ಕರ್ನಾಟಕದ ಆಧುನಿಕ ಚರಿತ್ರೆಯಲ್ಲಿ ಕರ್ನಾಟಕ ಏಕೀಕರಣ ಒಂದು ಮಹತ್ವಪೂರ್ಣ ಐತಿಹಾಸಿಕ ಘಟನೆ. ಹಾಗೆಯೇ ಕನ್ನಡ ವಿಶ್ವವಿದ್ಯಾಲಯದ ಸ್ಥಾಪನೆಯೂ ಮತ್ತೊಂದು ಮಹತ್ವದ ಘಟನೆ. ಕನ್ನಡ-ಕನ್ನಡಿಗ-ಕರ್ನಾಟಕ ಸಂಸ್ಕೃತಿಯ ಕಲ್ಪನೆಯಡಿಯಲ್ಲಿ ಅಸ್ತಿತ್ವಕ್ಕೆ ಬಂದ ಕನ್ನಡ ವಿಶ್ವವಿದ್ಯಾಲಯದ ಹರವು ವಿಸ್ತಾರವಾದದ್ದು. ಈ ಕಾರಣದಿಂದ ಕನ್ನಡ ವಿಶ್ವವಿದ್ಯಾಲಯದ ಆಶಯ ಮತ್ತು ಗುರಿ ಇತರ ವಿಶ್ವವಿದ್ಯಾಲಯಗಳಿಗಿಂತ ಭಿನ್ನ ಹಾಗೂ ಪ್ರಗತಿಪರ. ಕನ್ನಡದ ಸಾಮರ್ಥ್ಯವನ್ನು ಎಚ್ಚರಿಸುವ ಕಾಯಕವನ್ನು ಉದ್ದಕ್ಕೂ ಅದು ನೋಂಪಿಯಿಂದ ಮಾಡಿಕೊಂಡು ಬಂದಿದೆ. ಕರ್ನಾಟಕದ ‘ವಿಕಾಸ’ ಈ ವಿಶ್ವವಿದ್ಯಾಲಯದ ಮಹತ್ತರ ಆಶಯವಾಗಿದೆ.

ಕನ್ನಡ ಅಧ್ಯಯನ ಮೂಲತಃ ಶುದ್ಧ ಜ್ಞಾನದ, ಕಾಲ, ದೇಶ, ಜೀವನತತ್ವದ ಪರವಾಗಿರುವುದರ ಜೊತೆಗೆ ಅಧ್ಯಯನವನ್ನು ಒಂದು ವಾಗ್ವಾದದ ಭೂಮಿಕೆ ಎಂದು ನಾವು ಭಾವಿಸಬೇಕಾಗಿದೆ. ಕನ್ನಡ ಬದುಕಿನ ಚಿಂತನೆಯ ಭಾಗವೆಂದೇ ಅದನ್ನು ರೂಪಿಸಿ ವಿವರಿಸಬೇಕಾಗಿದೆ. ಅಂದರೆ: ದೇಸೀ ಬೇರುಗಳ ಗುರುತಿಸುವಿಕೆ ಕನ್ನಡ ಅಧ್ಯಯನದ ಮುಖ್ಯ ಭಿತ್ತಿಯಾಗಬೇಕಾಗಿದೆ. ಕನ್ನಡ ಸಂಸ್ಕೃತಿಯು ಬಹುತ್ವದ ನೆಲೆಗಳನ್ನು ಆಧರಿಸಿ ರೂಪುಗೊಂಡಿದೆ. ಸಮಾಜಮುಖಿ ಚಿಂತನೆಗಳ ವ್ಯಾಪಕ ಅಧ್ಯಯನ ಬದುಕಿನ ಸಂಕೀರ್ಣ ಲಕ್ಷಣಗಳ ಸ್ವರೂಪವನ್ನು ಇದು ಪರಿಚಯಿಸುತ್ತದೆ. ನಾವು ಇದನ್ನು ಎಲ್ಲ ವಲಯಗಳಲ್ಲಿ ಕನ್ನಡದ ಅನುಷ್ಠಾನದ ಮೂಲಕ ಉಳಿಸಿ, ಬೆಳೆಸಬೇಕಾಗಿದೆ. ಆಗ ಕನ್ನಡ ಸಂಸ್ಕೃತಿಯು ವಿಶ್ವಪ್ರಜ್ಞೆಯಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ‘ಕನ್ನಡದ್ದೇ ಮಾದರಿ’ಯ ಶೋಧ ಇಂದಿನ ಮತ್ತು ಬರುವ ದಿನಗಳ ತೀವ್ರ ಅಗತ್ಯವಾಗಿದೆ.

ಕನ್ನಡ ಸಂಸ್ಕೃತಿಯ ಭಾಗವಾಗಿರುವ ಕನ್ನಡ ಅಧ್ಯಯನವು ಕಾಲದಿಂದ ಕಾಲಕ್ಕೆ ಹೊಸ ತಿಳಿವಳಿಕೆಯನ್ನು ತನ್ನ ತೆಕ್ಕೆಗೆ ಜೋಡಿಸಿಕೊಳ್ಳುತ್ತ ಬಂದಿದೆ. ಹೀಗಾಗಿ ವಿದೇಶಿ ಮತ್ತು ದೇಶೀ ವಿದ್ವಾಂಸರು ತೊಡಗಿಸಿಕೊಂಡ ಈ ವಿದ್ವತ್‌ಕ್ಷೇತ್ರದಲ್ಲಿ ಮುಂದಿನ ವಿದ್ವಾಂಸರು ಕಾಲದಿಂದ ಕಾಲಕ್ಕೆ ಹೊಸಬೆಳೆಯನ್ನು ತೆಗೆಯುತ್ತ ಬಂದಿದ್ದಾರೆ. ಕನ್ನಡ ಅಧ್ಯಯನ ಪಳೆಯುಳಿಕೆಯ ಶಾಸ್ತ್ರವಾಗದೆ, ಬದಲಾಗುತ್ತಿರುವ ಕಾಲಮಾನದಲ್ಲಿ ಎದುರಾಗುತ್ತಿರುವ ಆಹ್ವಾನಕ್ಕೆ ತಕ್ಕಂತೆ ತನ್ನ ಗತಿಯನ್ನು ಬದಲಾಯಿಸಿಕೊಳ್ಳುತ್ತ ಬಂದಿರುವುದು ಗಮನಿಸತಕ್ಕ ಅಂಶ. ಸಾಂಪ್ರಾದಾಯಿಕ ಚಿಂತನೆಗಳು ಆಧುನೀಕರಣದ ಈ ಕಾಲಘಟ್ಟದಲ್ಲಿ ಸಕಾಲಿಕಗೊಳ್ಳುವುದು ಅನಿವಾರ್ಯವಾಗಿದೆ. ಮಾಹಿತಿ ತಂತ್ರಜ್ಞಾನದ ಮೂಲಕ ಜಗತ್ತಿನ ಜ್ಞಾನಪ್ರವಾಹವೇ ನಮ್ಮ ಅಂಗೈಯೊಳಗೆ ಚುಳುಕಾಗುವ ಈ ಸಂದರ್ಭದಲ್ಲಿ ಕನ್ನಡದ ಚಹರೆ ಮತ್ತು ಕನ್ನಡ ಭಾಷೆಯ ಚಲನಶೀಲತೆಯನ್ನು ಶೋಧಿಸಲಿಕ್ಕೆ ಭಾಷಾ ಆಧುನೀಕರಣ ಮತ್ತು ಪ್ರಮಾಣೀಕರಣದ ಪ್ರಕ್ರಿಯೆಗಳ ನೆಲೆಯಲ್ಲಿ ಅಧ್ಯಯನದ ಹೊಸ ಸಾಧ್ಯತೆಗಳನ್ನು ಅನುಲಕ್ಷಿಸಿ, ಭಾಷಾನೀತಿ, ಭಾಷಾಯೋಜನೆ ರೂಪಿಸುವುದು ಅನಿವಾರ್ಯ ಹಾಗೂ ಅವಶ್ಯವಾಗಿದೆ. ಆಗ ಅಧ್ಯಯನದ ಸ್ವರೂಪ ಹಾಗೂ ಬಳಕೆಯ ವಿಧಾನದಲ್ಲಿ ಪರಿವರ್ತನೆ ಸಾಧ್ಯವಾಗುತ್ತದೆ.

ನಮ್ಮೆದುರು ನುಗ್ಗಿ ಬರುತ್ತಿರುವ ಜಾಗತೀಕರಣಕ್ಕೆ ಪ್ರತಿರೋಧವಾಗಿ ನಮ್ಮ ದೇಶೀಯ ಜ್ಞಾಪರಂಪರೆಯನ್ನು ಮರುಶೋಧಿಸಿ ಆ ಮೂಲಕ ಕುಸಿಯುತ್ತಿರುವ ನಮ್ಮ ಬೇರುಗಳನ್ನು ಬಲಗೊಳಿಸಿಕೊಳ್ಳಬೇಕಾಗಿದೆ. ಭಾಷೆ, ಸಾಹಿತ್ಯ, ವ್ಯಾಕರಣ, ಛಂದಸ್ಸು, ಚರಿತ್ರೆ, ಕೃಷಿ, ವೈದ್ಯ, ಪರಿಸರ ಮುಂತಾದ ಅಧ್ಯಯನ ವಿಷಯಗಳನ್ನು ಹೊಸ ಆಲೋಚನೆಯ ನೆಲೆಯಲ್ಲಿ ವಿಶ್ಲೇಷಿಸಬೇಕಾಗಿದೆ. ಆಧುನಿಕ ವಿಜ್ಞಾನ, ತಂತ್ರಜ್ಞಾನವೇ ‘ಜ್ಞಾನ’ ಎಂದು ರೂಪಿಸಿರುವ ಇಂದಿನ ಆಲೋಚನೆಗೆ ಪ್ರತಿಯಾಗಿ ಈ ಜ್ಞಾನಶಾಖೆಗಳಲ್ಲಿ ಹುದುಗಿರುವ ದೇಶೀ ಪರಂಪರೆಯ ಜ್ಞಾನದ ಹುಡುಕಾಟ ನಡೆಯಬೇಕಾಗಿದೆ. ಅಂತಹ ಪ್ರಯತ್ನಗಳಿಗೆ ಬೇಕಾದ ಮಾರ್ಗದರ್ಶಕ ಸೂತ್ರಗಳ ಹಾಗೂ ಆಕರ ಪರಿಕರಗಳ ನಿರ್ಮಾಣದ ನೆಲೆ ತುಂಬ ಮುಖ್ಯವಾಗಿದೆ. ಕನ್ನಡ ವಿಶ್ವವಿದ್ಯಾಲಯವು ಕಳೆದ ಹದಿನಾರು ವರ್ಷಗಳಿಂದ ಈ ಕೆಲಸಗಳನ್ನು ಹಲವು ಯೋಜನೆಗಳ ಮೂಲಕ ರೂಪಿಸಿಕೊಂಡಿದೆ, ರೂಪಿಸಿಕೊಳ್ಳುತ್ತಿದೆ. ಇದೊಂದು ಚಲನಶೀಲ ಪ್ರಕ್ರಿಯೆಯಾಗಿದೆ. ಸಮಕಾಲೀನಭಾಷಿಕ, ಸಾಂಸ್ಕೃತಿಕ ಸಮಸ್ಯೆಗಳಿಗೆ ಮುಖಾಮುಖಿಯಾಗುತ್ತ ಕನ್ನಡ ನಾಡುನುಡಿಯನ್ನು ಹೊಸದಾಗಿ ಶೋಧಿಸುತ್ತಾ, ವಿವರಿಸುತ್ತಾ ಬಂದಿದೆ. ಅಂದರೆ: ಕನ್ನಡದ ಅರಿವಿನ ವಿಕೇಂದ್ರಿಕರಣವೇ ವರ್ತಮಾನದ ಹೊಸ ಬೆಳವಣಿಗೆ. ಇದು ಕನ್ನಡ ವಿಶ್ವವಿದ್ಯಾಲಯದ ಜೀವಧಾತುವಾಗಿದೆ.

ಡಾ.ಜಯಶ್ರೀ ಅರವಿಂದ್ ಅವರು ‘ಸುಗಮ ಸಂಗೀತ’ ಕ್ಷೇತ್ರದಲ್ಲಿ ಪರಿಚಿತ ಹೆಸರು. ಅವರು ಸಂಗೀತಗಾರರಾಗಿ, ಸಂಗೀತ ಸಂಯೋಜಕರಾಗಿ, ಸಂಗೀತ ತಜ್ಞೆಯಾಗಿ ಹೆಸರು ಪಡೆದಿದ್ದಾರೆ. ಕರ್ನಾಟಕದಲ್ಲಿ ಸುಗಮ ಸಂಗೀತದ ಹುಟ್ಟು ಮತ್ತು ಬೆಳವಣಿಗೆಯನ್ನು ಕುರಿತು ವಿಶೇಷ ಅಧ್ಯಯನ ಮಾಡಿ ಡಿ.ಲಿಟ್. ಪದವಿಯನ್ನು ಗಳಿಸಿದ್ದಾರೆ. ಸಂಗೀತವು ಮಾನವ ಸಮುದಾಯಕ್ಕೆ ಬೇಕು. ಇದು ಮಾನವನ ಮನಸ್ಸನ್ನು ಹದದಲ್ಲಿ ಇಡುತ್ತದೆ. ಸಂಗೀತ ಯಾರಿಗೆ ಬೇಕಿಲ್ಲ? ಮನುಷ್ಯನ ಬದುಕಿನೊಡನೆ ಸಂಗೀತವು ಬೆರೆತುಕೊಂಡಿದೆ. ಸಂಗೀತವು ಹಲವು ಶಾಖೆಗಳನ್ನು ಒಳಗೊಂಡಿದೆ. ಲಘುಶಾಸ್ತ್ರೀಯ ಸಂಗೀತ, ಚಲನಚಿತ್ರ ಸಂಗೀತ, ಸುಗಮ ಸಂಗೀತ, ಜನಪದ ಸಂಗೀತ, ನೃತ್ಯ ಸಂಗೀತ-ಹೀಗೆ ಹತ್ತಾರು ಶಾಖೆಗಳನ್ನು ಇದು ಒಳಗೊಂಡಿದೆ. ಡಾ.ಜಯಶ್ರೀ ಅರವಿಂದ್ ಅವರು ‘ಸುಗಮ ಸಂಗೀತ’ ಕುರಿತು ವಿವರಣಾತ್ಮಕವೂ ವಿಶ್ಲೇಷಣಾತ್ಮಕವೂ ಆದ ಅಧ್ಯಯನವನ್ನು ಮಾಡಿದ್ದಾರೆ. ತಮ್ಮ ಅಧ್ಯಯನದ ಫಲಿತಗಳನ್ನು ಹಲವು ರೀತಿಗಳಲ್ಲಿ ಸಂವಿಶ್ಲೇಷಣೆ ಮಾಡಿದ್ದಾರೆ. ಸುಗಮ ಸಂಗೀತದ ಹುಟ್ಟು ಮತ್ತು ಬೆಳವಣಿಗೆಯನ್ನು ಈ ಗ್ರಂಥದ ಮೂಲಕ ಅನಾವರಣ ಮಾಡಿದ್ದಾರೆ. ಶಾಸ್ತ್ರೀಯ ಸಂಗೀತಕ್ಕೂ ಸುಗಮ ಸಂಗೀತಕ್ಕೂ ಇರುವ ಸಂಬಂಧಗಳನ್ನು ಚರ್ಚಿಸಿರುವ ಭಾಗ ಗ್ರಾಹ್ಯವಾಗಿದೆ. ಜನಪದ ಸಂಗೀತಕ್ಕೂ ಸುಗಮ ಸಂಗೀತಕ್ಕೂ ಇರುವ ವ್ಯತ್ಯಾಸಗಳನ್ನು ಲೇಖಕಿ ಬಹು ಸಮರ್ಥವಾಗಿ ವಿಶ್ಲೇಷಿಸಿದ್ದಾರೆ. ಇಡೀ ಗ್ರಂಥವು ಹನ್ನೊಂದು ಅಧ್ಯಾಯಗಳನ್ನು ಹರಡಿಕೊಂಡಿದೆ. ಸಾಹಿತ್ಯಕ್ಕೂ ಸುಗಮ ಸಂಗೀತಕ್ಕೂ ಇರುವ ಸಾವಯವ ಸಂಬಂಧಗಳನ್ನು ಮೂರು, ನಾಲ್ಕು ಮತ್ತು ಐದನೆಯ ಅಧ್ಯಾಯಗಳಲ್ಲಿ ಹೊಚ್ಚ ಹೊಸದಾಗಿ ನಿರೂಪಿಸಿದ್ದಾರೆ. ಸುಗಮ ಸಂಗೀತ ಕುರಿತು ಇಂಥದ್ದೊಂದು ಮೌಲಿಕ ಗ್ರಂಥವನ್ನು ಕನ್ನಡ ವಿಶ್ವವಿದ್ಯಾಲಯಕ್ಕಾಗಿ ಸಿದ್ಧಪಡಿಸಿಕೊಟ್ಟ ವಿದುಷಿ ಡಾ. ಜಯಶ್ರೀ ಅರವಿಂದ್ ಅವರಿಗೆ ಅಭಿನಂದನೆಗಳು.

ಈ ಗ್ರಂಥವನ್ನು ಅಚ್ಚುಕಟ್ಟಾಗಿ ಹೊರತರುತ್ತಿರುವ ಪ್ರಸಾರಾಂಗದ ನಿರ್ದೇಶಕರಾದ ಪ್ರೊ. ಮಲ್ಲೇಪುರಂ ಜಿ.ವೆಂಕಟೇಶ ಮತ್ತು ಸಹಾಯಕ ನಿದೇರ್ಶಕರಾದ ಶ್ರೀ ಬಿ.ಸುಜ್ಞಾನಮೂರ್ತಿ ಅವರಿಗೆ ಅಭಿನಂದನೆಗಳು.

ಡಾ. . ಮುರಿಗೆಪ್ಪ
ಕುಲಪತಿ