಾನ ಮೂರ್ತಿ ಅವರಿಗೆ ಅಭಿನಂದನೆಗಳು.

ಡಾ. ಎ. ಮುರಿಗೆಪ್ಪ
ಕುಲಪತಿ